ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ನ.27 ರಿಂದ ನ.29ರವರೆಗೆ ಸಾಧಾರಣ ಮಳೆಯಾಗಲಿದೆ. ಜತೆಗೆ ಕೆಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟ ಹಿನ್ನೆಲೆ, ಬಹುತೇಕ ಜಲಾಶಯಗಳ ನೀರಿನ ಮಟ್ಟ ಕಡಿಮೆಯಿತ್ತು. ನವೆಂಬರ್‌ನಿಂದ ಹಿಂಗಾರು ಮಳೆ ಚುರುಕುಗೊಂಡಿದೆ. ಭಾನುವಾರ ಕೆಲವು ಕಡೆ ಮಳೆಯಾಗಿರುವುದನ್ನು ಹೊರತುಪಡಿಸಿ, ಇನ್ನುಳಿದ ಕಡೆ ಮಳೆಯ ಅಬ್ಬರ ಅಷ್ಟಾಗಿ ಇರಲಿಲ್ಲ. ಇದೀಗ ಕರ್ನಾಟಕದ ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಬುಧವಾರದವರೆಗೂ ಸಾಧಾರಣ ಮಳೆಯಾಗಬಹುದು. ರಾಜ್ಯದಾದ್ಯಂತ ಅಲ್ಲಲ್ಲಿ ಚದುರಿದಂತೆ ಹಗುರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸೋಮವಾರ ಹಾಗೂ ಮಂಗಳವಾರ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರಿನಲ್ಲಿ ಈ ಎರಡು ದಿನವೂ ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶವು 20 ಡಿಗ್ರಿ ಸೆಲ್ಸಿಯಸ್ ಇರಬಹುದು.
ಭಾನುವಾರ ಎಚ್ಎಎಲ್ನಲ್ಲಿ 25.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 26.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 25.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಎಲ್ಲೆಲ್ಲಿ ಮಳೆ?
ಬೆಂಗಳೂರು ನಗರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ರಾಮನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೋಲಾರ, ಮಂಡ್ಯ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ಈ ಸುದ್ದಿ ಓದಿದ್ದೀರಾ? ಬೆಂಗಳೂರು | ನ.27 ಮತ್ತು ನ.28 ರಂದು ಈ ಮಾರ್ಗದಲ್ಲಿ ಸಂಚಾರ ಬಂದ್; ಎಲ್ಲೆಲ್ಲಿ? ಇಲ್ಲಿದೆ ನೋಡಿ
ಭಾನುವಾರ ಶಿವಮೊಗ್ಗ ಜಿಲ್ಲೆಯ ತಾಳಗುಪ್ಪದಲ್ಲಿ 4 ಸೆ.ಮೀ ನಷ್ಟು ಮಳೆಯಾಗಿದೆ. ತುಮಕೂರು ಜಿಲ್ಲೆಯ ಗುಬ್ಬಿ, ಹಾಸನ ಜಿಲ್ಲೆಯ ಕೊಣನೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ.
ವಿಜಯಪುರದಲ್ಲಿ 17.1 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ತಾಪಮಾನ ದಾಖಲಾಗಿದೆ. ಉತ್ತರ ಕರ್ನಾಟಕದ ಬಹುತೇಕ ಕಡೆಗಳಲ್ಲಿ ಒಣ ಹವೆಯ ವಾತಾವರಣ ಕಂಡು ಬಂದಿತು.
ನೆರೆಯ ಕೇರಳ, ತಮಿಳುನಾಡು, ಮಹಾರಾಷ್ಟ್ರದಲ್ಲಿ ಮಳೆಯಾಗುತ್ತಿದ್ದರೂ, ಕರ್ನಾಟಕದಲ್ಲಿ ಮಳೆ ಪ್ರಮಾಣ ಬಹುತೇಕ ತಗ್ಗಿದೆ. ತಮಿಳುನಾಡಿನ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ.