ಬೆಂಗಳೂರು ಕೇಂದ್ರ ವ್ಯಾಪ್ತಿಯಲ್ಲಿ ಬರುವ ಲಿಂಗ ಪ್ರಮಾಣ, ಚುನಾವಣಾ ಜನಸಂಖ್ಯೆ (ಇಪಿ) ಪ್ರಮಾಣ ಹಾಗೂ ಯುವ ಮತದಾರರ ನೋಂದಣಿ ಪ್ರಮಾಣವನ್ನು ಹೆಚ್ಚಳ ಮಾಡಲು ಕ್ರಿಯಾಯೋಜನೆ ರೂಪಿಸಿಕೊಳ್ಳಬೇಕು ಎಂದು ಬೆಂಗಳೂರು ಕೇಂದ್ರದ ಮತದಾರರ ಪಟ್ಟಿ ವೀಕ್ಷಕರು ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಉಮಾ ಮಹದೇವನ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬೆಂಗಳೂರು ಕೇಂದ್ರ ವ್ಯಾಪ್ತಿಯಲ್ಲಿನ ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯ ಪರಿಶೀಲನೆ ಕುರಿತು ನ.23 ರಂದು ರಾಜಕೀಯ ಪಕ್ಷದ ಪ್ರತಿನಿಧಿಗಳ ಜೊತೆ ಸಭೆ ನಡೆಯಿತು. ಈ ವೇಳೆ ಮಾತನಾಡಿದ ಅವರು, “ಬೆಂಗಳೂರು ಕೇಂದ್ರ ವ್ಯಾಪ್ತಿಯಲ್ಲಿ ಬರುವ 7 ವಿಧಾನಸಭಾ ಕ್ಷೇತ್ರ (ಆರ್.ಆರ್.ನಗರ, ಶಿವಾಜಿನಗರ, ಶಾಂತಿನಗರ, ಚಾಮರಾಜಪೇಟೆ, ಚಿಕ್ಕಪೇಟೆ, ಗಾಂಧಿನಗರ, ರಾಜಾಜಿನಗರ)ಗಳಲ್ಲಿ ಮತದಾರರ ಪ್ರಮಾಣ ಹೆಚ್ಚಳ ಮಾಡಲು ಅಗತ್ಯ ಕ್ರಮ ಕೈಗೊಳ್ಳಬೇಕು” ಎಂದು ಹೇಳಿದರು.
“ಬೆಂಗಳೂರು ಕೆಂದ್ರ ವ್ಯಾಪ್ತಿಯಲ್ಲಿ ಐಇಸಿ ಕಾರ್ಯಕ್ರಮಗಳನ್ನು ಹೆಚ್ಚಾಗಿ ಹಮ್ಮಿಕೊಂಡು ಮತದಾರರ ಪಟ್ಟಿಯಲ್ಲಿ ಹೆಚ್ಚು ಸಂಖ್ಯೆಯಲ್ಲಿ ಸೇರ್ಪಡೆಯಾಗುವ ನಿಟ್ಟಿನಲ್ಲಿ ಶಾಲಾ-ಕಾಲೇಜು, ಕಚೇರಿಗಳು, ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘ ಹಾಗೂ ಕೊಳಗೇರಿ ಪ್ರದೇಶಗಳಲ್ಲಿ ಹೆಚ್ಚು ಹೆಚ್ಚು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಜತೆಗೆ ಆಯಾ ವಾರ್ಡ್ ವ್ಯಾಪ್ತಿಯಲ್ಲಿ ವಿಶೇಷ ಅಭಿಯಾನ ಹಮ್ಮಿಕೊಳ್ಳುವುದರ ಜತೆಗೆ ಧ್ವನಿವರ್ಧಕಗಳ ಮೂಲಕ ಅರಿವು ಮೂಡಿಸುವ ಕೆಲಸ ಮಾಡಬೇಕು” ಎಂದು ತಿಳಿಸಿದರು.
ಈ ಸುದ್ದಿ ಓದಿದ್ದೀರಾ? ಬೆಂಗಳೂರು | ವರದಕ್ಷಿಣೆ ಕಿರುಕುಳ; ನೇಣುಬಿಗಿದ ಸ್ಥಿತಿಯಲ್ಲಿ ಗೃಹಿಣಿಯ ಶವ ಪತ್ತೆ
“ಬೆಂಗಳೂರು ಕೇಂದ್ರ ವ್ಯಾಪ್ತಿಯಲ್ಲಿ ಮತದಾರರ ಪಟ್ಟಿಯಲ್ಲಿ ಮಹಿಳೆಯರು ಹೆಚ್ಚು ಸೇರ್ಪಡೆಯಾಗಬೇಕು. ಈ ಸಂಬಂಧ ಇದಕ್ಕೆ ಬೇಕಾದ ಅಗತ್ಯತೆಗಳನ್ನು ಮಾಡಿಕೊಂಡು ಸೂಕ್ತ ರೀತಿಯಲ್ಲಿ ಯೋಜನೆಗಳನ್ನು ರೂಪಿಸಿಕೊಂಡು ಮತದಾರರ ಪಟ್ಟಿಯಲ್ಲಿ ಮಹಿಳೆಯರ ಸಂಖ್ಯೆ ಹೆಚ್ಚಳವಾಗುವಂತೆ ಮಾಡಬೇಕು” ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಬೆಯಲ್ಲಿ ಬೆಂಗಳೂರು ಕೇಂದ್ರ ಚುನಾವಣಾ ಜಿಲ್ಲೆಯ ಹೆಚ್ಚುವರಿ ಜಿಲ್ಲಾ ಚುನಾವಣಾಧಿಕಾರಿ ಡಾ. ಕೆ ಹರೀಶ್ ಕುಮಾರ್, ಚುನಾವಣಾ ವಿಭಾಗದ ಸಹಾಯಕ ಆಯುಕ್ತರಾದ ಅಜಯ್ ಸೇರಿದಂತೆ ಚುನಾವಣಾ ವಿಭಾಗದ ಅಧಿಕಾರಿಗಳು, ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.