ಕೊರಳಲ್ಲಿ ಹುಲಿ ಉಗುರು ಧರಿಸಿದ್ದ ಕಾರಣಕ್ಕೆ ಬಿಗ್ ಬಾಸ್‌ನ ಸ್ಪರ್ಧಿಯಾಗಿದ್ದ ವರ್ತೂರು ಸಂತೋಷ್ ಬಂಧನದ ಬಳಿಕ ರಾಜ್ಯದಲ್ಲಿ ಹುಲಿ ಉಗುರು ಪ್ರಕರಣ ದೊಡ್ಡ ವಿವಾದವಾಗಿ ಪರಿಣಮಿಸಿದೆ.
ಉಗುರು, ಚರ್ಮ ಧರಿಸಿದ್ದವರ ವಿರುದ್ಧ ಕ್ರಮ ಕೈಗೊಳ್ಳುವ ಕುರಿತು ಚರ್ಚೆ, ಆಗ್ರಹಗಳು ಕೇಳಿ ಬಂದಿರುವ ನಡುವೆಯೇ ನಟ ದರ್ಶನ್, ನಿರ್ದೇಶಕ ರಾಕ್‌ಲೈನ್ ವೆಂಕಟೇಶ್, ಸಂಸದ ಜಗ್ಗೇಶ್, ವಿನಯ್ ಗುರೂಜಿ, ನಿಖಿಲ್ ಕುಮಾರಸ್ವಾಮಿ ಸೇರಿದಂತೆ ಸ್ಯಾಂಡಲ್‌ವುಡ್ ನಟರು ಹಾಗೂ ರಾಜಕಾರಣಿಗಳ ಹುಲಿ ಉಗುರು ಧರಿಸಿರುವ ಫೋಟೋಗಳು ವೈರಲಾಗಿದೆ.
ಈ ನೆಲದ ಕಾನೂನು ಎಲ್ಲರಿಗೂ ಒಂದೇ ಯಾರೇ ತಪ್ಪು ಮಾಡಿದ್ದರು ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ನಮ್ಮ ಅರಣ್ಯ ಇಲಾಖೆ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳುತ್ತಾರೆ.#PressMeet #Kalburgi @aranya_kfd pic.twitter.com/KoV56nbwVe
— Eshwar Khandre (@eshwar_khandre) October 25, 2023
ಈ ಹಿನ್ನೆಲೆಯಲ್ಲಿ ಈ ವಿವಾದಕ್ಕೆ ಸಂಬಂಧಿಸಿ ಕಲಬುರಗಿಯಲ್ಲಿ ಇಂದು(ಬುಧವಾರ) ಪ್ರತಿಕ್ರಿಯೆ ನೀಡಿರುವ ಅರಣ್ಯ ಹಾಗೂ ವನ್ಯಜೀವಿ ಸಚಿವ ಈಶ್ವರ್ ಖಂಡ್ರೆ, ಈ ನೆಲದ ಕಾನೂನು ಎಲ್ಲರಿಗೂ ಒಂದೇ. ಎಷ್ಟೇ ಪ್ರಭಾವಿಯಾಗಿದ್ದರೂ, ಯಾರೇ ತಪ್ಪು ಮಾಡಿದ್ದರೂ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ನಮ್ಮ ಅರಣ್ಯ ಇಲಾಖೆ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳುತ್ತಾರೆ ಎಂದು ತಿಳಿಸಿದ್ದಾರೆ.
