ಚಿತ್ರದುರ್ಗದಲ್ಲಿ ಅಕ್ಟೋಬರ್ 28ರಂದು ಜಿಲ್ಲಾಡಳಿತವು ವಾಲ್ಮೀಕಿ ಜಯಂತಿ ಕಾರ್ಯಕ್ರಮ ಹಮ್ಮಿಕೊಂಡಿದೆ. ಕಾರ್ಯಕ್ರಮಕ್ಕೆ ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ ಕುಮಾರಸ್ವಾಮಿ ಹೇಳಿದ್ದಾರೆ.
ಚಿತ್ರದುರ್ಗ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅವರು ಮಾತನಾಡಿದರು. “ಅಕ್ಟೋಬರ್ 28 ರಂದು ಬೆಳಿಗ್ಗೆ 10 ಗಂಟೆಗೆ ಚಿತ್ರದುರ್ಗ ಕೋಟೆ ಮುಂಭಾಗದಿಂದ ಮಹರ್ಷಿ ವಾಲ್ಮೀಕಿ ಭಾವಚಿತ್ರದ ಮೆರವಣಿಗೆ ಪ್ರಾರಂಭವಾಗುತ್ತದೆ. ಮೆರವಣಿಗೆ ಆನೆಬಾಗಿಲು, ಗಾಂಧಿವೃತ್ತ, ಮದಕರಿ ನಾಯಕ ವೃತ್ತದ ಮೂಲಕ ತರಾಸು ರಂಗಮಂದಿರ ತಲುಪಲಿದೆ. ಮಧ್ಯಾಹ್ನ 12 ಗಂಟೆಗೆ ರಂಗಮಂದಿರದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ. ಮೆರವಣಿಗೆಯಲ್ಲಿ ಡೊಳ್ಳು, ವೀರಗಾಸೆ, ಖಾಸಬೇಡರ ಪಡೆ ಸೇರಿದಂತೆ ವಿವಿಧ ಕಲಾತಂಡಗಳು ಭಾಗವಹಿಸಲಿದ್ದಾರೆ” ಎಂದು ಹೇಳಿದರು.
“ಸರ್ಕಾರದ ಶಿಷ್ಟಾಚಾರದ ಅನುಸಾರ ಆಹ್ವಾನ ಪತ್ರಿಕೆ ಮುದ್ರಿಸಿ, ಜನಪ್ರತಿನಿಧಿಗಳನ್ನು ಜಯಂತಿಗೆ ಆಹ್ವಾನಿಸಲಾಗುವುದು. ಉತ್ತಮ ವಾಗ್ಮಿಗಳಿಂದ ಉಪನ್ಯಾಸ ಹಾಗೂ ಗೀತ ಗಾಯನ ಕಾರ್ಯಕ್ರಮ ಆಯೋಜಿಸಲಾಗುವುದು. ಸಮುದಾಯದಲ್ಲಿ ಸಾಧನೆ ತೋರಿದ ಸಾಧಕರಿಗೆ ಸನ್ಮಾನಿಸಲಾಗುವುದು” ಎಂದು ತಿಳಿಸಿದರು.
“ನಗರಸಭೆ ಅಧಿಕಾರಿಗಳು ರಂಗಮಂದಿರದ ಸ್ವಚ್ಛತೆಗೆ ಗಮನ ಕೊಡಬೇಕು. ಶುದ್ಧ ಕುಡಿಯುವ ನೀರಿನ ಪೂರೈಕೆಗೆ ವ್ಯವಸ್ಥೆ ಕಲ್ಪಿಸಬೇಕು. ತೋಟಗಾರಿಕೆ ಇಲಾಖೆಯಿಂದ ವೇದಿಕೆ ಕಾರ್ಯಕ್ರಮಕ್ಕೆ ಹೂವಿನ ಕುಂಡಗಳನ್ನು ನೀಡಬೇಕು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇಲಾಖೆ ಅಧಿಕಾರಿಗಳು ರಂಗಮಂದಿರ ಕಾಯ್ದಿರಿಸುವುದರೊಂದಿಗೆ ಅಗತ್ಯ ಕಲಾತಂಡದ ವ್ಯವಸ್ಥೆ ಮಾಡಬೇಕು. ಪೊಲೀಸ್ ಇಲಾಖೆಯು ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಬೇಕು” ಎಂದು ಸೂಚಿಸಿದರು.
“ವಾಲ್ಮೀಕಿ ಕೇವಲ ಒಂದು ಸಮುದಾಯಕ್ಕೆ ಸೀಮಿತವಾಗಿಲ್ಲ. ಹೀಗಾಗಿ, ಎಲ್ಲರನ್ನೂ ಒಳಗೊಂಡು ಜಿಲ್ಲೆಯಲ್ಲಿ ಕಾರ್ಯಕ್ರಮ ನಡೆಸಬೇಕು. ವಸತಿ ನಿಲಯ ಹಾಗೂ ಶಾಲಾ ವಿದ್ಯಾರ್ಥಿಗಳಿಗೆ ಭಾಷಣ, ಪ್ರಬಂಧ, ಉಪನ್ಯಾಸ ಮಾಲಿಕೆ ಕಾರ್ಯಕ್ರಮ ಹಮ್ಮಿಕೊಂಡು ವಾಲ್ಮೀಕಿ ಕುರಿತು ಅರಿವು ಮೂಡಿಸಬೇಕು” ಎಂದು ಹೇಳಿದರು.
ಸಭೆಯಲ್ಲಿ ಜಿಲ್ಲಾ ನಾಯಕ ಸಮಾಜದ ಅಧ್ಯಕ್ಷ ಹೆಚ್.ಜೆ.ಕೃಷ್ಣಮೂರ್ತಿ, ತಾಲ್ಲೂಕು ನಾಯಕ ಸಮಾಜದ ಅಧ್ಯಕ್ಷ ಬಿ.ಕಾಂತರಾಜ್, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಓ.ಪರಮೇಶ್ವರಪ್ಪ, ನಗರಸಭೆ ಆಯುಕ್ತ ರೇಣುಕಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಮಲ್ಲಿಕಾರ್ಜುನ, ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಸೇರಿದಂತೆ ಸಮಾಜದ ಮುಖಂಡರಾದ ಗೋಪಾಲಸ್ವಾಮಿ ನಾಯಕ, ಎಸ್.ಸಂದೀಪ್, ಜಿಲ್ಲಾ ನಾಯಕ ನೌಕರರ ಸಂಘದ ಅಧ್ಯಕ್ಷ ಡಾ.ಹೆಚ್.ಗುಡ್ಡದೇಶ್ವರಪ್ಪ ಸೇರಿದಂತೆ ಮತ್ತಿತರರು ಇದ್ದರು.