- 1,242 ಸಹಾಯಕ ಪ್ರಾಧ್ಯಾಪಕರ ನೇರ ನೇಮಕಾತಿ
- ಅರ್ಹ ಅಭ್ಯರ್ಥಿಗಳ ಆಯ್ಕೆ ಮಾಡಿ ಸರ್ಕಾರಕ್ಕೆ ಸಲ್ಲಿಕೆ
ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ತ್ವರಿತವಾಗಿ ನೇಮಕಾತಿ ಆದೇಶ ನೀಡಲು ಕ್ರಮಕೈಗೊಳ್ಳುವಂತೆ ಉನ್ನತ ಶಿಕ್ಷಣ ಇಲಾಖೆಯ
ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗೆ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಸೂಚಿಸಿದ್ದಾರೆ.
ಈ ಕುರಿತು ಪತ್ರ ಬರೆದಿರುವ ಸಚಿವರು, ಸದರಿ ನೇಮಕಾತಿ ಪ್ರಕ್ರಿಯೆ ಪ್ರಾರಂಭವಾಗಿ ಮೂರು ವರ್ಷಗಳು ಸಮೀಪಿಸುತ್ತಿದ್ದು ಇನ್ನು ವಿಳಂಬಕ್ಕೆ ಅವಕಾಶ ನೀಡದೇ ಆಯ್ಕೆಯಾದ ಅಭ್ಯರ್ಥಿಗಳಿಗೆ ಆದೇಶ ಹೊರಡಿಸಲು ನಿಯಮಾನುಸಾರ ಕೈಗೊಳ್ಳಬೇಕಾದ ಪೂರ್ವಭಾವಿ ಎಲ್ಲ ಅಗತ್ಯ ಕ್ರಮಗಳನ್ನು ತ್ವರಿತವಾಗಿ ಕೈಗೊಳ್ಳುವಂತೆ ಸೂಚಿಸಿದ್ದಾರೆ.
ಉನ್ನತ ಶಿಕ್ಷಣ ಇಲಾಖೆಯ ವ್ಯಾಪ್ತಿಗೆ ಬರುವ ಕಾಲೇಜು ಶಿಕ್ಷಣ ಇಲಾಖೆಯಲ್ಲಿ 1,242 ಸಹಾಯಕ ಪ್ರಾಧ್ಯಾಪಕರನ್ನು ನೇರ ನೇಮಕಾತಿ ಮಾಡಿಕೊಳ್ಳಲು ಆದೇಶಿಸಲಾಗಿತ್ತು. ಅದರಂತೆ 2021ನೇ ಸಾಲಿನಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸ್ಪರ್ಧಾತ್ಮಕ ಪರೀಕ್ಷೆ ಮುಖಾಂತರ 1242 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ನಿಯಮಾನುಸಾರ ಆಯ್ಕೆ ಮಾಡಿ ಸರ್ಕಾರಕ್ಕೆ ಸಲ್ಲಿಸಿರುವುದು ಕಂಡುಬಂದಿದೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸರ್ಕಾರವೇನೋ ಬದಲಾಯಿತು, ಕೋಮುವಾದಿಗಳ ಅಟಾಟೋಪಗಳಿಗೆ ಅಂಕುಶ ಯಾವಾಗ?
ಸದರಿ ವಿಷಯಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ದಾಖಾಲಾದ ಪ್ರಕರಣ ಬಾಕಿಯಿದ್ದು, ಈಗಾಗಲೇ ದೋಷಿಗಳನ್ನು ಗುರುತಿಸಿ ಅವರ ಮೇಲೆ ಮೊಕದ್ದಮೆ ದಾಖಲಿಸಿ, ದೋಷಾರೋಪಣ ಪಟ್ಟಿ ಸಲ್ಲಿಸಲಾಗಿದೆ. ಆರೋಪಿಗಳು ನ್ಯಾಯಾಲಯದಲ್ಲಿ ಜಾಮೀನು ಪಡೆದಿದ್ದು ಪ್ರಕರಣ ವಿಚಾರಣೆಯಲ್ಲಿದೆ.
ಇದಲ್ಲದೇ ಪ್ರಸಕ್ತ ನೇಮಕಾತಿಗೆ ಸಂಬಂಧಿಸಿದಂತೆ ಬೇರೆ ಯಾವುದೇ ಪ್ರಕರಣಗಳು ತನಿಖಾಧಿಕಾರಿಗಳ ಮುಂದೆ ಇರುವುದಿಲ್ಲವೆಂದು ಹಾಗೂ ಮೀಸಲಾತಿ ಸಂಬಂಧಪಟ್ಟ, ಪ್ರಕರಣವು ನ್ಯಾಯಾಲಯದಲ್ಲಿ ಇತ್ತೀಚೆಗೆ ಇತ್ಯರ್ಥವಾಗಿರುವುದು ತಿಳಿದುಬಂದಿದೆ. ಈ ಸಂಬಂಧ ಆಯ್ಕೆಯಾದ ಅಭ್ಯರ್ಥಿಗಳು ಸಚಿವರಿಗೆ ಹಾಗೂ ಜನಪ್ರತಿನಿಧಿಗಳಿಗೆ ಅನೇಕ ಮನವಿಗಳನ್ನು ಸಲ್ಲಿಸಿದ್ದರು.