ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ವರುಣಾ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಏಚಗಳ್ಳಿ ಗ್ರಾಮದಲ್ಲಿ ಕ್ಷೇತ್ರದ ಮಾಜಿ ಶಾಸಕ ಹಾಗೂ ಆಶ್ರಯ ಸಮಿತಿಯ ಅಧ್ಯಕ್ಷ ಡಾ. ಯತೀಂದ್ರ ಸಿದ್ದರಾಮಯ್ಯನವರು ಗ್ರಾಮದಲ್ಲಿ ಏರ್ಪಡಿಸಿದ್ದ ಜನಸ್ಪಂದನ ಕಾರ್ಯಕ್ರಮದಲ್ಲಿ ಸಾರ್ವಜನಿಕರ ಕುಂದುಕೊರತೆ ಸಮಸ್ಯೆಗಳನ್ನು ಆಲಿಸಿದರು.
ಸಭೆಯಲ್ಲಿ “ಭಾಗ್ಯ ಜ್ಯೋತಿಯ ಕರೆಂಟ್ ಬಿಲ್ ಬಾಕಿ ಇದೆಯೆಂದು ಕೆಇಬಿ ಅಧಿಕಾರಿಗಳು ನಮ್ಮ ಮನೆಯ ವಿದ್ಯುತ್ ಸಂಪರ್ಕ ಕಡಿತ ಮಾಡುತ್ತಿದ್ದಾರೆ. ದಯಮಾಡಿ ಭಾಗ್ಯ ಜ್ಯೋತಿಯ ಹಳೇ ಬಾಕಿಯನ್ನು ಸರ್ಕಾರದಿಂದ ಮನ್ನಾ ಮಾಡಿಸಿ, ವಿದ್ಯುತ್ ಸಂಪರ್ಕ ಕಡಿತಗೊಳಿಸದಂತೆ ಕೆಇಬಿ ಅಧಿಕಾರಿಗಳಿಗೆ ಸೂಚನೆ ನೀಡಬೇಕು” ಎಂದು ಸಾರ್ವಜನಿಕರು ಹಾಗೂ ಭಾಗ್ಯ ಜ್ಯೋತಿಯ ಫಲಾನುಭವಿಗಳು ಯತೀಂದ್ರ ಅವರಲ್ಲಿ ಮನವಿ ಮಾಡಿದರು.
ಮನವಿ ಸ್ವೀಕರಿಸಿದ ಮಾಜಿ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯನವರು ಸ್ಥಳದಲ್ಲಿ ಇದ್ದ ಕೆಇಬಿ ಅಧಿಕಾರಿ ಜೊತೆ ಮಾತನಾಡಿ, “ಈಗಾಗಲೇ ನಮ್ಮ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಗೃಹ ಜ್ಯೋತಿ ಯೋಜನೆಯಲ್ಲಿ ಎಲ್ಲರಿಗೂ ಉಚಿತ ವಿದ್ಯುತ್ ನೀಡಲಾಗುತ್ತಿದ್ದು, ಭಾಗ್ಯಜ್ಯೋತಿಯ ಫಲಾನುಭವಿಗಳು ಹಳೆಯ ವಿದ್ಯುತ್ ಬಿಲ್ ಪಾವತಿಸಿಲ್ಲವೆಂದು ಅವರ ಮನೆಯ ವಿದ್ಯುತ್ ಸಂಪರ್ಕ ಕಡಿತಗೊಳಿಸಬೇಡಿ. ಈ ಬಗ್ಗೆ ಸಂಬಂಧಪಟ್ಟ ಮಂತ್ರಿಗಳು ಮತ್ತು ಅಧಿಕಾರಿಗಳ ಜೊತೆ ಮಾತನಾಡುತ್ತೇನೆ. ಒಂದು ವೇಳೆ ಮತ್ತೆ ನೀವು ವಿದ್ಯುತ್ ಸಂಪರ್ಕ ಕಡಿತಗೊಳಿಸಿದರೆ ನಿಮ್ಮ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕಾಗುತ್ತದೆ” ಎಂದು ತಿಳಿಸಿದರು.
ಈ ಸುದ್ದಿ ಓದಿದ್ದೀರಾ? ಮಂಡ್ಯ | ಅನಿಷ್ಠ ಪದ್ಧತಿಗಳ ನಿರ್ಮೂಲನೆಗೆ ಎಲ್ಲರ ಸಹಕಾರ ಅಗತ್ಯ
“ಗ್ರಾಮದಲ್ಲಿ ಹಲವಾರು ಸಮಸ್ಯೆಗಳನ್ನು ಪರಿಹರಿಸಿ ಮೂಲ ಸೌಲಭ್ಯಗಳನ್ನು ದೊರಕಿಸಿ ಕೊಡುವಂತೆ ನನ್ನ ಗಮನಕ್ಕೆ ತಂದಿದ್ದೀರಿ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿಯ ಅಧಿಕಾರಿಗಳ ಜೊತೆ ಮಾತನಾಡಿ ಕ್ರಮ ಕೈಗೊಳ್ಳಲಾಗುತ್ತದೆ” ಎಂದು ಗ್ರಾಮಸ್ಥರಿಗೆ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ತಗಡೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಂಗಸ್ವಾಮಿ, ಕೆಪಿಸಿಸಿ ಕಾರ್ಯದರ್ಶಿ ಎಸ್ ಸಿ ಬಸವರಾಜು, ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಬಿ ಎಂ ರಾಮು, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ರೇವಮ್ಮ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಮಹದೇವಮ್ಮ, ಕಾಂಗ್ರೆಸ್ ಮುಖಂಡ ದಕ್ಷಿಣ ಮೂರ್ತಿ ದೊರೆಸ್ವಾಮಿ, ಗ್ರಾಮದ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ವೈ ಕೆ ಮಹದೇವಪ್ಪ, ತಾಂಡವಪುರ ಗ್ರಾಮ ಪಂಚಾಯತಿ ಉಪಾಧ್ಯಕ್ಷ ಬಿ ಶಿವಣ್ಣ, ಮಾಜಿ ಅಧ್ಯಕ್ಷ ಕಾಮರಾಜು ಬಿ ಸೇರಿದಂತೆ ಇತರರು ಇದ್ದರು.