- ಇಂತಹ ಅಭ್ಯರ್ಥಿಗಳಿಗೆ ಮತ ಹಾಕಿ ಎಂದು ಜಾಹೀರಾತಿನಲ್ಲಿ ತಿಳಿಸಿಲ್ಲ
- ಚುನಾವಣಾ ಆಯೋಗದ ನೋಟಿಸ್‌ಗೆ ಉತ್ತರ ನೀಡುತ್ತೇವೆ: ಡಿಕೆಶಿ
ನಮ್ಮ ಸರ್ಕಾರದ ಜಾಹೀರಾತಿನಲ್ಲಿ ನಮ್ಮ ಸಾಧನೆಗಳನ್ನು ಹೇಳಿಕೊಂಡಿದ್ದೇವೆಯೇ ಹೊರತು ಮತಯಾಚನೆ ಮಾಡಿಲ್ಲ. ಹೀಗಾಗಿ ಇದು ನೀತಿ ಸಂಹಿತೆ ಉಲ್ಲಂಘನೆ ಆಗುವುದಿಲ್ಲ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು.
ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಂಗಳವಾರ ಮಾತನಾಡಿದ ಅವರು, ತೆಲಂಗಾಣದ ಪತ್ರಿಕೆಗಳಲ್ಲಿ ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳ ಜಾಹೀರಾತಿನ ವಿಚಾರವಾಗಿ ಚುನಾವಣಾ ಆಯೋಗ ನೋಟಿಸ್ ಜಾರಿ ಮಾಡಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಶಿವಕುಮಾರ್ ಅವರು ಈ ರೀತಿ ಉತ್ತರಿಸಿದರು.
“ಜಾಹೀರಾತಿನಲ್ಲಿ ಸರ್ಕಾರದ ಕೆಲಸದ ಬಗ್ಗೆ ಮಾಹಿತಿ ಇದೆ. ಕಾಂಗ್ರೆಸ್ ಪಕ್ಷಕ್ಕೆ ಅಥವಾ ಇಂತಹ ಅಭ್ಯರ್ಥಿಗಳಿಗೆ ಮತ ಹಾಕಿ ಎಂದು ಜಾಹೀರಾತಿನಲ್ಲಿ ತಿಳಿಸಿಲ್ಲ. ಇದು ಉಲ್ಲಂಘನೆ ಹೇಗೆ ಆಗುತ್ತದೆ? ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿಲ್ಲ ಎಂದು ಅವರು ಅಲ್ಲಿ ಪ್ರಚಾರ ಮಾಡುತ್ತಿದ್ದಾರೆ” ಎಂದರು.
ಈ ಸುದ್ದಿ ಓದಿದ್ದೀರಾ? ನಿಗಮ ಮಂಡಳಿ ನೇಮಕಾತಿಯಲ್ಲಿ ಯಾರ ಅಭಿಪ್ರಾಯ ಪಡೆದಿಲ್ಲ: ಸಿದ್ದರಾಮಯ್ಯ
“ನಾವು ಪತ್ರಿಕೆ ಹಾಗೂ ಮ್ಯಾಗಜಿನ್ ಗಳಲ್ಲಿ ನೀಡುವ ಜಾಹೀರಾತು ಕೆಲವೊಮ್ಮೆ ತೆಲಂಗಾಣ, ತಮಿಳುನಾಡು ಸೇರಿದಂತೆ ಬೇರೆ ರಾಜ್ಯಗಳಿಗೂ ಹೋಗುತ್ತದೆ. ನಾವು ಮತ ಯಾಚನೆ ಮಾಡಿದ್ದರೆ ಆಗ ನಿಯಮ ಉಲ್ಲಂಘನೆ ಆಗುತ್ತಿತ್ತು. ಚುನಾವಣಾ ಆಯೋಗದ ನೋಟಿಸ್‌ಗೆ ಉತ್ತರ ನೀಡುತ್ತೇವೆ” ಎಂದು ತಿಳಿಸಿದರು.
ನಿಗಮ ಮಂಡಳಿ ನೇಮಕ ಸಭೆ ಬಗ್ಗೆ ಕೇಳಿದಾಗ, “ಈ ವಿಚಾರವಾಗಿ ಈಗಾಗಲೇ ಎರಡು ಮೂರು ಸುತ್ತಿನ ಸಭೆಗಳು ನಡೆದಿವೆ. ಇಂದು ಕೂಡ ಸಭೆ ಮಾಡಿ ಪಟ್ಟಿಯನ್ನು ದೆಹಲಿಗೆ ರವಾನಿಸುತ್ತೇವೆ” ಎಂದು ತಿಳಿಸಿದರು.