ದಾವಣಗೆರೆ ಮಹಾನಗರ ಪಾಲಿಕೆ ವ್ಯಾಪ್ತಿಯಡಿಯಲ್ಲಿ ಬರುವ ಎಲ್ಲ ವಾಣಿಜ್ಯ ಮಳಿಗೆಗಳ ಮುಂಭಾಗದಲ್ಲಿ ಅಳವಡಿಸಿರುವ ನಾಮಫಲಕಗಳಲ್ಲಿ ಕಡ್ಡಾಯವಾಗಿ ಕನ್ನಡ ಇರಬೇಕು ಎಂದು ಸಮಗ್ರ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಒತ್ತಾಯಿಸಿದ್ದಾರೆ.
ದಾವಣಗೆರೆಯ ಬಿಪಿ ರಸ್ತೆಯಲ್ಲಿ ಪ್ರತಿಭಟನೆ ನಡೆಸಿದ ಸಂಘಟನೆಯ ಕಾರ್ಯಕರ್ತರು, ” ಕನ್ನಡೇತರ ಭಾಷೆಗಳ ನಾಮಫಲಕಗಳಲ್ಲಿ ಕಡ್ಡಾಯವಾಗಿ ಕನ್ನಡದಲ್ಲೂ ಹೆಸರುಗಳನ್ನು ಬರೆಯಬೇಕು” ಎಂದು ಆಗ್ರಹಿಸಿದ್ದಾರೆ.
ಪ್ರತಿಭಟನೆಯಲ್ಲಿ ಮಾತನಾಡಿದ ಸಂಘಟನೆಯ ಸಂಸ್ಥಾಪಕ ಅಧ್ಯಕ್ಷ ವಿ.ಅವಿನಾಶ್, “ರಾಜ್ಯ ಸರ್ಕಾರವು ಕನ್ನಡವನ್ನು ಆಡಳಿತ ಭಾಷೆಯೆಂದು 1953ರಲ್ಲಿ ಆದೇಶ ಹೊರಡಿಸಿತ್ತು. ರಾಜ್ಯದಲ್ಲಿ ಕನ್ನಡ ಭಾಷೆ ಸಾರ್ವಭೌಮತೆ ಮತ್ತು ರಾಜ್ಯ ಸರ್ಕಾರದ ಆಡಳಿತದಲ್ಲಿ ಕನ್ನಡ ಭಾಷೆಯನ್ನು ಅಗ್ರಸ್ಥಾನ ಕೊಟ್ಟು ರಾಜ್ಯ ಸರ್ಕಾರ ಕನ್ನಡ ಭಾಷೆ ಬಳಕೆಯಾಗಬೇಕೆಂದು ಅನುಷ್ಠಾನಗೊಳಿಸಿ ಆದೇಶ ಹೊರಡಿಸಿದೆ” ಎಂದು ತಿಳಿಸಿದರು.
“ಕನ್ನಡಿಗರ ಹಿತಾಸಕ್ತಿಗೆ ಕಾನೂನನ್ವಯ ಕನ್ನಡ ಭಾಷೆಯನ್ನು ಸಕ್ರಿಯಗೊಳಿಸಲು ಕನ್ನಡ ಅಭಿವೃದ್ಧಿ ಪ್ರಾಧಿಕಾರವು 2013ರ ಜುಲೈನಲ್ಲಿ ಎಲ್ಲ ನಾಮಫಲಕಗಳಲ್ಲಿ ಕಡ್ಡಾಯವಾಗಿ ಶೇ.60ರಷ್ಟು ಕನ್ನಡ ಇರಬೇಕು ಎಂದು ಆದೇಶಿಸಿತ್ತು. ಪ್ರಾಧಿಕಾರದ ತೀರ್ಮಾನವನ್ನು ಸರ್ಕಾರ ಅನುಮೋದಿಸಿದೆ. ಆದರೂ, ಆಮಫಲಕಗಳಲ್ಲಿ ಕನ್ನಡ ಬಳಕೆ ಸರಿಯಾಗಿ ಆಗುತ್ತಿಲ್ಲ” ಎಂದು ಕಿಡಿಕಾರಿದ್ದಾರೆ.
“ಸರ್ಕಾರದ ಆದೇಶಕ್ಕೆ ವಿರುದ್ಧವಾಗಿ ದಾವಣಗೆರೆ ಮಹಾನಗರ ಪಾಲಿಕೆ ಅಡಿಯಲ್ಲಿರುವ ವಾಣಿಜ್ಯ ಮಳಿಗೆಗಳು ಮತ್ತು ಅಂಗಡಿ ಮುಂಗಟ್ಟುಗಳಲ್ಲಿ ಕನ್ನಡೇತರ ಭಾಷೆಗಳ ನಾಮಫಲಕಗಳು ಹೆಚ್ಚಾಗಿ ಕಂಡುಬರುತ್ತವೆ. ಹೀಗಾಗಿ, ಪಾಲಿಕೆ ಆಯುಕ್ತರು ಈ ಕೂಡಲೇ ಕನ್ನಡೇತರ ಭಾಷೆಯ ನಾಮಫಲಕ ಹೊಂದಿರುವ ಅಂಗಡಿ ಮುಂಗಟ್ಟುಗಳ ಪರವಾನಿಗೆಯನ್ನು ರದ್ದುಪಡಿಸಬೇಕು. ನೋಟೀಸ್ ಜಾರಿ ಮಾಡಿ ಕನ್ನಡೇತರ ಭಾಷೆ ಒಳಗೊಂಡಿರುವ ನಾಮ ಫಲಕಗಳನ್ನು ತೆರವುಗೊಳಸಬೇಕು” ಎಂದು ಆಗ್ರಹಿಸಿದ್ದಾರೆ.