1972ರಲ್ಲಿ ವನ್ಯಜೀವಿ ಸಂರಕ್ಷಣೆ ಕಾಯ್ದೆ ಜಾರಿಗೆ ಬಂದಿದೆ. ಆ ಬಳಿಕ ಹಲವಾರು ತಿದ್ದುಪಡಿಗಳು ಕೂಡ ಆಗಿದೆ. ವನ್ಯಜೀವಿಗಳನ್ನು ಸಂರಕ್ಷಣೆ ಮಾಡುವುದು ಪ್ರತಿಯೊಬ್ಬರ ಕರ್ತವ್ಯ. ಪ್ರತ್ಯಕ್ಷವಾಗಿ ಇಲ್ಲವೇ ಪರೋಕ್ಷವಾಗಿ ವನ್ಯಜೀವಿಗಳಿಗೆ ತೊಂದರೆ, ಹಾನಿ ಆಗದಂತೆ ನೋಡಿಕೊಳ್ಳಬೇಕು. ಇಲ್ಲವಾದರೆ ಅದು ವನ್ಯಜೀವಿ ಸಂರಕ್ಷಣಾ ಕಾಯ್ದೆ ಉಲ್ಲಂಘಿಸಿದಂತಾಗುತ್ತದೆ ಎಂದು ತಿಳಿಸಿದರು.
ವನ್ಯಜೀವಿ ಚರ್ಮ, ಉಗುರು ಇನ್ನಿತರ ದೇಹದ ಭಾಗಗಳ ಬಳಕೆ, ಸಾಗಾಣೆ, ಸಂಗ್ರಹಿಸಿ ಇಟ್ಟುಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದೆ. ಈ ನೆಲದಲ್ಲಿ ಕಾನೂನು ಎಲ್ಲರಿಗೂ ಸಮಾನವಾಗಿದೆ. ಹುಲಿ ಉಗುರು ಬಗ್ಗೆ ನೈಜತೆ ಲಭ್ಯವಾದಲ್ಲಿ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದು ತಿಳಿಸಿದರು.
ಕನ್ನಡ ಟಿವಿಯಲ್ಲಿ ಪ್ರಸಾರವಾಗುತ್ತಿರುವ ರಿಯಾಲಿಟಿ ಶೋ ಬಿಗ್ ಬಾಸ್ ನಲ್ಲಿ ಹುಲಿಯ ಉಗುರಿನ ಸರ ಧರಿಸಿದ ವರ್ತೂರು ಸಂತೋಷ್ ಅವರಿಂದ ಸಮಾಜಕ್ಕೆ ತಪ್ಪು ಸಂದೇಶ ಹೋಗುತ್ತಿದೆ. ಇದು ಅಪರಾಧ. ಅರಣ್ಯ ಅಧಿಕಾರಿಗಳು ಅವರನ್ನು ಬಂಧಿಸುವ ಕಾರ್ಯ ಮಾಡಿದ್ದಾರೆ. ಕಾನೂನಿನ ಪ್ರಕಾರ ವನ್ಯಜೀವಿ ಸಂರಕ್ಷಣೆ ಕಾಯ್ದೆ ಅಡಿಯಲ್ಲಿ ಕ್ರಮ ಕೈಗೊಳ್ಳಲಾಗುತ್ತದೆ.… pic.twitter.com/2ql2jrpF4k
— Eshwar Khandre (@eshwar_khandre) October 23, 2023
ದೊಡ್ಡವರ ಹೆಸರು ಕೇಳಿ ಬಂದಿದೆ, ಅವರ ವಿರುದ್ಧ ಕ್ರಮ ಆಗುತ್ತಾ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ‘ಇಲ್ಲಿ ಕಾನೂನು ಎಲ್ಲರಿಗೂ ಒಂದೇ’ ಎಂದು ತಿಳಿಸಿದರು.
