ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ಮರುನಾಮಕರಣವಾಗಿ 50 ವರ್ಷ ತುಂಬಿದ ಹಿನ್ನೆಲೆಯಲ್ಲಿ ಸಂಭ್ರಮಾಚರಣೆ ಕಾರ್ಯಕ್ರಮವನ್ನು ನವೆಂಬರ್ 2ರಿಂದ ರಾಜ್ಯಾದ್ಯಂತ ವರ್ಷಪೂರ್ತಿ ಆಚರಿಸಲಾಗುತ್ತಿದೆ.
ಗದಗ ನಗರದಲ್ಲಿ ನವಂಬರ್ 3ರಂದು ಸಂಭ್ರಮಾಚರಣೆ ಕಾರ್ಯಕ್ರಮ ಜರುಗಲಿದ್ದು, ಸಂಭ್ರಮಾಚರಣೆ ವೇದಿಕೆ ಕಾರ್ಯಕ್ರಮದ ಸ್ಥಳವನ್ನು ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್ ಕೆ ಪಾಟಿಲ್ ಅವರು ಪರಿಶೀಲಿಸಿದರು.
ಈ ಸಂಭ್ರಮಾಚರಣೆ ಅದ್ದೂರಿಯಿಂದ ಜರುಗಬೇಕು. ಅದಕ್ಕಾಗಿ ಅಗತ್ಯವಿರುವ ಎಲ್ಲ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳುವ ಮೂಲಕ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
“ನವೆಂಬರ್ 3ರ ಬೆಳಗ್ಗೆ ಗದಗಿನ ವೀರನಾರಾಯಣ ದೇವಸ್ಥಾನದಿಂದ ಮೆರವಣಿಗೆ ಆರಂಭವಾಗಲಿದೆ. ಮೆರವಣಿಗೆಯಲ್ಲಿ ಜಾನಪದ ಕಲಾತಂಡಗಳು, ಸ್ತಬ್ಧ ಚಿತ್ರಗಳು, ಕನ್ನಡಕ್ಕಾಗಿ ಸೇವೆ ಸಲ್ಲಿಸಿದ ಮಹನೀಯರ ಚಿತ್ರಗಳ ಮೆರವಣಿಗೆ ನಡೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕನ್ನಡ ಜ್ಯೋತಿಗೆ ಸ್ವಾಗತಿಸಿ, ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸುವ ಮೂಲಕ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ” ಎಂದು ತಿಳಿಸಿದರು.
ಮೆರವಣಿಗೆಯು ಐತಿಹಾಸಿಕ ವೀರನಾರಾಯಣ ದೇವಸ್ಥಾನದಿಂದ ಆರಂಭವಾಗಿ ಜಾಮಿಯಾ ಮಸೀದಿ, ಬಸವೇಶ್ವರ ವೃತ್ತ, ಕೆ ಎಚ್ ಪಾಟೀಲ ವೃತ್ತ, ಭೂಮ ರೆಡ್ಡಿ ಸರ್ಕಲ್, ಜನರಲ್ ಕಾರ್ಯಪ್ಪ ಸರ್ಕಲ್ ಮಾರ್ಗವಾಗಿ ನಗರದ ಕಾಟನ್ ಸೇಲ್ ಸೊಸೈಟಿ ಆವರಣ ತಲುಪಲಿದೆ. ನಂತರ ವೇದಿಕೆ ಕಾರ್ಯಕ್ರಮ ಜರಗಲಿದೆ ಎಂದರು.
ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಸೇರಿದಂತೆ ಇತರೆ ಗಣ್ಯರು ಆಗಮಿಸಲಿದ್ದಾರೆ. ಶಿಷ್ಟಾಚಾರದ ಅನ್ವಯ ಕಾರ್ಯಕ್ರಮ ಅರ್ಥಪೂರ್ಣವಾಗಿ ಜರಗಬೇಕು ಎಂದು ಸಚಿವ ಎಚ್ ಕೆ ಪಾಟಿಲ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಸುದ್ದಿ ಓದಿದ್ದೀರಾ? ಮೈಸೂರು | ದಸರಾ ಜಂಬೂಸವಾರಿ; 49 ಸ್ತಬ್ಧ ಚಿತ್ರಗಳ ಪ್ರದರ್ಶನ
ಸ್ಥಳ ಪರಿಶೀಲನಾ ಸಂದರ್ಭದಲ್ಲಿ ಜಿಲ್ಲಾಧಿಕಾರಿ ವೈಶಾಲಿ ಎಂ ಎಲ್, ಜಿಲ್ಲಾ ಪೊಲೀಸ್ ಅಧೀಕ್ಷಕ ಬಾಬಾಸಾಬ್ ನೇಮಗೌಡ, ಗದಗ ಬೆಟಗೇರಿ ನಗರಸಭೆ ಪೌರಾಯುಕ್ತ ಗಂಗಪ್ಪ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಾರುತಿ ಬ್ಯಾಕೋಡ್, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಅಭಿಯಂತರ ರಮೇಶ್ ಪಾಟಿಲ, ನಿರ್ಮಿತಿ ಕೇಂದ್ರದ ವ್ಯವಸ್ಥಾಪಕ ನಿರ್ದೇಶಕ ಗಂಗಾಧರ್ ಶಿರೋಳ್, ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕ ಕೊಟ್ರಪ್ಪ ವಿಭೂತಿ, ವಾರ್ತಾಧಿಕಾರಿ ವಸಂತ ಮಡ್ಲೂರು, ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಶರಣು ಗೋಗೇರಿ ಸೇರಿದಂತೆ ಗಣ್ಯರುಗಳಾದ ಪ್ರಭು ಬುರಬುರೆ, ಸಿದ್ದು ಪಾಟೀಲ್, ಬಿ ಬಿ ಅಸೂಟಿ ಇದ್ದರು.