‘ನಮ್ಮ ಮೆಟ್ರೋ’ ಪ್ರಯಾಣ ದರ ಏರಿಕೆಯ ಹೊರೆಗೆ ಮೆಟ್ರೋ ಪ್ರಯಾಣಿಕರು ಹೈರಾಣಾಗಿದ್ದು, ಕೊನೆಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್‌ನ (BMRCL)ವ್ಯವಸ್ಥಾಪಕ ನಿರ್ದೇಶಕ ಎಂ. ಮಹಾಬಲೇಶ್ವರ ರಾವ್ ಜೊತೆ ಮಾತನಾಡಿದ್ದಾರೆ.
ಈ ಕುರಿತು ಎಕ್ಸ್ ತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಸಿದ್ದರಾಮಯ್ಯ, “ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ ಬೆಂಗಳೂರು ಮೆಟ್ರೋ ಪ್ರಯಾಣ ದರ ಪರಿಷ್ಕರಣೆ ಜಾರಿಯಲ್ಲಿ ಕೆಲವು ಸ್ಟೇಜ್‌ಗಳಲ್ಲಿ ದರಗಳು ದ್ವಿಗುಣಗೊಂಡಿವೆ. ಇದು ವೈಪರೀತ್ಯಗಳಿಗೆ ಕಾರಣವಾಗಿದೆ. ಇದರ ವಿರುದ್ಧ ವ್ಯಕ್ತವಾದ ಸಾರ್ವಜನಿಕರ ವಿರೋಧವನ್ನು ಪರಿಗಣಿಸಿ ಎಲ್ಲೆಲ್ಲಿ ಅಸಹಜ ರೀತಿಯಲ್ಲಿ ದರ ಏರಿಕೆಯಾಗಿದೆಯೋ ಅಂತಹ ಕಡೆಗಳಲ್ಲಿ ಪ್ರಯಾಣ ದರ ಇಳಿಸುವಂತೆ ಬಿಎಂಆರ್‌ಸಿಎಲ್ ವ್ಯವಸ್ಥಾಪಕ ನಿರ್ದೇಶಕರಿಗೆ ತಿಳಿಸಿ, ಪ್ರಯಾಣಿಕರ ಹಿತ ಕಾಪಾಡಬೇಕು ಎಂದು ಸೂಚಿಸಿದ್ದೇನೆ” ಎಂದು ತಿಳಿಸಿದ್ದಾರೆ.
ಬೆಂಗಳೂರು ಮೆಟ್ರೊ ರೈಲು ನಿಗಮ ಇತ್ತೀಚೆಗೆ ಪರಿಷ್ಕರಿಸಿರುವ ಪ್ರಯಾಣ ದರ ಏರಿಕೆ ಕೆಲವು ಕಡೆಗಳಲ್ಲಿ ದುಪ್ಪಟ್ಟಾಗಿರುವುದನ್ನು ಗಮನಿಸಿದ್ದೇನೆ. ಮೆಟ್ರೋ ರೈಲು ವ್ಯವಸ್ಥೆ ದೊಡ್ಡ ಪ್ರಮಾಣದಲ್ಲಿ ಬಂಡವಾಳ ಹೂಡಿಕೆ ಮಾಡಬೇಕಾಗಿರುವ ಸಾರ್ವಜನಿಕ ಸಾರಿಗೆ ವ್ಯವಸ್ಥೆಯಾಗಿರುವ ಕಾರಣ ಪ್ರಯಾಣ ದರ ಪರಿಷ್ಕರಣೆ ಅನಿವಾರ್ಯವಾಗಿತ್ತು ಎನ್ನುವುದು ನಿಜವಾದರೂ ಅಂತಿಮವಾಗಿ ಪ್ರಯಾಣಿಕರ ಹಿತರಕ್ಷಣೆ ಮಾಡಬೇಕಾಗಿರುವುದು ನಮ್ಮ ಕರ್ತವ್ಯ ಎನ್ನುವುದನ್ನು ಬಿಎಂಆರ್‌ಸಿಎಲ್ ಗಮನಕ್ಕೆ ತಂದಿದ್ದೇನೆ” ಎಂದಿದ್ದಾರೆ.
ಪ್ರಯಾಣ ದರ ಏರಿಕೆ ಹೆಸರಲ್ಲಿ ಬೆಂಗಳೂರು ಮೆಟ್ರೋ (ನಮ್ಮ ಮೆಟ್ರೋ) ಅಕ್ಷರಶಃ ಹಗಲು ದರೋಡೆಗೆ ಇಳಿದಿದೆ. ಶೇ.47ರಷ್ಟು ದರ ಹೆಚ್ಚಳ ಎಂದು ಬಿಎಂಆರ್‌ಸಿಎಲ್ ಹೇಳಿದ್ದರೂ ಹಲವು ಕಡೆಗಳಲ್ಲಿ ಹಿಂದಿನ ದರದ ದುಪ್ಪಟ್ಟು ಶೇ.100ರಷ್ಟು ಅಧಿಕ ಮೊತ್ತ ನೀಡಬೇಕಾಗಿದೆ.
