ನಿರ್ಮಾಣ ಹಂತದಲ್ಲಿರುವ ಕಟ್ಟಡದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಇಬ್ಬರು ಕಾರ್ಮಿಕರು ಸಜೀವ ದಹನವಾಗಿರುವ ಹೃದಯ ವಿದ್ರಾವಕ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ನಗರದ ಸೀಗೆಹಳ್ಳಿ ಗೇಟ್ ಬಳಿ ಇರುವ ಗುತ್ತಿಗೆದಾರ ಮತ್ತು ಇಂಜಿನಿಯರ್ ಸತೀಶ್ಗೆ ಸೇರಿದ ಶಿವಾನಿ ಗ್ರೀನ್ ಲೇಔಟ್‌ನಲ್ಲಿ ಬೆಂಕಿ ದುರಂತ ನಡೆದಿದೆ. ಮೃತ ಕಾರ್ಮಿಕರನ್ನು ಉತ್ತರ ಪ್ರದೇಶ ಮೂಲದ ಉದಯ್ ಭಾನು(40) ಮತ್ತು ಬಿಹಾರ ಮೂಲದ ರೋಷನ್(23) ಎಂದು ಗುರುತಿಸಲಾಗಿದೆ.
ನಿರ್ಮಾಣ ಹಂತದಲ್ಲಿದ್ದ ಕಟ್ಟಡಕ್ಕೆ ತಾತ್ಕಾಲಿಕ ವಿದ್ಯುತ್ ಸಂಪರ್ಕ ಪಡೆದು ಮರದ ಕೆಲಸಗಳನ್ನು ಮಾಡಲಾಗುತ್ತಿತ್ತು. ಮರ ಪಾಲೀಷ್ ಮಾಡಲು ಬಳಸುತ್ತಿದ್ದ ಥಿನ್ನರ್ ಮತ್ತು ಕೆಲವು ಕೆಮಿಕಲ್‌ಗಳನ್ನು ಕಟ್ಟಡದಲ್ಲಿ ಇರಿಸಲಾಗಿತ್ತು. ಅವುಗಳಿಗೆ ವಿದ್ಯುತ್ ಸ್ಪರ್ಶಿಸಿ, ಬೆಂಕಿ ಹೊತ್ತಿಕೊಂಡಿದೆ ಎಂದು ಶಂಕಿಸಲಾಗಿದೆ.
ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದು, ಓರ್ವ ಕಾರ್ಮಿಕನನ್ನು ರಕ್ಷಿಸಲಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ.
ಮಾದನಾಯಕನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ.