ಲೋಕಸಭಾ ಚುನಾವಣೆಗಾಗಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡಿವೆ. ಕೋಮುವಾದಿ ಪಕ್ಷದೊಂದಿಗೆ ಜೆಡಿಎಸ್ ಮೈತ್ರಿ ಮಾಡಿದೆ ಎಂದು ಅಸಮಾಧಾನ ವ್ಯಕ್ತಪಡಿಸಿ ಹಲವಾರು ಜೆಡಿಎಸ್ ಮುಖಂಡರು ಪಕ್ಷ ತೊರೆದಿದ್ದಾರೆ. ಕೆಲ ಜೆಡಿಎಸ್ ಶಾಸಕರೂ ಕೂಡ ಮೈತ್ರಿಯನ್ನು ವಿರೋಧಿಸಿದ್ದಾರೆ. ಈ ನಡುವೆ, ಇತ್ತೀಚೆಗಷ್ಟೇ ಬಿಜೆಪಿ ಸೇರಿದ್ದ ಸಂಸದೆ ಸುಮಲತಾ ಅಂಬರೀಶ್ ಕೂಡ ಮೈತ್ರಿಯನ್ನು ವಿರೋಧಿಸಿದ್ದಾರೆ. ಯಾವುದೇ ಕಾರಣಕ್ಕೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ. ಯಾರಿಗೂ ಬಿಟ್ಟುಕೊಡುವುದೂ ಇಲ್ಲ ಎಂದು ಖಡಾಖಂಡಿತವಾಗಿ ಹೇಳಿದ್ದಾರೆ.
ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ನಡುವೆ ಕ್ಷೇತ್ರ ಹಂಚಿಕೆ ಬಗ್ಗೆ ಹಲವಾರು ಚರ್ಚೆಗಳು ನಡೆಯುತ್ತಿವೆ. ಮಂಡ್ಯ ಲೋಕಸಭಾ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಡುವಂತೆ ಬಿಜೆಪಿ ಎದುರು ಜೆಡಿಎಸ್ ನಾಯಕರು ಬೇಡಿಕೆ ಇಟ್ಟಿದ್ದಾರೆ ಎಂದು ಹೇಳಲಾಗಿದೆ. ಆದರೆ, ಹಿಂದಿನ ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಜೆಡಿಎಸ್ ಅಭ್ಯರ್ಥಿಯಾಗಿದ್ದ ನಿಖಿಲ್ ಕುಮಾರಸ್ವಾಮಿ ವಿರುದ್ಧ ಸುಮಲತಾ ಗೆಲುವು ಸಾಧಿಸಿದ್ದರು. ಆ ಸಮಯದಲ್ಲಿ ಸುಮಲತಾ ವಿರುದ್ಧ ಎಚ್.ಡಿ ಕುಮಾರಸ್ವಾಮಿ ಸೇರಿದಂತೆ ಜೆಡಿಎಸ್‌ನ ಹಲವು ನಾಯಕರು ನಿಂದನಾತ್ಮಕವಾಗಿ ಮಾತನಾಡಿದ್ದರು. ಇದೀಗ, ಮಂಡ್ಯ ಕ್ಷೇತ್ರಕ್ಕಾಗಿ ಜೆಡಿಎಸ್ ಪಟ್ಟು ಹಿಡಿದಿದೆ. ಸುಮಲತಾ ಅವರು ಯಾವುದೇ ಕಾರಣಕ್ಕೂ ಕ್ಷೇತ್ರ ಬಿಡುವ ಮಾತೇ ಇಲ್ಲ ಎಂದು ಹೇಳಿದ್ದಾರೆ.
ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಸಮಲತಾ, “ನಾನು ಮಂಡ್ಯದ ಸೊಸೆ. ಯಾವತ್ತೂ ನಾನು ಮಂಡ್ಯ ಬಿಡುವುದಿಲ್ಲ. ರಾಜಕಾರಣ ಬಿಟ್ಟರೂ ಸ್ವಾಭಿಮಾನ, ಸಿದ್ದಾಂತ ಬಿಡಲ್ಲ. ಅಂಬರೀಶ್ ಕುಟುಂಬಕ್ಕೆ ಮಂಡ್ಯ ಜಿಲ್ಲೆಯ ಜನರು ಸಾಕಷ್ಟು ಪ್ರೀತಿ ಕೊಟ್ಟಿದ್ದಾರೆ. ನಾನು ಮಂಡ್ಯ ಬಿಟ್ಟು ಎಲ್ಲಿಯೂ ಹೋಗುವುದಿಲ್ಲ” ಎಂದಿದ್ದಾರೆ.
“ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡಿವೆ. ಆದರೆ, ಕ್ಷೇತ್ರ ಹಂಚಿಕೆ ಇನ್ನೂ ಆಗಿಲ್ಲ. ಹೀಗಾಗಿ, ನಾನು ದುಡುಕಿನ ನಿರ್ಧಾರ ಮಾಡುವುದಿಲ್ಲ. ಮಂಡ್ಯ ಜನರು ನನ್ನೊಂದಿಗಿದ್ದಾರೆ. ಕಳೆದ ಚುನಾವಣೆಯಲ್ಲೇ ಬೆಂಗಳೂರು ಉತ್ತರ ಕ್ಷೇತ್ರದ ಆಫರ್ ಬಂದಿತ್ತು. ಅದನ್ನು ನಾನು ತಿರಸ್ಕರಿಸಿದ್ದೆ. ನನಗೆ ಮಂಡ್ಯದ ಜನರು ಸ್ಥಾನಮಾನ ಕೊಟ್ಟಿದ್ದಾರೆ. ನಾನು ಮಂಡ್ಯವನ್ನು ಬಿಟ್ಟು ಹೋಗುವುದಿಲ್ಲ” ಎಂದು ತಿಳಿಸಿದ್ದಾರೆ.