‘ನಮ್ಮ ಮೆಟ್ರೊ‘ ಪ್ರಯಾಣ ದರ ಏರಿಕೆ ಹೆಚ್ಚಳದಿಂದ ದೇಶದಲ್ಲಿಯೇ ಅತಿ ದುಬಾರಿ ಪ್ರಯಾಣ ದರವನ್ನು ಹೊಂದಿರುವ ರಾಜ್ಯ ಬೆಂಗಳೂರಿನ ಮೆಟ್ರೋದ್ದಾಗಿದೆ. ಪ್ರಯಾಣಿಕರಿಂದ ಪ್ರಯಾಣ ದರವನ್ನು ಪಡೆಯುವ ಬದಲು ಬೃಹತ್ ಆದಾಯ ಸಂಗ್ರಹದ ಉದ್ದೇಶದಿಂದ ದರ ಹೆಚ್ಚಳ ಮಾಡಲಾಗಿದೆ ಎಂಬ ಆರೋಪಕ್ಕೆ ನಿಗಮ ಗುರಿಯಾಗಿದೆ.
The way Bangalore Metro Rail Corporation Limited (BMRCL) has implemented the Bengaluru Metro fare revision has led to anomalies, with fares more than doubling in certain sections.
— Siddaramaiah (@siddaramaiah) February 13, 2025
I have asked the MD of BMRCL to urgently address these issues and reduce fares where increases are…
ಮೆಟ್ರೋ ದರ ಏರಿಕೆ ನಮ್ಮ ತೀರ್ಮಾನವಲ್ಲ
ಮೆಟ್ರೋ ಟಿಕೆಟ್ ದರ ಏರಿಕೆಯನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡಿದೆ ಎನ್ನುವ ಬಿಜೆಪಿಯವರ ಆರೋಪದ ಪ್ರತಿಕ್ರಿಯಿಸಿದ್ದ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ ಕೆ ಶಿವಕುಮಾರ್ “ಬಿಜೆಪಿಯವರಿಗೆ ರಾಜಕೀಯ ಹೊರತಾಗಿ ಬೇರೇನೂ ಗೊತ್ತಿಲ್ಲ. ಸುಳ್ಳು ಹೇಳುವುದು ಅವರ ಕಾಯಿಲೆ. ಮೆಟ್ರೋ ಯೋಜನೆ ರಾಜ್ಯ ಮತ್ತು ಕೇಂದ್ರ ಸರ್ಕಾರದ ಶೇ 50:50 ಅನುಪಾತದಲ್ಲಿ ಮಾಡಲಾಗಿರುತ್ತದೆ. ದರ ಏರಿಕೆಗೆ ಒಂದು ಸಮಿತಿ ಮಾಡಲಾಗಿದೆ. ಕೇಂದ್ರ ಸರ್ಕಾರ ಹೈಕೋರ್ಟ್ ನ್ಯಾಯಧೀಶರ ನೇತೃತ್ವದಲ್ಲಿ ಸಮಿತಿ ಮಾಡಿರುತ್ತಾರೆ. ಆ ಸಮಿತಿಯ ತೀರ್ಮಾನ ನಮ್ಮ ಗಮನಕ್ಕೂ ಬರುವುದಿಲ್ಲ, ದರ ಏರಿಕೆ ತೀರ್ಮಾನ ಅವರು ಮಾಡಿದ್ದಾರೆ. ಇದರಲ್ಲಿ ರಾಜ್ಯ ಸರ್ಕಾರದ ಪಾತ್ರವಿಲ್ಲ” ಎಂದು ಹೇಳಿದ್ದರು.
ಪ್ರಸ್ತುತ ಮೆಟ್ರೋ ಪ್ರಯಾಣ ದರ ಪರಿಷ್ಕರಣೆ ಕುರಿತು ದರ ನಿಗದಿ ಸಮಿತಿ ರಚಿಸಲು ಮತ್ತು ಇದರ ಸಂಪೂರ್ಣ ಪ್ರಕ್ರಿಯೆಯನ್ನು ಪ್ರಾರಂಭಿಸಲು ಬಿಎಮ್‌ಆರ್‌ಸಿಎಲ್‌ಗೆ ರಾಜ್ಯ ಸರ್ಕಾರವೇ ಸಲಹೆ ನೀಡಿದೆ ಎಂದು ಸಂಸದ ತೇಜಸ್ವಿ ಸೂರ್ಯ ಆರೋಪಿಸಿದ್ದರು.