ಕಾಂತರಾಜ ಆಯೋಗದ ವರದಿ ಬಿಡುಗಡೆ, ಸದಾಶಿವ ಆಯೋಗದ ವರದಿಯನ್ನು ಕೇಂದ್ರಕ್ಕೆ ಶಿಫಾರಸು ಹಾಗೂ ಮುಸಲ್ಮಾನರ 2ಬಿ ಮೀಸಲಾತಿಯ ಗೊಂದಲ ನಿವಾರಣೆ ಮಾಡಿ ಮೀಸಲಾತಿ ಪ್ರಮಾಣವನ್ನು ಶೇ.8ಕ್ಕೆ ಏರಿಸಲು ಹಾಸದಲ್ಲಿ ಸರ್ಕಾರವನ್ನು ಒತ್ತಾಯಪಡಿಸಲು ಕೋರಿ ಎಸ್‌ಡಿಪಿಐ ನಿಯೋಗ ಹಾಸನ ಶಾಸಕ ಎಚ್ ಪಿ ಸ್ವರೂಪ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.
“ಸಾಮಾಜಿಕ ನ್ಯಾಯದ ನೆಲೆಗಟ್ಟಿನಲ್ಲಿ, ನಾಡಿನ ಸಮಸ್ತ ಪ್ರಜೆಗಳಿಗೂ ಸಮಾನ ಅವಕಾಶ, ಹಕ್ಕು, ಅಧಿಕಾರ ಮತ್ತು ಆಸ್ತಿ ಹಂಚಿಕೆಯಾಗಬೇಕು ಎನ್ನುವುದು ಸಂವಿಧಾನದ ಆಶಯವಾಗಿರುತ್ತದೆ. ಅದೇ
ನಿಟ್ಟಿನಲ್ಲಿ ಎಲ್ಲರಿಗೂ ಸಮಾನ ಹಕ್ಕು, ಅಧಿಕಾರ ಮತ್ತು ಅವಕಾಶಗಳು ಸಿಗಬೇಕೆನ್ನುವ ಉದ್ದೇಶದಿಂದಲೇ, ರಾಜ್ಯದ ಎಲ್ಲ ಜಾತಿ ಸಮುದಾಯಗಳ ಸಾಮಾಜಿಕ ಮತ್ತು ಆರ್ಥಿಕ ಸ್ಥಿತಿಗತಿಗಳ
ಮಾಹಿತಿಯನ್ನು ಅಂಕಿ ಅಂಶಗಳ ಸಮೇತ ತಿಳಿದುಕೊಳ್ಳಲು ಕಾಂತರಾಜ್ ಆಯೋಗವನ್ನು ರಚಿಸಲಾಗಿತ್ತು. ಆಯೋಗವು ವರ್ಷಗಟ್ಟಲೇ ರಾಜ್ಯಾದ್ಯಂತ ಸಮೀಕ್ಷೆ ನಡೆಸಿ, ಜಾತಿ
ಮತ್ತಿತರ ಕಾರಣಗಳಿಗಾಗಿ ತಮ್ಮ ಹಕ್ಕು ಅಧಿಕಾರಗಳಿಂದ ವಂಚಿತರಾಗಿ, ಹಲವು ರೀತಿಯಲ್ಲಿ ಶೋಷಣೆಗೊಳಗಾಗಿರುವ ಜಾತಿ ಸಮುದಾಯಗಳ ವಾಸ್ತವ ಸ್ಥಿತಿಗಳ ಬಗ್ಗೆ ಅಂಕಿ ಅಂಶಗಳ
ಸಮೇತ ವರದಿ ನೀಡಿರುತ್ತದೆ ಎಂದು ಆಯೋಗದ ಮುಖ್ಯಸ್ಥರೇ ಹೇಳಿಕೊಂಡಿದ್ದಾರೆ” ಎಂದು ಎಸ್‌ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಅಫ್ಸರ್ ಕೊಡ್ಲಿಪೇಟೆ ಅವರು ಶಾಸಕರಿಗೆ ಮನವರಿಕೆ ಮಾಡಿದರು.
“₹167 ಕೋಟಿ ಖರ್ಚು ಮಾಡಿ ಸಿದ್ಧಪಡಿಸಲಾಗಿರುವ ಕಾಂತರಾಜ್ ಆಯೋಗದ ವರದಿಯನ್ನು ಸ್ವೀಕರಿಸಲು ಸರ್ಕಾರವು ಸಲ್ಲದ ನೆಪ ಹೇಳಿಕೊಂಡು ಬರುತ್ತಿದೆ. ಇದನ್ನು ನಾವು ಬಲವಾಗಿ ಖಂಡಿಸುತ್ತೇವೆ” ಎಂದು ಹೇಳಿದರು.
ಈ ಸುದ್ದಿ ಓದಿದ್ದೀರಾ? ಕಲಬುರಗಿ | ಮಹಿಳೆ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಅಕ್ರಮ; ಮೇಲ್ವಿಚಾರಕಿ ಅಮಾನತಿಗೆ ಆಗ್ರಹ
ಸಕಾರಾತ್ಮಕವಾಗಿ ಸ್ಪಂದಿಸಿದ ಶಾಸಕರು ಮುಂದಿನ ಚಳಿಗಾಲದ ಅಧಿವೇಶನದಲ್ಲಿ ಈ ಬಗ್ಗೆ ಧ್ವನಿ ಎತ್ತುವುದಾಗಿ ಭರವಸೆ ನೀಡಿದರು.
ಈ ಸಂದರ್ಭ ರಾಜ್ಯ ಪ್ರಧಾನ ಕಾರ್ಯದರ್ಶಿ ಅಫ್ಸರ್ ಕೊಡ್ಲಿಪೇಟೆ, ಹಾಸನ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸೈಯದ್ ಫರೀದ್, ಹಾಸನ ವಿಧಾನಸಭಾ ಕ್ಷೇತ್ರ ಅಧ್ಯಕ್ಷ ಶಜೀಲ್ ಅಹ್ಮದ್ ಮತ್ತು ಹಾಸನ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಸೈಯದ್ ನದೀಂ ಇದ್ದರು.