ಕಲ್ಯಾಣ ಕರ್ನಾಟಕ ಭಾಗದಲ್ಲಿ 65 ಹೊಸ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ತೆರೆಯಲು ನಿರ್ಧರಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಕಲ್ಯಾಣ ಕರ್ನಾಟಕದಲ್ಲಿ ಸುಮಾರು 65 ಪ್ರಾಥಮಿಕ ಆರೋಗ್ಯ ಕೇಂದ್ರಗಳ ಕೊರತೆಯಿದೆ. ಕೊರತೆಯನ್ನು ನೀಗಿಸಲು ತಮ್ಮ ಸರ್ಕಾರ ಬದ್ಧವಾಗಿದೆ ಎಂದು ಅವರು ಟ್ವೀಟ್ ಮಾಡಿದ್ದಾರೆ.
ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಸ್ಥಾಪನೆ, ಸಮುದಾಯ ಆರೋಗ್ಯ ಕೇಂದ್ರಗಳು, ಜಿಲ್ಲಾ ಆಸ್ಪತ್ರೆಗಳು, ತಾಲೂಕು ಆಸ್ಪತ್ರೆಗಳ ಕಟ್ಟಡ ದುರಸ್ತಿ ಹಾಗೂ ಅವುಗಳಿಗೆ ಮೂಲಸೌಕರ್ಯ ಕಲ್ಪಿಸುವ ಬಗ್ಗೆ ಅವರು ಮಾಹಿತಿ ನೀಡಿದ್ದಾರೆ.
ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ಸಹಯೋಗದೊಂದಿಗೆ 65 ಹೊಸ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಈ ವರ್ಷದಿಂದಲೇ ಪ್ರಾರಂಭಿಸಲು ಯೋಜಿಸಲಾಗಿದೆ. ರಾಜ್ಯದ ಎಲ್ಲಾ ಜಿಲ್ಲಾ ಆಸ್ಪತ್ರೆಗಳು, ತಾಲೂಕು ಆಸ್ಪತ್ರೆಗಳು, ಸಮುದಾಯ ಆರೋಗ್ಯ ಕೇಂದ್ರಗಳ ಕಟ್ಟಡಗಳನ್ನು ದುರಸ್ತಿ ಮಾಡುವುದು ನಮ್ಮ ಆದ್ಯತೆಗಳಲ್ಲಿ ಪ್ರಮುಖವಾಗಿದೆ ಎಂದು ತಮ್ಮ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.