ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಶನಿವಾರ ಸಂಜೆಯಿಂದ ಭಾರೀ ಮಳೆಯಾಗುತ್ತಿದೆ. ರಸ್ತೆಗಳಲ್ಲಿ ನೀರು ಹರಿಯುತ್ತಿದ್ದು, ವಾಹನ ಸಂಚಾರ ಅಸ್ತವ್ಯಸ್ತವಾಗಿದೆ. ಇನ್ನೂ ನಾಲ್ಕು ದಿನ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.
ಬೆಂಗಳೂರಿನ ರಾಜಾಜಿನಗರ, ಯಶವಂತಪುರ, ವಿಜಯನಗರ, ಮಲ್ಲೇಶ್ವರ, ಮೆಜೆಸ್ಟಿಕ್, ಹೆಬ್ಬಾಳ ಸೇರಿದಂತೆ ನಾನಾ ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದೆ. ಉದ್ಯೋಗಿಗಳು, ಕಾರ್ಮಿಕರು, ಕಾಲೇಜು ವಿದ್ಯಾರ್ಥಿಗಳು ಸಂಜೆ ವೇಳೆ ತಮ್ಮ ಮನೆಗೆ ಹಿಂದಿರುವುದರಿಂದ, ಹೆಚ್ಚು ವಾಹನಗಳು ರಸ್ತೆಗಳಿದಿದ್ದು, ಮಳೆಯ ನಡುವೆಯೂ ವಾಹನ ದಟ್ಟಣೆ ಉಂಟಾಗಿದೆ.ರಸ್ತೆಯಲ್ಲಿ ನೀರು ಹರಿಯುತ್ತಿದ್ದು, ದ್ವಿಚಕ್ರ ವಾಹನ ಸವಾರರು ಪರದಾಡುವ ಪರಿಸ್ಥಿತಿ ಎದುರಾಗಿದೆ.
ಶನಿವಾರವೂ ಸೇರಿದಂತೆ ನಾಲ್ಕು ದಿನಗಳ ಕಾಲ ರಾಜ್ಯದ ಹಲವೆಡೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು, ಬೆಂ.ಗ್ರಾಮಾಂತರ, ಕೋಲಾರ, ಮಂಡ್ಯ, ರಾಮನಗರ, ಕೊಡಗು, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ವಿಜಯನಗರ, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ.