- ದಕ್ಷಿಣ ಒಳನಾಡಿನ 11 ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆ
- ಬೆಂಗಳೂರಿನಲ್ಲಿ ಮಧ್ಯಾಹ್ನದ ಬಳಿಕ ಮೋಡಕವಿದ ವಾತಾವರಣವಿರಲಿದೆ
ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಮುಂದಿನ ಎರಡು ದಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯಾದ್ಯಂತ ಬಿರುಗಾಳಿ ಸಹಿತ, ಗುಡುಗಿನಿಂದ ಕೂಡಿದ ಮಳೆಯಾಗಲಿದೆ. ಗಾಳಿಯ ವೇಗವು ಗಂಟೆಗೆ 40-50 ಕಿ.ಮೀ ಇರುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ 11 ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದ್ದು, ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದೆ.
ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಕೋಲಾರ, ಮಂಡ್ಯ, ರಾಮನಗರ, ತುಮಕೂರಿನಲ್ಲಿ ಭಾರೀ ಮಳೆಯಾಗಲಿದೆ. ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಯ ಕೆಲವೆಡೆ ಸಾಧಾರಣ ಮಳೆಯಾಗಲಿದೆ.
ಕಲಬುರಗಿಯಲ್ಲಿ 41.1 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರು ನಗರದಲ್ಲಿ ಮಧ್ಯಾಹ್ನದ ಬಳಿಕ ಮೋಡಕವಿದ ವಾತಾವರಣವಿರಲಿದ್ದು, ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ.
ಈ ಸುದ್ದಿ ಓದಿದ್ದೀರಾ? ಬೆಂಗಳೂರು | ವಾತಾವರಣದ ವ್ಯತ್ಯಾಸದಿಂದ ಮಕ್ಕಳಲ್ಲಿ ಆರೋಗ್ಯ ಸಮಸ್ಯೆ ಹೆಚ್ಚಳ
ಎಚ್ಎಎಲ್ನಲ್ಲಿ 34.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 33.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 33.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನಲೆ, ರಾಜ್ಯದಲ್ಲಿ ಮೋಚಾ ಚಂಡಮಾರುತ ಬೀಸುತ್ತಿದ್ದು, ರಾಜ್ಯಾದ್ಯಂತ ಮಳೆಯಾಗುತ್ತಿದೆ ಎಂದು ತಿಳಿಸಿದೆ.