ಬಿಎಂಟಿಸಿ ಬಸ್ ಹರದು ವಿಶೇಷಚೇತನ ಯುವಕ ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಘಟನೆ ಬೆಂಗಳೂರಿನ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಬುಧವಾರ ತಡರಾತ್ರಿ ನಡೆದಿದೆ. ಬಸ್ ಚಾಲನೆ ಮಾಡುತ್ತಿದ್ದ ಚಾಲಕ ಗೋಪಾಲ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಬುಧವಾರ ತಡರಾತ್ರಿ 12;30ರ ಸುಮಾರಿಗೆ ವಿಶೇಷಚೇತನ ಯುವಕ ಬುಸ್ ನಿಲ್ದಾಣದಲ್ಲಿ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ, ಹಿಂದಿನಿಂದ ವೇಗವಾಗಿ ಬಂದ ಬಸ್, ಆತನ ಮೇಲೆ ಹರಿದಿದೆ ಎಂದು ತಿಳಿದುಬಂದಿದೆ. ದುರ್ಘಟನೆಯಲ್ಲಿ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಅಪಘಾತ ಎಸಗಿದ ಚಾಲಕ ಪರಾರಿಯಾಗಲು ಯತ್ನಿಸಿದ್ದು, ಆತನನ್ನು ಸ್ಥಳದಲ್ಲಿದ್ದವರು ಚಾಲಕನನ್ನು ಹಿಡಿದಿದ್ದಾರೆ. ಪೊಲೀಸರಿಗೆ ಕರೆ ಮಾಡಿ, ಪೊಲೀಸರಿಗೆ ಒಪ್ಪಿಸಿದ್ದಾರೆ. ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತ ಯುವಕನ ಗುರುತು ಪತ್ತೆಗೆ ಪೊಲೀಸರು ಪ್ರಯತ್ನಿಸುತ್ತಿದ್ದಾರೆ.
ಬಸ್ ನಿಲ್ದಾಣಗಳಲ್ಲಿಯೂ ಚಾಲಕರು ವೇಗವಾಗಿ ಬಸ್ ಚಾಲನೆ ಮಾಡುತ್ತಾರೆ. ನಿಲ್ದಾಣದಲ್ಲಿ ಪ್ರಯಾಣಿಕರ ಸುರಕ್ಷತೆ ಬಗ್ಗೆ ಎಚ್ಚರವಹಿಸುತ್ತಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.