ಕೃಷಿಗೆ ಸಮರ್ಪಕ ವಿದ್ಯುತ್ ಪೂರೈಕೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮೈಸೂರಿನಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸಕ್ಕೆ ರೈತರು ಮುತ್ತಿಗೆ ಹಾಕಲು ಯತ್ನಿಸಿದ್ದು, ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಗುರುವಾರ ಬೆಳಗ್ಗೆ ಮೈಸೂರಿನಲ್ಲಿ ಸಿದ್ದರಾಮಯ್ಯ ಅವರ ನಿವಾಸ ಬಳಿ ರೈತ ಮುಖಂಡ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ರೈತ ಸಂಘಟನೆಗಳ ಒಕ್ಕೂಟ, ಕಬ್ಬು ಬೆಳೆಗಾರರ ಸಂಘಟನೆ ಪ್ರತಿಭಟನೆ ನಡೆಸಿದೆ. ಈ ವೇಳೆ, ಸಿದ್ದರಾಮಯ್ಯ ಅವರ ನಿವಾಸಕ್ಕೆ ಮುತ್ತಿಗೆ ಹಾಕಲು ರೈತರು ಯತ್ನಿಸಿದ್ದು, ಸುಮಾರು 50ಕ್ಕೂ ಹೆಚ್ಚು ಮಂದಿ ರೈತರನ್ನು ಪೊಲೀಸರು ವಶಕ್ಕೆ ಪಡೆಸಿದ್ದಾರೆ.
ಪೊಲೀಸರ ನಡೆಯ ವಿರುದ್ಧ ಕಿಡಿಕಾರಿದ ರೈತರು, ಪೊಲೀಸರ ವಿರುದ್ಧ ಧಿಕಾರ ಕೂಗಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯ ದಮನ ನಡೆಯುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರೈತರ ಪ್ರತಿಭಟನೆ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ನಿವಾಸದ ಬಳಿ ಹೆಚ್ಚಿನ ಭದ್ರತೆ ಕೈಗೊಳ್ಳಲಾಗಿದೆ.