ಯುವತಿಯೊಬ್ಬರಿಗೆ ಮದುವೆಯಾಗುವುದಾಗಿ ನಂಬಿಸಿ ಲೈಂಗಿಕವಾಗಿ ಬಳಸಿಕೊಂಡು ಮೋಸ ಮಾಡಿದ ಆರೋಪ ಬಳ್ಳಾರಿ ಬಿಜೆಪಿ ಸಂಸದ ದೇವೇಂದ್ರಪ್ಪ ಪುತ್ರನ ಮೇಲೆ ಕೇಳಿಬಂದಿದೆ.
ಸಂಸದ ದೇವೇಂದ್ರಪ್ಪ ಪುತ್ರ ರಂಗನಾಥ್ ಅವರ ವಿರುದ್ಧ ಬೆಂಗಳೂರಿನ ಬಸವನಗುಡಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಉಪನ್ಯಾಸಕರಾಗಿ ರಂಗನಾಥ್ ಕಾರ್ಯನಿರ್ವಹಿಸುತ್ತಿದ್ದಾರೆ. ಬೆಂಗಳೂರು ಮೂಲದ ಯುವತಿಯನ್ನು ಕಳೆದ ಒಂದು ವರ್ಷದ ಹಿಂದೆ ರಂಗನಾಥ್ ಅವರು ಪರಿಚಯ ಮಾಡಿಕೊಂಡಿದ್ದರು. ಬಳಿಕ ಅವರನ್ನು ಕಳೆದ ಜನವರಿಯಲ್ಲಿ ಮೈಸೂರಿನ ಹೋಟೆಲ್‌ವೊಂದಕ್ಕೆ ಕರೆಸಿಕೊಂಡಿದ್ದಾರೆ. ಈ ವೇಳೆ, ಅವರೊಂದಿಗೆ ದೈಹಿಕ ಸಂಬಂಧ ಬೆಳೆಸಿದ್ದಾರೆ ಎಂದು ಆರೋಪಿಸಲಾಗಿದೆ.
ಪ್ರೀತಿ ಮಾಡಿ, ದೈಹಿಕ ಸಂಬಂಧ ಬೆಳೆಸಿ ಇದೀಗ ಮದುವೆಯಾಗಲು ಹಿಂದೇಟು ಹಾಕುತ್ತಿದ್ದಾರೆ ಎಂದು ಯುವತಿ ದೂರಿನಲ್ಲಿ ಆರೋಪಿಸಿದ್ದಾರೆ. ಯುವತಿ ನೀಡಿದ ದೂರಿನ ಮೇರೆಗೆ ಬೆಂಗಳೂರಿನ ಬಸವನಗುಡಿ ಮಹಿಳಾ ಪೊಲೀಸ್ ಠಾಣೆಯಲ್ಲಿ ರಂಗನಾಥ್ ವಿರುದ್ಧ ಐಪಿಸಿ ಸೆಕ್ಷನ್ 420, 417, 506 ಅಡಿಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಬಸವನಗುಡಿ ಮಹಿಳಾ ಪೊಲೀಸ್ ಠಾಣೆಯಿಂದ ಯುವತಿ ಮತ್ತು ರಂಗನಾಥ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ.
ಈ ಸುದ್ದಿ ಓದಿದ್ದೀರಾ? ಬೆಂಗಳೂರು | ವಿವಾಹೇತರ ಸಂಬಂಧ; ಮಹಿಳೆಯ ಪತಿಯನ್ನ ಹತ್ಯೆಗೈದ ಆರೋಪಿ; ಬಂಧನ
ಪ್ರತಿ ದೂರು ದಾಖಲು ಮಾಡಿದ ರಂಗನಾಥ್
ಫೋಟೋ ಮತ್ತು ಆಡಿಯೋ ಇಟ್ಟುಕೊಂಡು ₹15 ಲಕ್ಷ ನೀಡುವಂತೆ ಬ್ಲಾಕ್ ಮೇಲ್ ಮಾಡುತ್ತಿದ್ದಾರೆ ಎಂದು ರಂಗನಾಥ್ ಅವರು ಯುವತಿ ವಿರುದ್ಧ ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರತಿದೂರು ದಾಖಲು ಮಾಡಿದ್ದಾರೆ.
ಪ್ರಕರಣದ ಬಗ್ಗೆ ಈ ದಿನ.ಕಾಮ್ ಜತೆಗೆ ಮಾತನಾಡಿದ ಬೆಂಗಳೂರಿನ ಬಸವನಗುಡಿ ಮಹಿಳಾ ಠಾಣೆಯ ಪೊಲೀಸ್ ಅಧಿಕಾರಿಯೊಬ್ಬರು, “ಯುವತಿ ನೀಡಿದ ದೂರಿನ ಆಧಾರದಲ್ಲಿ ಪ್ರಕರಣ ದಾಖಲಾಗಿದೆ. ಇಬ್ಬರಿಗೂ ನೋಟಿಸ್ ನೀಡಲಾಗಿದೆ. ಅವರು ಇನ್ನೂ ವಿಚಾರಣೆಗೆ ಹಾಜರಾಗಿಲ್ಲ” ಎಂದರು.
ಸದ್ಯ ಯುವತಿ ಮತ್ತು ರಂಗನಾಥ್ ಅವರು ದೂರು ಮತ್ತು ಪ್ರತಿದೂರು ದಾಖಲು ಮಾಡಿದ್ದು, ಪೊಲೀಸ್ ತನಿಖೆ ಬಳಿಕ ಸತ್ಯಾಸತ್ಯತೆ ತಿಳಿದು ಬರಲಿದೆ.