ಪ್ರಸಕ್ತ ಬೀದರ ಜಿಲ್ಲೆಯಲ್ಲಿ 36 ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳು ವರದಿಯಾಗಿವೆ. ಮುಂದಿನ ದಿನಗಳಲ್ಲಿ ಜಿಲ್ಲೆಯಲ್ಲಿ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆಯದಂತೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಎಚ್ಚರಿಕೆಯಿಂದ ಕೆಲಸ ಮಾಡಬೇಕು ಎಂದು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಹೇಳಿದರು.
ಮಂಗಳವಾರ ನಗರದ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಜಿಲ್ಲಾ ಮಕ್ಕಳ ಕಲ್ಯಾಣ ಮತ್ತು ರಕ್ಷಣಾ ಸಮಿತಿಯ ಅಧಿಕಾರಿ ಹಾಗೂ ಸಿಬ್ಬಂದಿಗಳೊಂದಿಗೆ ಸಭೆ ನಡೆಸಿ ಮಾತನಾಡಿದರು.
“ಜಿಲ್ಲೆಯಲ್ಲಿರುವ ಎಲ್ಲಾ ಸರ್ಕಾರಿ ಮ್ಯಾಟ್ರಿಕ್ ಪೂರ್ವ ವಸತಿ ನಿಲಯ ಹಾಗೂ ವಸತಿ ಶಾಲೆಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಲೈಂಗಿಕ ದೌರ್ಜನ್ಯ ನಡೆಯದಂತೆ ವಹಿಸಬೇಕಾದ ಮುಂಜಾಗೃತಿ ಕ್ರಮಗಳ ಕುರಿತು ಮಾಹಿತಿ ಒದಗಿಸಬೇಕು. ಜಿಲ್ಲೆಯ ಎಲ್ಲಾ ಶಾಲೆಗಳಲ್ಲಿ ಮಕ್ಕಳ ರಕ್ಷಣೆ ಮತ್ತು ಪೊಷಣೆ ಕುರಿತು ಜಾಗೃತಿ ಜಾಥಾ ಆಯೋಜಿಸಬೇಕು. ಶಾಲೆಯ ನೂರು ಮೀಟರ್ ಅಂತರದಲ್ಲಿ ಯಾವುದೇ ತಂಬಾಕು ಮತ್ತು ಮಾದಕ ವಸ್ತುಗಳ ಪದಾರ್ಥಗಳ ಮಾರಾಟ ಹಾಗೂ ಸಂಗ್ರಹ ನಿಷೇಧಿಸುವಂತೆ ಬ್ಯಾನರ್ ಅಳವಡಿಸಬೇಕು” ಎಂದು ಅಧಿಕಾರಿಗಳಿಗೆ ಸೂಚಿಸಿದರು
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಎಸ್.ಎಲ್. ಮಾತನಾಡಿ, “ಮಕ್ಕಳ ಮೇಲಿನ ದೌರ್ಜನ್ಯ ತಡೆಯಲು ಸಂಬಂಧಿಸಿದ ಇಲಾಖೆಗೆ ಪೊಲೀಸ್ ಇಲಾಖೆಯು ಸಂಪೂರ್ಣ ಸಹಕಾರ ನೀಡಲಾಗುವುದು. ಜಿಲ್ಲೆಯಲ್ಲಿರುವ ಶಾಲೆಗಳ ಆವರಣದಲ್ಲಿ ಶಾಲೆ ಮುಗಿದ ಮೇಲೆ ಯಾರಾದರು ಅಲ್ಲಿಗೆ ಬಂದು ಮದ್ಯಪಾನ ಮಾಡುತ್ತಿರುವುದು ಕಂಡು ಬಂದರೆ ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡಿ” ಎಂದರು.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಜೈಲುಗಳಲ್ಲಿ ಪುರುಷರಿಗೆ ನೀಡುವ ಸೌಲಭ್ಯಗಳು ಮಹಿಳೆಯರಿಗೇಕಿಲ್ಲ?
ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪ ನಿರ್ದೇಶಕ ಪ್ರಭಾಕರ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರ ಗುರುರಾಜ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶಾರದಾ ಕಲ್ಮರಕರ್, ರಕ್ಷಣಾಧಿಕಾರಿಗಳು ಜಿಲ್ಲಾ ಮಕ್ಕಳ ಘಟಕ ಬೀದರನ ಗೌರಿಶಂಕರ ಪರ್ತಾಪೂರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಧ್ಯಾನೇಶ್ವರ ನಿರಗುಡೆ, ಜಿಲ್ಲಾ ಮಕ್ಕಳ ರಕ್ಷಣಾ ಸಮಿತಿ ಅಧ್ಯಕ್ಷೆ ರಜಿಯಾ ಬಳಬಟ್ಟಿ, ಜಿಲ್ಲಾ ಮಕ್ಕಳ ರಕ್ಷಣಾ ಸಮಿತಿ ಸದಸ್ಯ ಮಂಜುಳಾ, ಸೇರಿದಂತೆ ಇತರೆ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂಧಿಗಳು ಉಪಸ್ಥಿತರಿದ್ದರು.