ಕರಾವಳಿ ಕರ್ನಾಟಕದ ಜಾನಪದ ಕ್ರೀಡೆ ಕಂಬಳ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮೊಟ್ಟ ಮೊದಲ ಬಾರಿಗೆ ನಡೆಯಲಿದೆ. ಮಣ್ಣಿನ ಗದ್ದೆಯಲ್ಲಿ ಕೋಣಗಳನ್ನು ಒಡಿಸುವ ಈ ವಿಶಿಷ್ಟವಾದ ಸ್ಪರ್ಧೆಯನ್ನು ನೋಡಲು ಬೆಂಗಳೂರಿನ ಅರಮನೆ ಮೈದಾನದಲ್ಲಿ 5ಲಕ್ಷಕ್ಕೂ ಹೆಚ್ಚು ಜನ ಸೇರುವ ಸಾಧ್ಯತೆ ಇದೆ.
ನವೆಂಬರ್ 24, 25 ಮತ್ತು 26ರಂದು ಬೆಂಗಳೂರಿನ ಅರಮನೆ ಮೈದಾನದ 70 ಎಕರೆ ಜಾಗದಲ್ಲಿ ಕಂಬಳ ನಡೆಯಲಿದೆ. ಸದ್ಯ ಕಂಬಳ ನಡೆಸಲು ಅರಮನೆ ಮೈದಾನದಲ್ಲಿ ಸಿದ್ಧತೆ ನಡೆದಿದೆ. ಬೆಂಗಳೂರು ಕಂಬಳಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ₹1 ಕೋಟಿ ಅನುದಾನ ಬಿಡುಗಡೆ ಮಾಡಿದ್ದಾರೆ.
ಬೆಂಗಳೂರಿನಲ್ಲಿ ನಡೆಯುವ ಕಂಬಳದಲ್ಲಿ ಬಾಲಿವುಡ್ ನಟಿ ಐಶ್ವರ್ಯಾ ರೈ, ನಟಿ ಅನುಷ್ಕಾ ಶೆಟ್ಟಿ ಸೇರಿದಂತೆ ನಾನಾ ಚಿತ್ರರಂಗಗಳಲ್ಲಿ ಇರುವ ಕರಾವಳಿ ಮೂಲದ ಸಿನಿಮಾತಾರೆಯರು ಆಗಮಿಸಲಿದ್ದಾರೆ ಎಂದು ಸಮಿತಿ ಸಂಘಟನಾ ಅಧ್ಯಕ್ಷ ಉಮೇಶ್ ಶೆಟ್ಟಿ ಮಾಹಿತಿ ನೀಡಿದ್ದಾರೆ.
“ಬೆಂಗಳೂರು ಕಂಬಳಕ್ಕೆ ಈಗಾಗಲೇ 150ಕ್ಕೂ ಅಧಿಕ ಕೋಣಗಳ ನೋಂದಣಿಯಾಗಿವೆ. ಕೋಣಗಳನ್ನು ಹಾಸನ ಹಾಗೂ ನೆಲಮಂಗಲದಲ್ಲಿ ಅದ್ಧೂರಿಯಾಗಿ ಸ್ವಾಗತಿಸಿಕೊಳ್ಳಲಾಗುವುದು. ಜತೆಗೆ ಪ್ರತಿ ತಾಲೂಕಿನಲ್ಲಿ ಸ್ವಾಗತ ಮತ್ತು ಬೀಳ್ಕೊಡುಗೆ ಇರಲಿದೆ” ಎಂದು ಕಂಬಳ ಸಮಿತಿ ಅಧ್ಯಕ್ಷ, ಶಾಸಕ ಅಶೋಕ್ ರೈ ತಿಳಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಲಕ್ಷ್ಮೀ ಪೂಜೆಗಿಟ್ಟಿದ್ದ ಚಿನ್ನ, ವಜ್ರಾಭರಣ ಕಳ್ಳತನ; ದೂರು ದಾಖಲು
ಕರಾವಳಿ ಭಾಗದ ಐತಿಹಾಸಿಕ ಕಾರ್ಯಕ್ರಮವಾದ ಕಂಬಳಕ್ಕೆ ‘ಬೆಂಗಳೂರು ಕಂಬಳ ನಮ್ಮ ಕಂಬಳ’ ಎಂಬ ಥೀಮ್ ಸಾಂಗ್ ಬಿಡುಗಡೆ ಮಾಡಲಾಗಿದೆ. ಈ ಥೀಮ್ ಸಾಂಗ್ಗೆ ವಿ.ಮನೋಹರ್ ಸಾಹಿತ್ಯ, ಗುರುಕಿರಣ್ ಸಂಗೀತ ಸಂಯೋಜನೆ, ಮಣಿಕಾಂತ್ ಕದ್ರಿ ಪ್ರೋಗ್ರಾಮಿಂಗ್‌ನಲ್ಲಿ ಮೂಡಿ ಬಂದಿದೆ.