ಬ್ಯಾಡ್ಮಿಂಟನ್ ತರಬೇತುದಾರನೊಬ್ಬ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಬೆಂಗಳೂರಿಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಬಾಲಕಿ ಮೇಲೆ ಅತ್ಯಾಚಾರ ಎಸಗಿರುವುದಲ್ಲದೆ, ಇತರ 8 ಅಪ್ರಾಪ್ತ ಬಾಲಕಿಯರ ಮೇಲೂ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ವರದಿಯಾಗಿದೆ.
ಬೆಂಗಳೂರಿನ ಹುಳಿಮಾವು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಬೆಳಕಿಗೆ ಬಂದಿದೆ. ತಮಿಳುನಾಡು ಮೂಲದ ಸುರೇಶ್ ಬಾಲಾಜಿ ಎಂಬಾತ ಪ್ರಕರಣದ ಆರೋಪಿ. ಈತ ಬ್ಯಾಡ್ಮಿಂಟನ್ ಕೋಚ್ ಆಗಿ ಕೆಲಸ ಮಾಡುತ್ತಿದ್ದು, ಬ್ಯಾಡ್ಮಿಂಟನ್ ಹೇಳಿಕೊಡುವ ನೆಪದಲ್ಲಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ.
ಸಂತ್ರಸ್ತ ಬಾಲಕಿ ಕಳೆದ ಎರಡು ವರ್ಷಗಳ ಹಿಂದೆ ಬ್ಯಾಡ್ಮಿಂಟನ್ ಕೋಚಿಂಗ್ ಸೇರಿದ್ದಳು. ಆಕೆಯನ್ನು ಬೆದರಿಸಿ, ಪುಸಲಾಯಿಸಿದ್ದ ಕಾಮುಕ ಆರೋಪಿ ಆಕೆಯನ್ನು ತನ್ನ ಮನೆಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಅಲ್ಲದೆ, ಘಟನೆ ಬಗ್ಗೆ ಯಾರಿಗೂ ಹೇಳದಂತೆ ಬೆದರಿಕೆವೊಡ್ಡಿದ್ದ ಎಂದು ವರದಿಯಾಗಿದೆ.
ಇತ್ತೀಚೆಗೆ, ಬಾಲಕಿಯ ಮೊಬೈಲ್‌ಅನ್ನು ಆಕೆಯ ಅಜ್ಜಿ ಪರಿಶೀಲಿಸಿದ್ದು, ಬಾಲಕಿ ತನ್ನ ನಗ್ನ ಚಿತ್ರಗಳನ್ನು ಆರೋಪಿ ಸುರೇಶ್ ಕಳಿಸಿರುವುದು ಕಂಡುಬಂದಿದೆ. ಬಳಿಕ, ಬಾಲಕಿಯನ್ನು ವಿಚಾರಸಲಾಗಿದ್ದು, ಆಕೆ ತನ್ನ ಕೋಚ್ ಎಸಗಿರುವ ಅತ್ಯಾಚಾರ, ಲೈಂಗಿಕ ದೌರ್ಜನ್ಯಗಳ ಬಗ್ಗೆ ಹೇಳಿಕೊಂಡಿದ್ದಾಳೆ.
ಈ ವರದಿ ಓದಿದ್ದೀರಾ?: ಮೈಸೂರು | ಮಾಡದ ಅಪರಾಧಕ್ಕೆ 2 ವರ್ಷ ಜೈಲು: ಆದಿವಾಸಿಗಳ ಬದುಕಿನಲ್ಲಿ ಪೊಲೀಸರ ‘ಚೆಲ್ಲಾಟ’
ಬಾಲಕಿಯ ಪೋಷಕರು ಬ್ಯಾಡ್ಮಿಂಟನ್ ಕೋಚ್, ಕಾಮುಕ ಆರೋಪಿ ಸುರೇಶ್ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಆತನ ಮೊಬೈಲ್‌ಅನ್ನು ಪರಿಶೀಲಿಸಿದ್ದಾರೆ. ಈ ವೇಳೆ, ಸಂತ್ರಸ್ತ ಬಾಲಕಿಯ ನಗ್ನ ಚಿತ್ರಗಳನ್ನು ಮಾತ್ರವಲ್ಲದೆ, ಇತರ 8 ಬಾಲಕಿಯರ ನಗ್ನ ಚಿತ್ರಗಳು-ವಿಡಿಯೋಗಳು ಆತನ ಫೋನ್‌ನಲ್ಲಿ ಪತ್ತೆಯಾಗಿವೆ ಎಂದು ವರದಿಯಾಗಿದೆ.
ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದ ಪೊಲೀಸರು, 8 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆದುಕೊಂಡಿದ್ದಾರೆ. ಆರೋಪಿಯಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದ ಬಾಲಕಿಯರ ಹೇಳಿಕೆ ಪಡೆಯಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ. ಸದ್ಯ, ದೂರುದಾರ ಬಾಲಕಿಯಿಂದ ಹೇಳಿಕೆ ದಾಖಲಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ.
ಗಮನಿಸಿ: ಅತ್ಯಾಚಾರವು ಒಂದು ಗಂಭೀರ ಸಾಮಾಜಿಕ ದುಷ್ಕೃತ್ಯ. ಈ ಕ್ರೂರ ಕೃತ್ಯವು ಸಮಾಜದ ನೈತಿಕತೆ ಮತ್ತು ಮಾನವೀಯತೆಯನ್ನು ಕುಂದಿಸುತ್ತದೆ. ಅತ್ಯಾಚಾರವನ್ನು ತಡೆಯುವುದು ಮತ್ತು ಅತ್ಯಾಚಾರ ಮುಕ್ತ ಸಮಾಜವನ್ನು ನಿರ್ಮಿಸುವುದು ನಮ್ಮೆಲ್ಲರ ಜವಾಬ್ದಾರಿ. ಮಹಿಳೆಯರು ಭಯಮುಕ್ತವಾಗಿ ಬದುಕಲು ಹೆಣ್ಣುಮಕ್ಕಳ ಸುರಕ್ಷತೆ, ಗೌರವ ಮತ್ತು ನ್ಯಾಯವನ್ನು ಕಾಪಾಡಲು ನಾವು ಒಗ್ಗೂಡಿ ಹೋರಾಡಬೇಕು.ಅತ್ಯಾಚಾರದ ವಿರುದ್ಧ ಕಠಿಣ ಕಾನೂನು ಜಾರಿಯಾಗಬೇಕು ಮತ್ತು ಸಮಾಜದಲ್ಲಿ ಜಾಗೃತಿ ಮೂಡಿಸಬೇಕು. ನಮ್ಮ ಕುಟುಂಬಗಳಲ್ಲಿ, ಶಾಲೆಗಳಲ್ಲಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಹೆಣ್ಣುಮಕ್ಕಳ ಜೊತೆ ಗೌರವ ಮತ್ತು ಸಂವೇದನೆಯಿಂದ ನಡೆದುಕೊಳ್ಳಬೇಕು. ಮಹಿಳೆಯರ ರಕ್ಷಣೆಯ ಹೊಣೆ ನಮ್ಮೆಲ್ಲರದ್ದಾಗಿದೆ.