ಕೃಷಿ ಹಾಗೂ ಕೃಷಿಕರ ಅಭ್ಯುದಯವೇ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಮೂಲ ಆಶಯವಾಗಿದ್ದು, ಅದಕ್ಕೆ ಪೂರಕವಾಗಿ ಪರಸ್ಪರ ಸಮನ್ವಯತೆಯಿಂದ ಕಾರ್ಯನಿರ್ವಹಿಸುವಂತೆ ಸಚಿವರಾದ ಎನ್. ಚಲುವರಾಯಸ್ವಾಮಿ ಸೂಚನೆ ನೀಡಿದ್ದಾರೆ.
ವಿಧಾನಸೌಧದ ಸಮಿತಿ ಕೊಠಡಿಯಲ್ಲಿಂದು ರಾಜ್ಯದ ವಿವಿಧ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಉಪ ಕುಲಪತಿಗಳು ಹಾಗೂ ಕೃಷಿ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು ಎಲ್ಲರೂ ಸ್ವಹಿತಾಸಕ್ತಿ ಬದಿಗೊತ್ತಿ ಸಾರ್ವಜನಿಕ ಪ್ರಾಮುಖ್ಯತೆಗೆ ಆದ್ಯತೆ ನೀಡಬೇಕೆಂದರು.
ರಾಜ್ಯದಲ್ಲಿ ವಿದ್ಯಾರ್ಥಿಗಳು, ರೈತರು ಹಾಗೂ ಕೃಷಿ ವಿಶ್ವವಿದ್ಯಾನಿಲಯಗಳ ಹಿತದೃಷ್ಟಿಯಿಂದ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಪುನರ್ ವಿಂಗಡಣೆ ಬಗ್ಗೆ ಚಿಂತನೆ ನಡೆಸಲಾಗಿದ್ದು, ಸಮಿತಿ ರಚಿಸಲಾಗಿದೆ. ವರದಿ ಆಧರಿಸಿ ಸಚಿವ ಸಂಪುಟದ ಸಭೆಯಲ್ಲಿ ಚರ್ಚಿಸಿ ಸರ್ಕಾರ ನಿರ್ಧಾರ ಕೈಗೊಳ್ಳಲಿದೆ ಎಂದರು.
ಇದನ್ನು ಓದಿದ್ದೀರಾ? ಕಬ್ಬಿನ ಹಣ ಪಾವತಿಸದ ಸಕ್ಕರೆ ಕಾರ್ಖಾನೆಗಳಿಗೆ ಎಚ್ಚರಿಕೆ ನೀಡಿದ ಕೃಷಿ ಸಚಿವ ಚಲುವರಾಯಸ್ವಾಮಿ
ಸರ್ಕಾರಕ್ಕೆ ಎಲ್ಲಾ ಜಿಲ್ಲೆಗಳು ಹಾಗೂ ಎಲ್ಲಾ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳು ಒಂದೇ ಮಹತ್ವ ಹೊಂದಿವೆ. ಹಾಗಾಗಿ ಎಲ್ಲಾ ಜಿಲ್ಲೆಗಳು ಮತ್ತು ವಿಶ್ವವಿದ್ಯಾಲಯಗಳ ಹಿತಾಸಕ್ತಿಯನ್ನು ಗಮನಹರಿಸಿ ಸರ್ಕಾರ ನಿರ್ಧಾರ ಕೈಗೊಳ್ಳಲಿದೆ ಎಂದು ಸಚಿವರು ಹೇಳಿದರು.
ಕೃಷಿ ವಿಶ್ವವಿದ್ಯಾಲಯಗಳು ಸಂಶೋಧನೆ ಮತ್ತು ಪ್ರಾತ್ಯಕ್ಷಿಕೆಗಳಿಗೆ ಇನ್ನಷ್ಟು ಹೆಚ್ಚು ಆದ್ಯತೆ ನೀಡಬೇಕು. ರೈತರನ್ನು ತಾಂತ್ರಿಕವಾಗಿ ಸಶಕ್ತರನ್ನಾಗಿ ಮಾಡಿ ಕೃಷಿ ಕ್ಷೇತ್ರವನ್ನು ಸದೃಡಗೊಳಿಸಬೇಕು. ನಿಶ್ಚಿತ, ಲಾಭದಾಯಕ ಉದ್ಯಮವನ್ನಾಗಿ ಪರಿವರ್ತಿಸಬೇಕೆಂದು ಚಲುವರಾಯಸ್ವಾಮಿ ನಿರ್ದೇಶನ ನೀಡಿದರು.
ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳು ಎದುರಿಸುತ್ತಿರುವ ತಾಂತ್ರಿಕ, ಆಡಳಿತಾತ್ಮಕ ಮತ್ತು ಆರ್ಥಿಕ ಸಮಸ್ಯೆ ಹಾಗೂ ಸವಾಲುಗಳನ್ನು ಕುರಿತು ಆದ್ಯತೆ ಮೇರೆಗೆ ಪಟ್ಟಿ ಮಾಡಿ ಪ್ರಸ್ತಾವನೆ ಸಿದ್ದಪಡಿಸುವಂತೆ ಸೂಚಿಸಿದ ಸಚಿವರು ಈ ಬಗ್ಗೆ ಮಾರ್ಚ್ ನಂತರ ಮುಖ್ಯಮಂತ್ರಿ ಹಾಗೂ ಸಂಬಂಧಪಟ್ಟವರೊಂದಿಗೆ ಚರ್ಚೆ ನಡೆಸುವುದಾಗಿ ತಿಳಿಸಿದರು.
ಇದನ್ನು ಓದಿದ್ದೀರಾ? ರಾಜ್ಯದ ಕೃಷಿ ಬಲವರ್ಧನೆಗೆ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಸಮ್ಮತಿ: ಎನ್ ಚಲುವರಾಯಸ್ವಾಮಿ
ಮಂಡ್ಯ ವಿ.ಸಿ ಫಾರಂನಲ್ಲಿ ಹೊಸದಾಗಿ ಪ್ರಾರಂಭಿಸಲು ಉದ್ದೇಶಿಸಿರುವ ಸಮಗ್ರ ವಿಶ್ವವಿದ್ಯಾಲಯಗಳ ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಕಾರ್ಯಾರಂಭ ಮಾಡಲಿದೆ. ಅದಕ್ಕಾಗಿಯೇ ಈಗಾಗಲೇ ಎಲ್ಲಾ ರೀತಿಯ ತಯಾರಿ ನಡೆಯುತ್ತಿದೆ. ಇದೇ ರೀತಿ ಎಲ್ಲಾ ಕೃಷಿ ವಿಶ್ವವಿದ್ಯಾಲಯಗಳನ್ನು ಬಲಪಡಿಸುವುದು ಸರ್ಕಾರದ ಉದ್ದೇಶವಾಗಿದ್ದು, ಅದಕ್ಕಾಗಿಯೇ ತಜ್ಞರ ಸಮಿತಿ ರಚಿಸಲಾಗುತ್ತಿದೆ ಎಂದರು.
ಕೃಷಿ ಇಲಾಖೆ ಕಾರ್ಯದರ್ಶಿ ಡಾ. ರವಿಶಂಕರ್ ವಿವಿಧ ಕೃಷಿ ವಿಶ್ವವಿದ್ಯಾಲಯಗಳ ಉಪ ಕುಲಪತಿಗಳಾದ ಡಾ.ಸುರೇಶ್, ಡಾ ಹನುಮಂತಪ್ಪ, ಡಾ ವಿಷ್ಣುವರ್ಧನ್, ಡಾ ಪಿ. ಎಲ್. ಪಾಟೀಲ್, ಡಾ. ಆರ್. ಸಿ. ಜಗದೀಶ, ಮಂಡ್ಯ ಕೃಷಿ ವಿವಿ ವಿಶೇಷಾಧಿಕಾರಿ ಡಾ ಹರಿಣಿ ಕುಮಾರ್ ಮತ್ತಿತರರು ಸಭೆಯಲ್ಲಿ ಹಾಜರಿದ್ದು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.
