ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ನೌಕರರಿಗೆ ಕುಟುಂಬ ಕಲ್ಯಾಣ ಯೋಜನೆಯ ಪರಿಹಾರ ಮೊತ್ತವನ್ನು ₹3 ಲಕ್ಷದಿಂದ ₹10 ಲಕ್ಷಗಳವರೆಗೆ ಏರಿಕೆ ಮಾಡಲಾಗಿದೆ. ಇದು ದೇಶದ ರಸ್ತೆ ಸಾರಿಗೆ ಸಂಸ್ಥೆಗಳ ಇತಿಹಾಸದಲ್ಲಿಯೇ ಮೊದಲು ಎಂದು ನಿಗಮ ತಿಳಿಸಿದೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಕೆಎಸ್‌ಆರ್‌ಟಿಸಿ, “ನಿಗಮದಲ್ಲಿ ಈಗಾಗಲೇ ಸೇವೆಯಲ್ಲಿರುವಾಗ ಸಿಬ್ಬಂದಿ ಖಾಸಗಿ ಅಥವಾ ಕರ್ತವ್ಯ ನಿರತ ಅಪಘಾತದಲ್ಲಿ ಮೃತಪಟ್ಟಲ್ಲಿ ಅವರ ಅವಲಂಬಿತರಿಗೆ ಅಪಘಾತ ವಿಮಾ ಪರಿಹಾರ ಯೋಜನೆಯಡಿ, ₹1 ಕೋಟಿ ಮೊತ್ತದ ಆರ್ಥಿಕ ಪರಿಹಾರ ಒದಗಿಸಲಾಗುತ್ತಿದೆ. ಇಲ್ಲಿಯವರೆಗೆ 7 ಪ್ರಕರಣಗಳಲ್ಲಿ ಅಪಘಾತದಿಂದ ಮರಣ ಹೊಂದಿದ ನೌಕರರ ಅವಲಂಬಿತರಿಗೆ ತಲಾ ₹1 ಕೋಟಿ ನೀಡಲಾಗಿದೆ” ಎಂದು ಹೇಳಿದೆ.
“ಇದೀಗ, ಅಪಘಾತ ಹೊರತುಪಡಿಸಿ ಇತರೆ ಕಾರಣಗಳಿಂದ ಮೃತಪಟ್ಟ ನೌಕರರ ಕುಟುಂಬದವರಿಗೆ ಅಂದರೆ ಕ್ಯಾನ್ಸರ್, ಸ್ಟ್ರೋಕ್, ಹೃದಯಾಘಾತ, ಕಿಡ್ನಿ ವೈಫಲ್ಯ ಸೇರಿದಂತೆ ಇತರೆ ಖಾಯಿಲೆಗಳಿಂದ ಪ್ರತಿ ವರ್ಷ 100 ನೌಕರರು ಮರಣ ಹೊಂದುತ್ತಿದ್ದಾರೆ. ಈ ರೀತಿ ತಮ್ಮ ಸೇವಾವಧಿಯಲ್ಲಿ ಮರಣ ಹೊಂದುತ್ತಿರುವ ನೌಕರರ ಕುಟುಂಬದವರು ಅನುಭವಿಸುವ ಕಷ್ಟಗಳನ್ನು ಗಮನಿಸಿ, ನಿಗಮದಿಂದ ಅವರಿಗೆ ನೆರವಾಗಲು ₹3 ಲಕ್ಷ ನೀಡುತ್ತಿದ್ದ ಪರಿಹಾರ ಮೊತ್ತವನ್ನು ಹೆಚ್ಚಿಸಲು ನಾನಾ ಕಾರ್ಮಿಕ ಸಂಘಟನೆಗಳಿಂದ ಬೇಡಿಕೆ ಬಂದ ಹಿನ್ನೆಲೆಯಲ್ಲಿ ನೌಕರರ ಕುಟುಂಬ ಕಲ್ಯಾಣ ಯೋಜನೆಯಡಿ ಪ್ರಸ್ತುತ ನೀಡಲಾಗುತ್ತಿರುವ ಪರಿಹಾರವನ್ನು₹3 ಲಕ್ಷದಿಂದ ₹10ಲಕ್ಷಕ್ಕೆ ಏರಿಕೆ ಮಾಡಲಾಗಿದೆ. ಇದರಿಂದ ಮೃತರ ಅವಲಂಬಿತರಿಗೆ ₹7 ಲಕ್ಷಗಳ ಹೆಚ್ಚುವರಿ ಪರಿಹಾರ ಮೊತ್ತ ಲಭ್ಯವಾಗುತ್ತದೆ” ಎಂದು ಮಾಹಿತಿ ನೀಡಿದೆ.
ಈ ಸುದ್ದಿ ಓದಿದ್ದೀರಾ? ನಮ್ಮ ಮೆಟ್ರೋಗೆ ʼಬಸವಣ್ಣʼ ನಾಮಕರಣ: ಸಾಮಾನ್ಯರು, ಗಣ್ಯರು ಹೇಳುವುದೇನು?
“ಕಾರ್ಮಿಕರ ಜೀವ ಅಮೂಲ್ಯವಾದದ್ದು, ಜೀವಕ್ಕೆ ಯಾವುದೇ ರೀತಿಯಿಂದಲೂ ಬೆಲೆ ಕಟ್ಟಲಾಗುವುದಿಲ್ಲ. ಆದರೆ, ನೌಕರರು ಮರಣ ಹೊಂದಿದ್ದಲ್ಲಿ, ಅವರ ಅವಲಂಬಿತರಿಗೆ ಆದಷ್ಟೂ ಆರ್ಥಿಕವಾಗಿ ಸಹಾಯ ಮಾಡುವುದು ನಿಗಮದ ಸದುದ್ದೇಶವಾಗಿದೆ. ಈ ಯೋಜನೆಗೆ ನೌಕರರ ಮಾಸಿಕ ವಂತಿಕೆಯನ್ನು ಪ್ರಸ್ತುತ ₹100 ಗಳಿಂದ ₹200 ಗಳಿಗೆ ಹಾಗೂ ನಿಗಮದ ವತಿಯಿಂದ ಪ್ರತಿ ನೌಕರರ ಪರವಾಗಿ ನೀಡಲಾಗುತ್ತಿರುವ ₹50 ಗಳ ವಂತಿಕೆಯನ್ನು ₹100 ಗಳಿಗೆ ಹೆಚ್ಚಿಸಿ, ಪರಿಷ್ಕರಿಸಲಾಗಿದೆ” ಎಂದು ತಿಳಿಸಿದೆ.
“ಈ ಪರಿಷ್ಕೃತ ಆದೇಶವು ನವೆಂಬರ್ 1ರಿಂದ ಜಾರಿಗೆ ಬರಲಿದ್ದು, ಈ ದಿನಾಂಕದ ನಂತರದಲ್ಲಿ ಉಂಟಾಗುವ ಮರಣ ಪ್ರಕರಣಗಳಿಗೆ ಈ ಯೋಜನೆಯು ಅನ್ವಯಿಸುತ್ತದೆ” ಎಂದು ಹೇಳಿದೆ.