‘ಕೃತಕವಾದದ್ದು’ ಎಂದು ಸ್ಪಷ್ಟೀಕರಣ ನೀಡಿದ ನಿಖಿಲ್ ಕುಮಾರ್ ಸ್ವಾಮಿ
ನಟ, ಯುವರಾಜಕಾರಣಿ ನಿಖಿಲ್ ಕುಮಾರ್ ಸ್ವಾಮಿ ಅವರು ಕೂಡ ಹುಲಿ ಉಗುರಿನ ಪೆಂಡೆಂಟ್ ಧರಿಸಿದ್ದಾರೆ ಎನ್ನಲಾದ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿತ್ತು. ಅವರ ಮೇಲೆ ಕ್ರಮ ತೆಗೆದುಕೊಳ್ಳಬೇಕು ಎಂದು ಸಾಕಷ್ಟು ನೆಟ್ಟಿಗರು ಕಾಮೆಂಟ್ ಮಾಡಿದ್ದರು. ಸೆಲೆಬ್ರಿಟಿಗಳ ಮೇಲೆ ದೂರು ನೀಡಲು ಕೆಲವರು ಮುಂದಾಗಿದ್ದಾರೆ. ಮಾಧ್ಯಮಗಳಲ್ಲಿ ಈ ಕುರಿತು ಸಾಕಷ್ಟು ಸದ್ದು ಆಗುತ್ತಿದ್ದಂತೆಯೇ ನಿಖಿಲ್ ಈ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಸ್ಪಷ್ಟನೆ ನೀಡಿದ್ದಾರೆ.
ನಾನು ಧರಿಸಿದ್ದ ಹುಲಿ ಉಗುರು ಮಾದರಿಯ ಪೆಂಡೆಂಟ್ ಕೃತಕವಾದದ್ದೇ ಹೊರತು ನೈಜವಾದುದ್ದಲ್ಲ. ಅದನ್ನು ನನ್ನ ಮದುವೆ ಸಮಯದಲ್ಲಿ ಉಡುಗೋರೆ ನೀಡಿದ್ದು. ಅದು ಈಗಲೂ ನನ್ನ ಬಳಿ ಇದೆ. ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲಿಸಬಹುದು. ದಯಮಾಡಿ ಯಾರೂ ಸತ್ಯಕ್ಕೆ ದೂರವಾದ ಸುದ್ದಿಗಳನ್ನು ಪ್ರಸಾರ ಮಾಡಬಾರದು ಎಂದು ವಿನಂತಿ ಮಾಡಿಕೊಳ್ಳುತ್ತೇನೆ.
2/2— Nikhil Kumar (@Nikhil_Kumar_k) October 25, 2023
‘ನನ್ನ ಮದುವೆ ಸಮಯದಲ್ಲಿ ಹುಲಿ ಉಗುರಿನ ಪೆಂಡೆಂಟ್ ಧರಿಸಿದ್ದರು ಎಂದು ಕೆಲ ಮಾಧ್ಯಮಗಳಲ್ಲಿ ವರದಿ ಮಾಡಲಾಗಿದೆ. ಇದು ಸತ್ಯಕ್ಕೆ ದೂರ. ವನ್ಯಜೀವಿ ಸಂರಕ್ಷಣಾ ಕಾಯ್ದೆ, ಅದರ ಗಂಭೀರತೆ ಬಗ್ಗೆ ನನಗೆ ಖಂಡಿತಾ ಅರಿವಿದೆ. ನಾನು ಧರಿಸಿದ್ದ ಹುಲಿ ಉಗುರು ಮಾದರಿಯ ಪೆಂಡೆಂಟ್ ಕೃತಕವಾದದ್ದೇ ಹೊರತು ನೈಜವಾದುದ್ದಲ್ಲ. ಅದನ್ನು ನನ್ನ ಮದುವೆ ಸಮಯದಲ್ಲಿ ಉಡುಗೊರೆ ನೀಡಿದ್ದು. ಅದು ಈಗಲೂ ನನ್ನ ಬಳಿ ಇದೆ. ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲಿಸಬಹುದು. ದಯಮಾಡಿ ಯಾರೂ ಸತ್ಯಕ್ಕೆ ದೂರವಾದ ಸುದ್ದಿಗಳನ್ನು ಪ್ರಸಾರ ಮಾಡಬಾರದು ಎಂದು ವಿನಂತಿ ಮಾಡಿಕೊಳ್ಳುತ್ತೇನೆ’ ಎಂದು ಟ್ವೀಟ್ ಮಾಡಿ, ಬರೆದುಕೊಂಡಿದ್ದಾರೆ.