ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧದ ತನಿಖೆಗೆ ನೀಡಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಹೈಕೋರ್ಟ್ ಹಿಂಪಡೆದಿದೆ. ಸಿಬಿಐ ತನಿಖೆಗೆ ಅನುಮತಿ ನೀಡಿದ್ದು, ಮೂರು ತಿಂಗಳಲ್ಲಿ ತನಿಖೆ ಪೂರ್ಣಗೊಳಿಸುವಂತೆ ನಿರ್ದೇಶನ ನೀಡಿದೆ.
ತಮ್ಮ ವಿರುದ್ಧದ ಭ್ರಷ್ಟಾಚಾರ ಪ್ರಕರಣದ ತನಿಖೆ ನಡೆಸದಂತೆ ಕೋರಿ ಡಿ.ಕೆ ಶಿವಕುಮಾರ್ ಅರ್ಜಿ ಸಲ್ಲಿಸಿದ್ದರು. ಫೆಬ್ರವರಿಯಲ್ಲಿ ಅರ್ಜಿಯ ವಿಚಾರಣೆ ನಡೆಸಿದ್ದ ಹೈಕೋರ್ಟ್, ತನಿಖೆಗೆ ಮಧ್ಯಂತರ ತಡೆಯಾಜ್ಞೆ ನೀಡಿತ್ತು. ಅಲ್ಲದೆ, ಭ್ರಷ್ಟಾಚಾರ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಕ್ರಮ ಕೈಗೊಂಡ ಬಗ್ಗೆ ವರದಿ ಸಲ್ಲಿಸುವಂತೆ ತನಿಖಾ ಸಂಸ್ಥೆಗೆ ಸೂಚಿಸಿತ್ತು. ಇದೀಗ, ತನಿಖೆಗೆ ಅನುಮತಿ ನೀಡಿದೆ.
ಸಿಬಿಐ ಪರ ವಕೀಲ ಪಿ.ಪ್ರಸನ್ನ ಕುಮಾರ್ ವಾದವನ್ನು ಆಲಿಸಿದ ಬಳಿಕ ತೀರ್ಪು ನೀಡಿರುವ ನ್ಯಾಯಮೂರ್ತಿ ಕೆ. ನಟರಾಜನ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ‘ಶಿವಕುಮಾರ್ ತನಿಖೆ ರದ್ದುಪಡಿಸುವಂತೆ ತಡವಾಗಿ ಅರ್ಜಿ ಸಲ್ಲಿದ್ದಾರೆ. ಆದರೆ, ತನಿಖೆ ಈಗಾಗಲೇ ಭಾಗಶಃ ಪೂರ್ಣಗೊಂಡಿದೆ. ತನಿಖೆಗೆ ಹಾಜರಾಗಿ ಅವರು ತಮ್ಮ ವಿವರಣೆ ಮತ್ತು ಹೇಳಿಕೆಯನ್ನೂ ದಾಖಲಿಸಿದ್ದಾರೆ. ಇದನ್ನೆಲ್ಲಾ ದಾಖಲಿಕೊಂಡಿರುವ ತನಿಖಾಧಿಕಾರಿ ಪ್ರಕರಣದ ಪರಿಶೀಲನೆಯನ್ನೂ ನಡೆಸಿದ್ದಾರೆ. ಇಂತಹ ಸಂದರ್ಭದಲ್ಲಿ ನ್ಯಾಯಾಲಯ ತನಿಖೆ ರದ್ದುಪಡಿಸಲು ಆಗದು’ ಎಂದು ಅಭಿಪ್ರಾಯಪಟ್ಟಿದೆ.
‘ಸಿಬಿಐ ದೋಷಾರೋಪ ಪಟ್ಟಿ ಸಲ್ಲಿಸಿದರೆ, ಅದನ್ನು ರದ್ದುಪಡಿಸಲು ಅಥವಾ ತಮ್ಮ ಮೇಲಿನ ಆರೋಪಗಳನ್ನು ಕೈ ಬಿಡುವಂತೆ ಕೋರಲು ಶಿವಕುಮಾರ್ ಸ್ವತಂತ್ರರಾಗಿದ್ದಾರೆ’ ಎಂದು ನ್ಯಾಯಪೀಠ ಹೇಳಿದೆ.
ಈ ನಡುವೆ, ಮಧ್ಯಂತರ ತಡೆಯಾಜ್ಞೆಯನ್ನು ಪ್ರಶ್ನಿಸಿ ಸಿಬಿಐ, ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಆದರೆ, ಪ್ರಕರಣದಲ್ಲಿ ಹೈಕೋರ್ಟ್ ನೀಡಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಹಿಂಪಡೆಯಲು ಸುಪ್ರೀಂ ಕೋರ್ಟ್ ನಿರಾಕರಿಸಿತ್ತು.
ಏನಿದು ಪ್ರಕರಣ?
ಡಿಕೆ ಶಿವಕುಮಾರ್ ಅವರು 2013 ರಿಂದ 2018ರ ನಡುವಿನ ಅವಧಿಯಲ್ಲಿ ತಮ್ಮ ಆದಾಯಕ್ಕೂ ಮೀರಿದ ಸಂಪತ್ತು ಗಳಿಸಿದ್ದಾರೆ ಎಂದು ಆರೋಪಿಸಲಾಗಿದೆ. ಆರೋಪಕ್ಕೆ ಸಬಂಧಿಸಿದಂತೆ ಸಿಬಿಐ, ಭ್ರಷ್ಟಾಚಾರ ನಿಗ್ರಹ ಕಾಯ್ದೆ-1988ರ ವಿವಿಧ ಕಲಂಗಳ ಅಡಿಯಲ್ಲಿ 2020ರ ಅಕ್ಟೋಬರ್ 3 ರಂದು ಪ್ರಕರಣ ದಾಖಲಿಸಿದೆ.
2017ರಲ್ಲಿ ಆದಾಯ ತೆರಿಗೆ ಇಲಾಖೆ ನಡೆಸಿದ ಶೋಧದ ಬಳಿಕ ಶಿವಕುಮಾರ್ ವಿರುದ್ಧ ಭ್ರಷ್ಟಾಚಾರ ಪ್ರಕರಣ ದಾಖಲಾಗಿತ್ತು.