ಕಳೆದ ಒಂದು ವರ್ಷದ ಹಿಂದೆ ಬಂಧಿತರಾಗಿದ್ದ 8 ಮಾಜಿ ಭಾರತೀಯ ನೌಕಾಪಡೆ ಸಿಬ್ಬಂದಿಗೆ ಕತಾರ್ ನ್ಯಾಯಾಲಯವು ಮರಣದಂಡನೆ ವಿಧಿಸಲಾಗಿದ್ದು, ತೀರ್ಪಿಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಭಾರತ ಸರ್ಕಾರವು ಸಾಧ್ಯವಿರುವ ಎಲ್ಲ ಕಾನೂನು ಕ್ರಮಗಳನ್ನು ಕೈಗೊಳ್ಳುವುದಾಗಿ ತಿಳಿಸಿದೆ.
ಮಾಧ್ಯಮ ವರದಿಗಳ ಪ್ರಕಾರ, ನೌಕಾಪಡೆಯ ಮಾಜಿ ಅಧಿಕಾರಿಗಳು ಇಸ್ರೇಲ್ ಪರವಾಗಿ ಜಲಾಂತರ್ಗಾಮಿ ಕಾರ್ಯಕ್ರಮಕ್ಕೆ ಸಂಬಂಧಿಸಿದ ಬೇಹುಗಾರಿಕೆ ಆರೋಪಗಳನ್ನು ಎದುರಿಸುತ್ತಿದ್ದಾರೆ. ಕತಾರ್ ಅಧಿಕಾರಿಗಳು ಹೆಚ್ಚುವರಿಯಾಗಿ ಈ ವಿಷಯಕ್ಕೆ ಸಂಬಂಧಿಸಿದ ಎಲೆಕ್ಟ್ರಾನಿಕ್ ಪುರಾವೆಗಳನ್ನು ಹೊಂದಿದ್ದಾರೆ ಎಂದು ಹೇಳಿದ್ದಾರೆ.
“ನಾವು ಮರಣದಂಡನೆಯ ತೀರ್ಪಿನಿಂದ ತೀವ್ರವಾಗಿ ಆಘಾತಕ್ಕೊಳಗಾಗಿದ್ದೇವೆ ಮತ್ತು ವಿವರವಾದ ತೀರ್ಪಿಗಾಗಿ ಕಾಯುತ್ತಿದ್ದೇವೆ. ನಾವು ಸಿಬ್ಬಂದಿಯ ಕುಟುಂಬ ಸದಸ್ಯರು ಮತ್ತು ಕಾನೂನು ತಂಡದೊಂದಿಗೆ ಸಂಪರ್ಕದಲ್ಲಿದ್ದೇವೆ. ಅಲ್ಲದೆ ಎಲ್ಲ ಕಾನೂನು ಆಯ್ಕೆಗಳನ್ನು ಪರಿಶೀಲಿಸುತ್ತಿದ್ದೇವೆ” ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಅಧಿಕೃತ ಹೇಳಿಕೆ ತಿಳಿಸಿದೆ.
“ನಾವು ಈ ಪ್ರಕರಣಕ್ಕೆ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡುತ್ತೇವೆ. ಅಲ್ಲದೆ ಎಲ್ಲ ಕಾನೂನು ಪರಿಣಿತರ ಸಹಾಯವನ್ನು ನೀಡುವುದನ್ನು ಮುಂದುವರಿಸುತ್ತೇವೆ. ನಾವು ಕತಾರ್ ಅಧಿಕಾರಿಗಳೊಂದಿಗೆ ತೀರ್ಪನ್ನು ತರಿಸಿಕೊಳ್ಳುತ್ತೇವೆ. ಪ್ರಕರಣವು ಗೌಪ್ಯ ಸ್ವರೂಪದ ಕಾರಣ, ಈ ಹಂತದಲ್ಲಿ ಯಾವುದೇ ಹೆಚ್ಚಿನ ಪ್ರತಿಕ್ರಿಯೆ ನೀಡುವುದು ಸೂಕ್ತವಲ್ಲ” ಎಂದು ಸಚಿವಾಲಯದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಈ ಸುದ್ದಿ ಓದಿದ್ದೀರಾ? ಅಮಿತ್ ಶಾ, ಹಿಮಂತ ಶರ್ಮಾ ವಿರುದ್ಧ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು
ಕತಾರ್ ಕಂಪನಿಯೊಂದರಲ್ಲಿ ಉದ್ಯೋಗಿಯಾಗಿದ್ದ ಎಂಟು ಮಾಜಿ ಭಾರತೀಯ ನೌಕಾಪಡೆಯ ಅಧಿಕಾರಿಗಳನ್ನು ಇಸ್ರೇಲ್‌ಗೆ ಗೂಢಚಾರರಾಗಿ ಕೆಲಸ ಮಾಡುತ್ತಿದ್ದಾರೆ ಎಂಬ ಶಂಕೆಯ ಮೇಲೆ ಆಗಸ್ಟ್ 2022 ರಲ್ಲಿ ಬಂಧಿಸಲಾಗಿತ್ತು.
ಭಾರತೀಯ ನೌಕಾಪಡೆಯ ಮಾಜಿ ಅಧಿಕಾರಿಗಳಾದ ಕ್ಯಾಪ್ಟನ್ ನವತೇಜ್ ಸಿಂಗ್ ಗಿಲ್, ಕ್ಯಾಪ್ಟನ್ ಬೀರೇಂದ್ರ ಕುಮಾರ್ ವರ್ಮಾ, ಕ್ಯಾಪ್ಟನ್ ಸೌರಭ್ ವಸಿಷ್ಟ್, ಕಮಾಂಡರ್ ಅಮಿತ್ ನಾಗ್ಪಾಲ್, ಕಮಾಂಡರ್ ಪೂರ್ಣೇಂದು ತಿವಾರಿ, ಕಮಾಂಡರ್ ಸುಗುಣಾಕರ್ ಪಕಾಲ, ಕಮಾಂಡರ್ ಸಂಜೀವ್ ಗುಪ್ತಾ ಮತ್ತು ನಾವಿಕ ರಾಗೇಶ್ ಅವರನ್ನು 2022ರ ಆಗಸ್ಟ್ 30 ರಂದು ಕತಾರ್ ಗುಪ್ತಚರ ಸಂಸ್ಥೆ ದೋಥಾದಿಂದ ಬಂಧಿಸಲಾಗಿತ್ತು.
ನೌಕಾಪಡೆಯ ಯೋಧರ ಜಾಮೀನು ಅರ್ಜಿಗಳನ್ನು ಕತಾರಿ ಅಧಿಕಾರಿಗಳು ಹಲವಾರು ಬಾರಿ ತಿರಸ್ಕರಿಸಿದರು. ಕತಾರ್‌ನ ಪ್ರಥಮ ಹಂತದ ನ್ಯಾಯಾಲಯವು ಮರಣದಂಡನೆಯನ್ನು ಬುಧವಾರ (ಅ.26) ಘೋಷಿಸಿತು.