ಭ್ರೂಣ ಲಿಂಗ ಪತ್ತೆ ಮತ್ತು ಹತ್ಯೆ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿಯನ್ನು ಬೆಂಗಳೂರಿನ ಬೈಯಪ್ಪನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಚಂದನ್ ಬಲ್ಲಾಳ್ ಆಸ್ಪತ್ರೆಯಲ್ಲಿ ದಾದಿಯಾಗಿ ಕೆಲಸ ಮಾಡುತ್ತಿದ್ದ ಮಂಜುಳಾ ಎಂಬಾಕೆಯನ್ನು ಬಂಧಿಸಲಾಗಿದೆ.
ಬೆಂಗಳೂರು, ಮಂಡ್ಯ ಹಾಗೂ ಮೈಸೂರು ಜಿಲ್ಲೆಗಳಲ್ಲಿ ಭ್ರೂಣಲಿಂಗ ಪತ್ತೆ ಮಾಡಿ, ಹತ್ಯೆಗೈಯುತ್ತಿದ್ದ ಜಾಲವನ್ನು ಪೊಲೀಸರು ಭೇದಿಸಿದ್ದಾರೆ. ಕಳೆದ ಒಂದೂವರೆ ವರ್ಷದಲ್ಲಿ 900 ಹೆಚ್ಚು ಹೆಣ್ಣು ಭ್ರೂಣ ಹತ್ಯೆ ನಡೆದಿದೆ ಎಂದು ಮಾಹಿತಿ ದೊರೆತಿದೆ. ಪ್ರಕರಣದಲ್ಲಿ ಇದೂವರೆಗೂ 10 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ.
ಪೊಲೀಸರು ಪ್ರಕರಣದ ಬೆನ್ನತ್ತುತ್ತಿದ್ದಂತೆಯೇ ಮಂಜುಳ ಅವರು ಬಲ್ಲಾಳ್ ಆಸ್ಪತ್ರೆಯಲ್ಲಿ ಕೆಲಸ ಬಿಟ್ಟು, ಬೇರೆ ಆಸ್ಪತ್ರೆಗೆ ಸೇರಿದ್ದರು. ಆಕೆಗಾಗಿ ಪೊಲೀಸರು ಹುಡುಕಾಟ ನಡೆಸಿದ್ದರು. ಇದೀಗ, ಆಕೆಯನ್ನು ಬಂಧಿಸಿದ್ದಾರೆ.
ಈ ನಡುವೆ, ಪ್ರಕರಣ ಗಂಭೀರತೆ ಅರಿತಿರುವ ಸರ್ಕಾರ ಪ್ರಕರಣವನ್ನು ಸಿಐಡಿಗೆ ವಹಿಸಲು ಆದೇಶಿಸಿದೆ. ಅದಕ್ಕಾಗಿ ಪೊಲೀಸರು ತಯಾರಿ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.