ಬೇಡಿಕೆಗಳ ಈಡೇರಿಕೆಗಾಗಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ನ.20 ರಿಂದ ಅನಿರ್ದಿಷ್ಟಾವಧಿಯವರೆಗೆ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.
ಎಐಟಿಯುಸಿ ಜಯಮ್ಮ ನೇತೃತ್ವದಲ್ಲಿ ಈ ಪ್ರತಿಭಟನೆ ನಡೆಯಲಿದೆ. ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರನ್ನು ಆಫ್‌ಲೈನ್ ಮುಖಾಂತರ ನೇಮಕಾತಿ ಮಾಡಿಕೊಳ್ಳಬೇಕು ಹಾಗೂ ಈಗಾಗಲೇ ಹುದ್ದೆ ಭರ್ತಿಗೆ ಆಹ್ವಾನ ನೀಡಿಲಾಗಿದ್ದು, ಹಲವು ಜನ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿ ಸಲ್ಲಿಸಿ ಎಂಟು ತಿಂಗಳು ಕಳೆದರೂ ಇನ್ನೂ ನೇಮಕಾತಿ ಪ್ರಕ್ರಿಯೆ ನಡೆಯುತ್ತಿಲ್ಲ. ಕೂಡಲೇ ನೇಮಕಾತಿ ಪ್ರಕ್ರಿಯೆ ನಡೆಯಬೇಕು ಎಂದು ಅಂಗನವಾಡಿ ಕಾರ್ಯಕರ್ತೆಯರು ಒತ್ತಾಯಿಸಿದ್ದಾರೆ.
ಬೆಂಗಳೂರಿನಲ್ಲಿ ಒಟ್ಟು 2,877 ಅಂಗನವಾಡಿ ಕೇಂದ್ರಗಳಿವೆ. ಈ ಪೈಕಿ 430 ಅಂಗನವಾಡಿ ಕಾರ್ಯಕರ್ತೆಯರ ಹುದ್ದೆ ಮತ್ತು 1,198 ಸಹಾಯಕಿಯರ ಹುದ್ದೆಗಳು ಖಾಲಿ ಇದ್ದು, ನೇಮಕಾತಿಗಾಗಿ ಮಾರ್ಚ್ 5 ರಂದು ಪ್ರಕಟಣೆ ಹೊರಡಿಸಲಾಗಿದೆ.
ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಜ್ಯುವೆಲರಿ ಶಾಪ್ ಮಾಲೀಕರ ಮನೆಯಲ್ಲಿ ಆಭರಣ ಮತ್ತು ಲಕ್ಷಾಂತರ ರೂ. ಕದ್ದ ಕೆಲಸಗಾರ
ಕಳೆದ ನಾಲ್ಕೈದು ವರ್ಷಗಳಿಂದ ಈ ಹುದ್ದೆಗಳ ನೇಮಕಾತಿ ನಡೆದಿಲ್ಲ. ಈಗ ನೇಮಕಾತಿಗೆ ಪ್ರಕಟಣೆ ಹೊರಡಿಸಿದರೂ, ಇನ್ನೂ ನೇಮಕಾತಿ ಪ್ರಕ್ರಿಯೆ ವಿಳಂಬ ಮಾಡುತ್ತಿರುವುದು ಅಂಗನವಾಡಿ ಕಾರ್ಯಕರ್ತೆಯರ ಕೆಂಗಣ್ಣಿಗೆ ಗುರಿಯಾಗಿದೆ.