ಬೆಂಗಳೂರಿನಲ್ಲಿ ನಡೆಯುತ್ತಿರುವ ರೈತ ಹೋರಾಟದಲ್ಲಿ ಭಾಗಿಯಾಗಲು ಬಂದಿದ್ದ ರೈತರೊಬ್ಬರು ಹಠಾತ್ತನೆ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಅವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ದೇವನಹಳ್ಳಿ ತಾಲೂಕಿನ 1770 ಎಕರೆ ಕೃಷಿ ಭೂಮಿಯನ್ನು ಕೈಗಾರಿಕೆಗಾಗಿ ಭೂಸ್ವಾಧೀನ ಮಾಡಿಕೊಳ್ಳುತ್ತಿರುವ ಸರ್ಕಾರದ ವಿರುದ್ಧ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಇಂದು (ಶುಕ್ರವಾರ) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರೈತ ಮುಖಂಡರೊಂದಿಗೆ ಸಭೆ ನಡೆಸುತ್ತಿದ್ದಾರೆ. ಹೀಗಾಗಿ, ಹೋರಾಟದ ಮುಂದಿನ ಹಾದಿ ಇಂದು ನಿರ್ಧಾರವಾಗಲಿದೆ. ಈ ಹಿನ್ನೆಲೆಯಲ್ಲಿ, ಬೆಂಗಳೂರಿನ ಪ್ರೀಡಂ ಪಾರ್ಕ್ನಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಭಾಗಿಯಾಗಲು ಚಾಮರಾಜನಗರ ಜಿಲ್ಲೆಯಿಂದ ಬಂದಿದ್ದ ರೈತರೊಬ್ಬರು ಬೆಂಗಳೂರು ರೈಲು ನಿಲ್ದಾಣದ ಬಳಿ ಹಠಾತ್ತನೆ ಕುಸಿದು ಬಿದ್ದು, ಸಾವನ್ನಪ್ಪಿದ್ದಾರೆ.
ಮೃತರನ್ನು ಚಾಮರಾಜನಗರದ ಗುಂಡ್ಲುಪೇಟೆ ತಾಲೂಕಿನ ಕುರುಬರಹುಂಡಿ ಗ್ರಾಮದ ಈಶ್ವರ್ (55) ಎಂದು ಗುರುತಿಸಲಾಗಿದೆ. ಅವರು ರಕ್ತದೊತ್ತಡ ಮತ್ತು ಮಧುಮೇಹದಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ.
ಪೊಲೀಸರ ಪ್ರಕಾರ, ಈಶ್ವರ್ ಅವರು ತಮ್ಮ ಗ್ರಾಮಸ್ಥರೊಂದಿಗೆ ಪ್ರತಿಭಟನೆಯಲ್ಲಿ ಭಾಗವಹಿಸಲು ಮೈಸೂರಿನಿಂದ ರೈಲಿನಿಂದ ಬಂದಿದ್ದಾರೆ. ರೈಲ್ವೇ ನಿಲ್ದಾಣದಿಂದ ಫ್ರೀಡಂ ಪಾರ್ಕ್ ಕಡೆಗೆ ನಡೆದುಕೊಂಡು ಹೋಗುತ್ತಿದ್ದಾಗ ಸಂಗೊಳ್ಳಿ ರಾಯಣ್ಣ ವೃತ್ತದ ಬಳಿ ಕುಸಿದು ಬಿದ್ದಿದ್ದಾರೆ ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ, ಅವರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಈಶ್ವರ್ ಅವರ ಸಾವಿಗೆ ರೈತ ಹೋರಾಟಗಾರರು ಕಂಬನಿ ಮಿಡಿದಿದ್ದಾರೆ. ಹೋರಾಟದ ಸ್ಥಳದಲ್ಲಿ ಈಶ್ವರ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.