ಪೊಲೀಸ್ ವ್ಯವಸ್ಥೆಯನ್ನು ಇನ್ನೂ ಉತ್ತಮ ಪಡಿಸಲು ಬೆಂಗಳೂರು ನಗರ ಪೊಲೀಸರು ವಿನೂತನ ಪ್ರಯೋಗಕ್ಕೆ ಮುಂದಾಗಿದ್ದು, ಕ್ಯೂಆರ್ ಕೋಡ್ ಆಧಾರಿತ ಸಾರ್ವಜನಿಕರಿಂದ ಅಭಿಪ್ರಾಯ ಸಂಗ್ರಹಣೆಗೆ ಮುಂದಾಗಿದೆ. ಇದಕ್ಕೆ ‘ಲೋಕ ಸ್ಪಂದನೆ’ ಎಂದು ಹೆಸರಿಸಲಾಗಿದೆ.
ನಗರದ ಎಲ್ಲ ಪೊಲೀಸ್ ಠಾಣೆಗಳಲ್ಲಿ ಈ ಕ್ಯೂಆರ್ ಕೋಡ್ ಅಳವಡಿಸಲಾಗಿದ್ದು, ಸಾರ್ವಜನಿಕರು ಮುಕ್ತವಾಗಿ ಪೊಲೀಸ್ ಠಾಣೆಯ ವ್ಯವಸ್ಥೆಯ ಬಗ್ಗೆ ತಮ್ಮ ಅಭಿಪ್ರಾಯ ಮತ್ತು ಅನಿಸಿಕೆಗಳನ್ನು ಹಂಚಿಕೊಳ್ಳಬಹುದು.
ಈ ಸಂಬಂಧ ಟ್ವೀಟ್ ಮಾಡಿರುವ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ, ”ಕ್ಯೂಆರ್ ಕೋಡ್ ಆಧಾರಿತ ಸಾರ್ವಜನಿಕ ಅಭಿಪ್ರಾಯ ಸಂಗ್ರಹಣೆಯ ವ್ಯವಸ್ಥೆಯನ್ನು ನಗರದ ಎಲ್ಲ ಪೊಲೀಸ್ ಠಾಣೆಗಳಲ್ಲಿ ಅಳವಡಿಸಲಾಗಿದೆ. ಸಾರ್ವಜನಿಕರು ಈ ಮೂಲಕ ನಮ್ಮ ಸೇವೆಯ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ಮುಕ್ತವಾಗಿ ಮತ್ತು ಸರಳವಾಗಿ ತಂತ್ರಜ್ಞಾನ ಬಳಸಿ ಸಲಹೆ, ಸೂಚನೆ ನೀಡಬಹುದು. ಇದರಿಂದ ನಮ್ಮ ಪೊಲೀಸ್ ವ್ಯವಸ್ಥೆಯನ್ನು ಇನ್ನೂ ಉತ್ತಮಪಡಿಸಲು ಸಹಾಯವಾಗಲಿದೆ” ಎಂದು ತಿಳಿಸಿದ್ದಾರೆ.