ರಾಜ್ಯ ರಾಜಧಾನಿ ಬೆಂಗಳೂರಿನ ಅತ್ತಿಬೆಲೆ ಪಟಾಕಿ ಗೋದಾಮಿನಲ್ಲಿ ನಡೆದ ಅಗ್ನಿ ದುರಂತದಲ್ಲಿ 16 ಮಂದಿ ಸಾವನ್ನಪ್ಪಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್‌ಜಿಟಿ) ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದೆ. ಘಟನೆಗೆ ಸಂಬಂಧಿಸಿದಂತೆ ಸಮಗ್ರ ಮಾಹಿತಿಯನ್ನು ನೀಡುವಂತೆ ರಾಜ್ಯ ಸರ್ಕಾರಕ್ಕೆ ಕೇಳಿದೆ.
ನ್ಯಾಯಮೂರ್ತಿ ಪ್ರಕಾಶ್ ಶ್ರೀವಾಸ್ತವ ನೇತೃತ್ವದ ಸುಧೀರ್ ಅಗರ್ವಾಲ್ ಮತ್ತು ಎ ಸೆಂಥಿಲ್ ವೇಲ್ ಅವರನ್ನೂ ಒಳಗೊಂಡ ಪೀಠವು ಈ ಪ್ರಕರಣದ ವಿಚಾರಣೆಯನ್ನು ಮಂಗಳವಾರ ನಡೆಸಿದೆ.
ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸದಸ್ಯ ಕಾರ್ಯದರ್ಶಿ ಹಾಗೂ ಬಾಲಾಜಿ ಗೋದಾಮಿನ ಮಾಲೀಕರನ್ನು ಪ್ರತಿವಾದಿಗಳನ್ನಾಗಿ ಸೇರ್ಪಡೆ ಮಾಡಿಕೊಂಡಿದೆ.
ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಪೀಠ, “ಅತ್ತಿಬೆಲೆಯಲ್ಲಿರುವ ಬಾಲಾಜಿ ಪಟಾಕಿ ಗೋದಾಮಿನ ಮಾಲೀಕರ ಹೆಸರು, ವಿಳಾಸ ಹಾಗೂ ಮೃತಪಟ್ಟ ಕುಟುಂಬಗಳಿಗೆ ನೀಡಿರುವ ಪರಿಹಾರದ ಬಗ್ಗೆ ಮಾಹಿತಿ ನೀಡುವಂತೆ” ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.
ಗೋದಾಮಿನಲ್ಲಿ ಪಟಾಕಿಗಳನ್ನು ಸಂಗ್ರಹಿಸಲು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಯಾವುದೇ ಅನುಮತಿ ಪಡೆದಿಲ್ಲ ಎಂದು ಮಂಡಳಿಯ ಪರ ವಕೀಲರು ಪೀಠಕ್ಕೆ ತಿಳಿಸಿದರು.
ಅವಘಡಕ್ಕೆ ಕಾರಣರಾದವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಹಾಗೂ ಆರೋಪಿಗಳನ್ನು ಬಂಧಿಸಲಾಗಿದೆ. ಯಾವುದೇ ಪರವಾನಗಿ ಇಲ್ಲದೆ ಗೋದಾಮು ಕಾರ್ಯನಿರ್ವಹಿಸುತ್ತಿತ್ತು. ಈ ಸಂಬಂಧ ಸಮಗ್ರ ಮಾಹಿತಿ ನೀಡಲು ಎರಡು ವಾರಗಳ ಕಾಲಾವಕಾಶ ನೀಡಬೇಕು ಎಂದು ರಾಜ್ಯ ಸರ್ಕಾರದ ಪರ ವಕೀಲರು ಮನವಿ ಮಾಡಿದರು.
ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಕನ್ನಡ ಹಾಡು ಹಾಕಿದ್ದಕ್ಕೆ ಪಬ್ ಮ್ಯಾನೇಜರ್ ಮೇಲೆ ಹಲ್ಲೆ
ಚೆನ್ನೈನ ದಕ್ಷಿಣ ಪೀಠಕ್ಕೆ ನ್ಯಾಯಮಂಡಳಿ ಪ್ರಕರಣ ವರ್ಗಾಯಿಸಿದೆ. ಮುಂದಿನ ವಿಚಾರಣೆಯನ್ನು ನವೆಂಬರ್ 30ಕ್ಕೆ ಮುಂದೂಡಿದೆ.