ಬಿಟ್ ಕಾಯಿನ್ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ತಂಡ ಇಬ್ಬರು ಪೊಲೀಸ್ ಅಧಿಕಾರಿಗಳನ್ನು ವಶಕ್ಕೆ ಪಡೆದಿದೆ ಎಂದು ತಿಳಿದುಬಂದಿದೆ. ಪೊಲೀಸ್ ಇನ್ಸ್ಪೆಕ್ಟರ್ ಪ್ರಶಾಂತ್ ಬಾಬು ಮತ್ತು ಸೈಬರ್ ಎಕ್ಸ್ಪರ್ಟ್ ಸಂತೋಷ್ – ವಶಕ್ಕೆ ಪಡೆಯಲಾಗಿರುವ ಅಧಿಕಾರಿಗಳು ಎಂದು ವರದಿಯಾಗಿದೆ.
ಬಿಟ್ ಕಾಯಿನ್ ಪ್ರಕರಣದಲ್ಲಿ ಸಾವಿರಾರು ಕೋಟಿ ರೂ. ಹಗರಣ ನಡೆದಿದೆ ಎಂದು ಹೇಳಲಾಗಿತ್ತು. ಪ್ರಕರಣದ ತನಿಖೆ ನಡೆಸಲು ಆರು ತಿಂಗಳ ಹಿಂದೆ ಎಸ್‌ಐಟಿ ರಚಿಸಲಾಗಿತ್ತು. ತನಿಖೆ ನಡೆಸಿರುವ ಎಸ್‌ಐಟಿ ತಂಡ ಹಲವರನ್ನು ವಿಚಾರಣೆಗೆ ಒಳಪಡಿಸಿದೆ. ಇದೀಗ, ಪೊಲೀಸ್ ಅಧಿಕಾರಿಗಳು ಸೇರಿದಂತೆ ಐವರನ್ನು ವಶಕ್ಕೆ ಪಡೆದಿದೆ. ವಶಕ್ಕೆ ಪಡೆದಿರುವ ಆರೋಪಿಗಳನ್ನು ಗುರುವಾರ ನ್ಯಾಯಾಲಯ ಹಾಜರು ಪಡಿಸಲಿದೆ ಎಂದು ತಿಳಿದುಬಂದಿದೆ.
ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗಲೇ ಪ್ರಕರಣ ಬೆಳಕಿಗೆ ಬಂದಿತ್ತು. ಪ್ರಕರಣದಲ್ಲಿ ಕೆಲ ಬಿಜೆಪಿ ನಾಯಕರು ಭಾಗಿಯಾಗಿದ್ದಾರೆ ಎಂದೂ ಆರೋಪಿಸಲಾಗಿತ್ತು. ಬಿಜೆಪಿ ಸರ್ಕಾರವಿದ್ದಾಗ ಪ್ರಕರಣದ ತನಿಖೆ ನಡೆಸಿದ್ದ ಸಿಸಿಬಿ, ಶ್ರೀಕಿ ಎಂಬಾತನನ್ನು ಬಂಧಿಸಿತ್ತು. ಆದರೂ, ಸಿಸಿಬಿ ತನಿಖೆಯಲ್ಲಿ ಲೋಪಗಳಿವೆ ಎಂಬ ಕಾರಣ ಎಸ್‌ಐಟಿ ರಚನೆ ಮಾಡಲಾಗಿತ್ತು. ಆದರೆ, ಈಗ ಶ್ರೀಕಿ ತನಿಖೆಗೆ ಸರಿಯಾಗಿ ಸಹಕರಿಸುತ್ತಿಲ್ಲ. ಸತಾಯಿಸುತ್ತಿದ್ದಾನೆ ಎಂದು ಹೇಳಲಾಗಿದೆ.