ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ರೈತರೊಬ್ಬರು ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್ ಪೇಟೆ ತಾಲೂಕಿನ ಬೇಳತೂರು ಗ್ರಾಮದಲ್ಲಿ ನಡೆದಿದೆ.
ಗ್ರಾಮದ ರವಿಕುಮಾರ್ ಮೃತ ರೈತ. ತಾಲೂಕಿನ ರಾಜೇನಹಳ್ಳಿ ಗ್ರಾಮದವರಾದ ರವಿಕುಮಾರ್, ಗುರುವಾರ ಬೆಳತೂರು ಬಳಿ ಇರುವ ತಮ್ಮ ಜಮೀನಿಗೆ ತೆರಳಿದ್ದರು. ಈ ವೇಳೆ, ತುಂಡಾಗಿ ಬಿದ್ದ ವಿದ್ಯುತ್ ತಂತಿಯನ್ನು ಗಮನಿಸದೆ ತುಳಿದಿದ್ದಾರೆ. ಪರಿಣಾಮ, ವಿದ್ಯುತ್ ಪ್ರವಹಿಸಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಮಧ್ಯಹ್ನ ಹುಲ್ಲು ಕೊಯ್ಯಲು ಹೋದವರು ಸಂಜೆಯಾದರೂ ಮನೆಗೆ ಬರದ್ದನ್ನು ಗಮನಿಸಿದ ರವಿಕುಮಾರ್ ಅವರ ಕುಟುಂಬಸ್ಥರು, ಜಮೀನಿಗೆ ಬಂದಿದ್ದಾರೆ. ಅಲ್ಲಿ, ರವಿಕುಮಾರ್ ಅವರ ಮೃತದೇಹ ಪತ್ತೆಯಾಗಿದೆ ಎಂದು ವರದಿಯಾಗಿದೆ.
ರವಿಕುಮಾರ್ ಸಾವಿಗೆ ಚೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ. ಕೆಆರ್ ಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.