ರಾಜ್ಯ ರಾಜಧಾನಿ ಬೆಂಗಳೂರಿನ ಚಾಮರಾಜಪೇಟೆಯ ಈದ್ಗಾ ಮೈದಾನದ ವಿವಾದ ಮತ್ತೆ ಮುನ್ನೆಲೆಗೆ ಬಂದಿದ್ದು, ಮೈದಾನದಲ್ಲಿ ನವೆಂಬರ್ 1 ರಂದು ಕನ್ನಡ ರಾಜ್ಯೋತ್ಸವ ಆಚರಿಸಲು ಅನುಮತಿ ನೀಡುವಂತೆ ಹಲವಾರು ಸಂಘಟನೆಗಳು ಒತ್ತಾಯಿಸುತ್ತಿವೆ.
ಸ್ವಾತಂತ್ರ್ಯ ದಿನಾಚರಣೆ, ಗಣೇಶ ಚತುರ್ಥಿ ಆಚರಣೆಗೆ ಪರ ವಿರೋಧ ಮುಗಿದ ಬಳಿಕ ಇದೀಗ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸುವ ಕೂಗು ಕೇಳಿಬರುತ್ತಿದೆ. ಚಾಮರಾಜಪೇಟೆ ನಾಗರಿಕ ಒಕ್ಕೂಟದಿಂದ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವದ ಆಚರಣೆಗೆ ಪಟ್ಟು ಹಿಡಿದಿದ್ದು, ಕನ್ನಡ ಪರ ಹಾಗೂ ಹಿಂದೂಪರ ಸಂಘಟನೆಗಳಲ್ಲದೆ ಇದೇ ಮೈದಾನದಿಂದ ಕೂಗಳತೆಯ ದೂರದಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ ಕೂಡ ಮೈದಾನದಲ್ಲಿ ನಾಡಧ್ವಜ ಹಾರಿಸುವಂತೆ ಒತ್ತಡ ಹೇರಿದೆ ಎಂದು ತಿಳಿದುಬಂದಿದೆ.
ನವೆಂಬರ್ 1 ರಂದು ಕನ್ನಡ ರಾಜ್ಯೋತ್ಸವ ಆಚರಣೆಗೆ ಅವಕಾಶ ಕೊಡಬೇಕು ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿಗೆ ಚಾಮರಾಜಪೇಟೆ ನಾಗರಿಕ ಒಕ್ಕೂಟ ಮನವಿ ಮಾಡಿಕೊಂಡಿದೆ. ಆದರೆ, ಈ ಮನವಿಯನ್ನು ಜಿಲ್ಲಾಧಿಕಾರಿಗಳು ತಿರಸ್ಕರಿಸಿದ್ದಾರೆ. ಯಾವುದೇ ಕಾರಣಕ್ಕೂ ಅನುಮತಿ ಕೊಡುವುದಿಲ್ಲ ಎಂದು ಹೇಳಿದ್ದಾರೆ. ಇದರಿಂದ ಚಾಮರಾಜಪೇಟೆ ನಾಗರಿಕ ಒಕ್ಕೂಟವು ನ್ಯಾಯಾಲಯದ ಮೊರೆ ಹೋಗಲು ಸಿದ್ಧತೆ ನಡೆಸಿದೆ.
ಈ ಸುದ್ದಿ ಓದಿದ್ದೀರಾ? ಬೆಂಗಳೂರು | ವೈಟ್‌ಫೀಲ್ಡ್‌ನ ಒಂದು ಬಡಾವಣೆಯಲ್ಲಿ 40 ಅನಧಿಕೃತ ಕಟ್ಟಡ ಪತ್ತೆ
ರಾಜ್ಯ ಸರ್ಕಾರ ಕನ್ನಡ ನಾಡಿನಲ್ಲಿ ರಾಜ್ಯೋತ್ಸವ ಆಚರಣೆಗೆ ಅಡ್ಡಪಡಿಸುತ್ತಿದೆ. ಕೂಡಲೇ ಮೈದಾನದಲ್ಲಿ ನಾಡಧ್ವಜ ಹಾರಾಟಕ್ಕೆ ಅನುಮತಿ ನೀಡಬೇಕು. ಒಂದು ವೇಳೆ ಕನ್ನಡ ರಾಜ್ಯೋತ್ಸವ ಆಚರಣೆಗೆ ಅವಕಾಶ ನೀಡದಿದ್ದರೆ, ಉಗ್ರ ಹೋರಾಟ ನಡೆಸಲಾಗುವುದು. ಈ ಕುರಿತಂತೆ ನ್ಯಾಯಾಲಯದ ಮೊರೆ ಹೋಗಲು ನಿರ್ಧರಿಸಿರುವುದಾಗಿ ಚಾಮರಾಜಪೇಟೆ ನಾಗರಿಕ ಒಕ್ಕೂಟದ ಖಜಾಂಚಿ ಯಶವಂತ್ ತಿಳಿಸಿದ್ದಾರೆ.