ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತು ಎಂಡಿಎಂಎ(ಮೆಥಿಲೀನ್ ಡೈಆಕ್ಸಿ ಮೆಥಾಂಫೆಟಮೈನ್)ಯನ್ನು ಮಾರಾಟ ಮಾಡುತ್ತಿದ್ದವನನ್ನು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಸಿಸಿಬಿ ಪೊಲೀಸರು ದಸ್ತಗಿರಿ ಮಾಡಿದ್ದಾರೆ.
ಈ ಹಿಂದೆ ಹಲವು ಮಾದಕ ವಸ್ತು ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿದ್ದ ವ್ಯಕ್ತಿಯೊಬ್ಬ ಮಂಗಳೂರಿನ ಉಳ್ಳಾಲ ಠಾಣಾ ವ್ಯಾಪ್ತಿಯ ದೇರಳಕಟ್ಟೆಯಲ್ಲಿ ಮಾದಕ ವಸ್ತುವನ್ನು ಮಾರಾಟ ಮಾಡುತ್ತಿದ್ದನು. ಈ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಎಂಡಿಎಂಎ ಎಂಬ ನಿಷೇದಿತ ಮಾದಕ ವಸ್ತುವನ್ನು ಮಾರಾಟ ಮಾಡುತ್ತಿದ್ದ ಉಳ್ಳಾಲ ತಾಲೂಕಿನ ಅಬ್ದುಲ್ ಅಜೀಜ್ ಯಾನೆ ಪೋಕರ್ ಅಜೀಜ್(42) ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ.
ಆರೋಪಿಯಿಂದ ಒಟ್ಟು 26 ಗ್ರಾಂ ತೂಕದ 1,30,000 ರೂ. ಮೌಲ್ಯದ ಎಂಡಿಎಂಎ ಮಾದಕ ವಸ್ತು, ಮಾದಕ ವಸ್ತು ಸಾಗಾಟಕ್ಕೆ ಉಪಯೋಗಿಸಿದ ಕಾರು, 2 ಮೊಬೈಲ್ ಫೋನ್‌ಗಳು ಸೇರಿದಂತೆ ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಂಡಿದ್ದಾರೆ.
ವಶಪಡಿಸಿಕೊಂಡ ಸೊತ್ತುಗಳ ಅಂದಾಜು ಮೊತ್ತ ₹6.41 ಲಕ್ಷ ಆಗಬಹುದೆಂದು ಅಂದಾಜಿಸಿದ್ದಾರೆ. ಆರೋಪಿಯ ವಿರುದ್ಧ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಈ ಮಾದಕ ವಸ್ತು ಮಾರಾಟ ಪ್ರಕರಣದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಪತ್ತೆ ಕಾರ್ಯ ಮುಂದುವರಿದಿದೆ.
ಈ ಸುದ್ದಿ ಓದಿದ್ದೀರಾ? ಮಾಜಿ ಸ್ಪೀಕರ್ ರಮೇಶ್ ಕುಮಾರ್ ಆಪ್ತ ಶ್ರೀನಿವಾಸ್ ಕೊಲೆ
ಈತನ ವಿರುದ್ಧ ಈ ಹಿಂದೆ ಉಳ್ಳಾಲ, ಕೊಣಾಜೆ ಮತ್ತು ಕಾವೂರು ಪೊಲೀಸ್ ಠಾಣೆಯಲ್ಲಿ ಒಟ್ಟು 7 ಮಾದಕ ವಸ್ತು ಮಾರಾಟ ಪ್ರಕರಣಗಳು ದಾಖಲಾಗಿದ್ದು, ಈತನು ಪ್ರಕರಣದಲ್ಲಿ ಭಾಗಿಯಾಗಿ ನ್ಯಾಯಾಂಗ ಬಂಧನದಲ್ಲಿದ್ದ ಸಮಯದಲ್ಲಿ ಅಲ್ಲಿಯ ಕಾರಾಗೃಹ ಸಿಬ್ಬಂದಿಯವರ ಕರ್ತವ್ಯಕ್ಕೆ ಅಡ್ಡಿಪಡಿಸಿ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ ಪ್ರಕರಣವೂ ದಾಖಲಾಗಿದೆ.
ಪತ್ತೆ ಕಾರ್ಯವನ್ನು ಮಂಗಳೂರು ನಗರದ ಮಾನ್ಯ ಪೊಲೀಸ್ ಆಯುಕ್ತರವರಾದ ಅನುಪಮ್ ಅಗರ್ ವಾಲ್ ಮಾರ್ಗದರ್ಶನದಲ್ಲಿ, ಸಿಸಿಬಿ ಘಟಕದ ಅಧಿಕಾರಿ ಮತ್ತು ಸಿಬ್ಬಂದಿ ನಡೆಸಿರುತ್ತಾರೆ.