ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕಗಳಿಗೆ ನಟ ಪುನೀತ್ ರಾಜ್‌ಕುಮಾರ್ ಅವರ ಹೆಸರು ಇಡಲು ಸೂಕ್ತ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರ ಪಾಲಿಕೆಯ ಮುಖ್ಯ ಆಯುಕ್ತರಿಗೆ ಸೂಚಿಸಿದೆ.
ಬೆಂಗಳೂರಿನಲ್ಲಿ ಸಾವಿರಾರು ಕುಡಿಯುವ ನೀರಿನ ಘಟಕಗಳು ಕಾರ್ಯನಿರ್ವಹಿಸುತ್ತಿವೆ. ನಾಡು ಕಂಡ ಶೇಷ್ಠ ಕಲಾವಿದ, ಹೃದಯ ಶ್ರೀಮಂತ, ಕರ್ನಾಟಕ ರತ್ನ ಡಾ. ಪುನೀತ್ ರಾಜ್‌ಕುಮಾರ್ ಅವರ ಸವಿನೆನಪಿನಲ್ಲಿ ಪುನೀತ್ ರಾಜ್ ಕುಮಾರ್ ಶುದ್ದ ಕುಡಿಯುವ ನೀರಿನ ಘಟಕ ಎಂದು ಈ ಯೋಜನೆಗೆ ನಾಮಕರಣ ಮಾಡಬೇಕು ಎಂದು ಮಾಹಿತಿ ಹಕ್ಕು ಅಧ್ಯಯನ ಸಂಸ್ಥೆಯ ಮ್ಯಾನೇಜಿಂಗ್ ಟ್ರಸ್ಟಿ ಎಸ್.ಅಮರೇಶ್ (ಅಂಬರೀಶ್) ಅವರು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದರು.
ಈ ಮನವಿ ಮೇರೆಗೆ ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿ ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಆದೇಶ ನೀಡಿದ್ದಾರೆ.
ಎಸ್.ಅಮರೇಶ್ ಮಾತನಾಡಿ, “ಕರ್ನಾಟಕ ರತ್ನ ಡಾ.ಪುನೀತ್ ರಾಜ್ ಕುಮಾರ್ ರವರು ಬಾಲ್ಯದಿಂದಲೇ ಕಲಾ ಸೇವೆ ಮಾಡುತ್ತಾ ಬಂದಿದ್ದಾರೆ. ಸಮಾಜಕ್ಕೆ ಉತ್ತಮ ಸಂದೇಶ ಸಾರುವ ಚಿತ್ರಗಳಲ್ಲಿ ಅಭಿನಯಿಸಿ ಉತ್ತಮ ಸಮಾಜ ನಿರ್ಮಾಣಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಭಾರತದ ಚಲನಚಿತ್ರರಂಗದ ಅದ್ಬುತ ಕಲಾ ಪ್ರತಿಭೆ ಎಂಬ ಖ್ಯಾತಿ ಪಡೆದಿದ್ದಾರೆ. ಸಾವಿರಾರು ಮಕ್ಕಳಿಗೆ ಉಚಿತ ವಸತಿ ಶಿಕ್ಷಣ, ಗೋಸೇವೆ ಮತ್ತು ಹಲವಾರು ಸಾಮಾಜಿಕ ಮುಖಿ ಕಾರ್ಯಗಳು ಮಾಡಿದ್ದಾರೆ” ಎಂದು ಹೇಳಿದ್ದಾರೆ.
ಈ ಸುದ್ದಿ ಓದಿದ್ದೀರಾ? ಬೆಂಗಳೂರು | ನಿಯಮ ಉಲ್ಲಂಘಿಸಿ ಪಟಾಕಿ ಸಿಡಿಸಿದ 305 ಮಂದಿ ವಿರುದ್ಧ ದೂರು ದಾಖಲು
“ಡಾ.ಪುನೀತ್ ರಾಜ್ ಕುಮಾರ್ ರವರ ಜೀವನ ಆದರ್ಶಗಳು ನಮಗೆ ದಾರಿದೀಪವಾಗಿದೆ. ಅವರ ಹೆಸರು ಚಿರಸ್ಥಾಯಿಯಾಗಿ ಉಳಿಯಲಿ ಎಂಬ ಉದ್ದೇಶದಿಂದ ಶುದ್ದ ಕುಡಿಯುವ ನೀರಿನ ಘಟಕದ ಯೋಜನೆಗೆ ಮತ್ತು ಘಟಕಗಳ ಮೇಲೆ ಡಾ.ಪುನೀತ್ ರಾಜ್ ಕುಮಾರ್ ಶುದ್ದ ಕುಡಿಯುವ ನೀರಿನ ಘಟಕ ಎಂದು ನಾಮಕರಣ ಮಾಡಬೇಕು ಎಂದು ಮನವಿ ಸಲ್ಲಿಸಲಾಗಿದೆ. ಕೂಡಲೇ ಕ್ರಮ ವಹಿಸಬೇಕು ಎಂದು ಮುಖ್ಯ ಆಯುಕ್ತರಿಗೆ ವಿನಂತಿಸಲಾಗುವುದು” ಎಂದು ತಿಳಿಸಿದ್ದಾರೆ.