ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸೇವೆಗಳನ್ನು ನಿಷೇಧಿಸಿ ಈ ಹಿಂದೆ ನೀಡಿದ್ದ ಏಕ ಸದಸ್ಯ ಪೀಠದ ಆದೇಶಕ್ಕೆ ತಡೆ ನೀಡಲು ಕರ್ನಾಟಕ ಹೈಕೋರ್ಟ್ ವಿಭಾಗೀಯ ಪೀಠ ಶುಕ್ರವಾರ ನಿರಾಕರಿಸಿದೆ. ಇದರಿಂದಾಗಿ ಇದೇ ಜೂನ್ 16 ರಿಂದ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸೇವೆಗಳು ಸಂಪೂರ್ಣ ಸ್ಥಗಿತಗೊಳ್ಳಲಿವೆ.
ಬೈಕ್ ಟ್ಯಾಕ್ಸಿ ಸೇವೆಗೆ ನಿರ್ಬಂಧ ಹೇರಿ ಏಪ್ರಿಲ್ 2 ರಂದು ಏಕ ಸದಸ್ಯ ಪೀಠ ನೀಡಿದ್ದ ಆದೇಶಕ್ಕೆ ತಡೆ ಕೋರಿ ಓಲಾ, ಊಬರ್‌ನಂತಹ ಬೈಕ್ ಟ್ಯಾಕ್ಸಿ ಅಗ್ರಿಗೇಟರ್‌ಗಳು ಸಲ್ಲಿಸಿದ್ದ ಮೇಲ್ಮನವಿಗಳ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ವಿ. ಕಾಮೇಶ್ವರ ರಾವ್ ಮತ್ತು ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್ ಕುಮಾರ್ ಅವರಿದ್ದ ವಿಭಾಗೀಯ ಪೀಠ, ತಡೆ ನೀಡಲು ನಿರಾಕರಿಸಿತು.
ಏಪ್ರಿಲ್ ಆದೇಶದಲ್ಲಿ ಬೈಕ್ ಟ್ಯಾಕ್ಸಿ ಸೇವೆಗಳನ್ನು ಆರು ವಾರಗಳಲ್ಲಿ ಸ್ಥಗಿತಗೊಳಿಸುವಂತೆ ಸೂಚಿಸಲಾಗಿತ್ತು. ಇಲ್ಲದಿದ್ದರೆ ರಾಜ್ಯ ಸರ್ಕಾರವು ಇದಕ್ಕೆ ನಿರ್ದಿಷ್ಟ ನಿಯಮಗಳನ್ನು ರೂಪಿಸಬೇಕು ಎಂದು ಹೇಳಲಾಗಿತ್ತು. ನಂತರ ಈ ಗಡುವನ್ನು ಜೂನ್ 15ರವರೆಗೆ ವಿಸ್ತರಿಸಲಾಗಿತ್ತು.
ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ‘ಪೋಕ್ಸೊ’ ಶಿಕ್ಷೆಯಿಂದ ನುಣುಚಿಕೊಳ್ಳುವ ದಾಳವಾಗದಿರಲಿ ‘ಮದುವೆ’
ಶುಕ್ರವಾರದ ವಿಚಾರಣೆಯಲ್ಲಿ, ಸರ್ಕಾರ ಬೈಕ್ ಟ್ಯಾಕ್ಸಿಗೆ ಅನುಮತಿ ನೀಡಲು ಹೊಸ ನಿಯಮಗಳನ್ನು ರೂಪಿಸುತ್ತಿದ್ದರೆ ಮಾತ್ರ ತಡೆಯಾಜ್ಞೆ ನೀಡಲು ಸಾಧ್ಯ ಎಂದು ನ್ಯಾಯಾಲಯ ಸ್ಪಷ್ಟಪಡಿಸಿತು. ಆದರೆ, ಬೈಕ್ ಟ್ಯಾಕ್ಸಿಗಳಿಗೆ ಅನುಮತಿ ನೀಡದಿರಲು ಸರ್ಕಾರ ತೀರ್ಮಾನಿಸಿದೆ ಎಂದು ಅಡ್ವೊಕೇಟ್ ಜನರಲ್ ಶಶಿ ಕಿರಣ್ ಶೆಟ್ಟಿ ದೃಢಪಡಿಸಿದರು.
ಇದು ಸಾರ್ವಜನಿಕ ಹಿತಾಸಕ್ತಿ ಮತ್ತು ಬೈಕ್ ಟ್ಯಾಕ್ಸಿ ಚಾಲಕರ ಜೀವನೋಪಾಯದ ಮೇಲೆ ಪರಿಣಾಮ ಬೀರುವ ವಿಷಯ ಎಂದು ನ್ಯಾಯಾಲಯ ಒಪ್ಪಿಕೊಂಡಿತು. ಆದರೆ ತಡೆ ನೀಡಲು ನಿರಾಕರಿಸಿತು.
ಬೈಕ್ ಟ್ಯಾಕ್ಸಿಗಳಿಗೆ ಹೊಸ ನಿಯಮಗಳ ಅಗತ್ಯವಿಲ್ಲ, ಬದಲಿಗೆ 1988 ರ ಮೋಟಾರು ವಾಹನ ಕಾಯ್ದೆಯಡಿಯಲ್ಲಿ ಅವು ಕಾರ್ಯನಿರ್ವಹಿಸಬಹುದು ಎಂದು ಅಗ್ರಿಗೇಟರ್‌ಗಳ ಪರ ವಾದ ಮಂಡಿಸಿದ ಹಿರಿಯ ವಕೀಲ ಧ್ಯಾನ್ ಚಿನ್ನಪ್ಪ ಪ್ರತಿಪಾದಿಸಿದರು. ಆದರೆ, ