ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮುಂದಿನ ಏಳು ದಿನ ಹಗಲು ಮತ್ತು ರಾತ್ರಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಈ ಬಗ್ಗೆ ಈ ದಿನ.ಕಾಮ್ ಜತೆಗೆ ಮಾತನಾಡಿದ ಹವಾಮಾನ ಇಲಾಖೆ ತಜ್ಞ ಪ್ರಸಾದ್, “ವಾಯುಭಾರ ಕುಸಿತ ಉಂಟಾಗುವ ಹಿನ್ನೆಲೆ, ರಾಜ್ಯದಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಸೆಪ್ಟಂಬರ್ ತಿಂಗಳು ಪೂರ್ತಿ ಮಳೆಯಾಗುವ ಸಾಧ್ಯತೆ ಹೆಚ್ಚಾಗಿದೆ. ಈ ತಿಂಗಳು ವಾಡಿಕೆಗಿಂತ ಅಧಿಕ ಮಳೆಯಾಗುವ ನಿರೀಕ್ಷೆಯಿದೆ” ಎಂದು ಹೇಳಿದರು.
“ಕರ್ನಾಟಕ ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 40-45 ಕಿ.ಮೀ ನಿಂದ 55 ಕಿ.ಮೀ ವೇಗದಲ್ಲಿ ಬೀಸುವ ವಾತಾವರಣವಿದೆ. ಮುಂದಿನ ಏಳು ದಿನಗಳ ಕಾಲ ಕರಾವಳಿ, ದಕ್ಷಿಣ ಒಳನಾಡು, ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ” ಎಂದರು.
“ದಕ್ಷಿಣ ಒಳನಾಡು ಜಿಲ್ಲೆಗಳಲ್ಲೂ ಮುಂದಿನ ಒಂದು ವಾರ ಸಾಧಾರಣ ಮಳೆಯಾಗಲಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಮಳೆಯಾಗಲಿದೆ. ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಮತ್ತು ಮಿಂಚು ಸಹಿತ ಸಾಧಾರಣ ಮಳೆಯಾಗಲಿದೆ” ಎಂದು ಹೇಳಿದರು.
“ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ, ರಾತ್ರಿಯ ವೇಳೆಗೆ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕೆಲವೊಮ್ಮೆ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 31 ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಷಿಯಸ್ ಇರುವ ಸಾಧ್ಯತೆ ಇದೆ. ಕಳೆದ ಇಪ್ಪತ್ನಾಲ್ಕು ಗಂಟೆಗಳಲ್ಲಿ ನೈರುತ್ಯ ಮುಂಗಾರು ಕರಾವಳಿಯಲ್ಲಿ ಚುರುಕಾಗಿತ್ತು. ಆದರೆ, ಉತ್ತರ ಒಳನಾಡಿನಲ್ಲಿ ದುರ್ಬಲವಾಗಿತ್ತು ಹಾಗೂ ದಕ್ಷಿಣ ಒಳನಾಡಿನಲ್ಲಿ ಸಾಮಾನ್ಯವಾಗಿತ್ತು. ಕರಾವಳಿಯಲ್ಲಿ ವ್ಯಾಪಕವಾಗಿ, ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗಿದೆ” ಎಂದರು.
ಈ ಸುದ್ದಿ ಓದಿದ್ದೀರಾ? ರಾಜ್ಯದಲ್ಲಿ ಹುಕ್ಕಾ ಬಾರ್ ನಿಷೇಧ; ತಂಬಾಕು ಉತ್ಪನ್ನ ಖರೀದಿ ವಯೋಮಿತಿ 21 ವರ್ಷಕ್ಕೆ ಏರಿಕೆ: ದಿನೇಶ್ ಗುಂಡೂರಾವ್
“ಕಳೆದ 24 ಗಂಟೆಯಲ್ಲಿ ಉಡುಪಿ ಜಿಲ್ಲೆಯಲ್ಲಿ 82 ಮಿಮೀ ಮಳೆಯಾಗಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಸಾಧಾರಣ ಮಳೆಯಾಗಲಿದೆ. ಸೆ.20 ರಂದು ಗುಡುಗು ಮತ್ತು ಬಿರುಗಾಳಿ ಸಹಿತ ಮಳೆಯಾಗಲಿದೆ. ಗಾಳಿ ಗಂಟೆಗೆ 30-40 ಕಿಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದೆ” ಎಂದು ಹವಾಮಾನ ಇಲಾಖೆ ತಿಳಿಸಿದೆ.
“ರಾಯಚೂರು ಮತ್ತು ಯಾದಗಿರಿಯಲ್ಲಿ ಒಣಹವೆ ಇರಲಿದೆ. ಗಾಳಿಯ ವೇಗವು ಗಂಟೆಗೆ 30-40 ಕಿಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದೆ” ಎಂದು ಹವಾಮಾನ ಇಲಾಖೆ ತಿಳಿಸಿದೆ.