ಸರ್ಕಾರದ ಯೋಜನೆಗಳ ಲಾಭ ಜಿಲ್ಲೆಯ ಹೆಚ್ಚಿನ ಜನರು ಪಡೆಯುವಂತಾಗಬೇಕು ಆದ್ದರಿಂದ ಅಧಿಕಾರಿಗಳು ತಮ್ಮ ಇಲಾಖೆಗೆ ಬರುವ ಅರ್ಜಿಗಳನ್ನು ಶೀಘ್ರ ವಿಲೇವಾರಿ ಮಾಡಬೇಕು ಎಂದು ಸರ್ಕಾರದ ವಿಶೇಷ ಆಯುಕ್ತರು (ಕಂದಾಯ) ಬಿ.ಬಿ.ಎಂ.ಪಿ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ, ಜಿಲ್ಲಾ ಪಂಚಾಯತ ಆಡಳಿತಾಧಿಕಾರಿ ಮುನೀಶ್ ಮೌದ್ಗಿಲ್ ಹೇಳಿದರು.
ಬುಧವಾರ ಬೀದರ ಜಿಲ್ಲಾ ಪಂಚಾಯತ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಹಾಗೂ ತಾಲ್ಲೂಕ ಮಟ್ಟದ ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನೆ ಸಭೆ ನಡೆಸಿ ಮಾತನಾಡಿ, “ಜಿಲ್ಲೆಯ ರೈತರು ಬರ ಪರಿಹಾರ ಪಡೆಯಲು ಯಾವುದೇ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು, ಎಸ್ಎಸ್ಎಲ್ಸಿ. ಹಾಗೂ ಪಿಯುಸಿ ಪರೀಕ್ಷೆ ಫಲಿತಾಂಶ ವೃದ್ಧಿಗೆ ಕ್ರಮ ವಹಿಸಬೇಕು” ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಅವರು ಮಾತನಾಡಿ, ಜಿಲ್ಲೆಯ ಎಂಟು ತಾಲ್ಲೂಕಗಳನ್ನು ಬರ ಪೀಡಿತ ಎಂದು ಘೋಷಣೆ ಮಾಡಲಾಗಿದೆ, ಪ್ರಸ್ತುತ ಜಿಲ್ಲೆಯಲ್ಲಿ ಕುಡಿಯುವ ನೀರಿನ ಹಾಗೂ ಮೇವಿನ ಕೊರತೆ ಇಲ್ಲ ಎಂದರು. ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ವಿವಿಧ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದರು.
ಈ ಸುದ್ದಿ ಓದಿದ್ದೀರಾ? ಕಲಬುರಗಿ | ಕನಕ ಜಯಂತಿ ಮೆರವಣಿಗೆ ವೇಳೆ ಯುವಕರ ನಡುವೆ ಗಲಾಟೆ
ಈ ಸಭೆಯಲ್ಲಿ ಜಿಲ್ಲಾ ಪಂಚಾಯತ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ.ಎಂ, ಬೀದರ ಸಹಾಯಕ ಆಯುಕ್ತ ಲವೀಶ್ ಓರ್ಡಿಯಾ,ಅಪರ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪ ನಿರ್ದೇಶಕ ಪ್ರಭಾಕರ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪ ನಿರ್ದೇಶಕಿ ಸುರೇಖಾ, ಬಸವಕಲ್ಯಾಣ ಸಹಾಯಕ ಆಯುಕ್ತರು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.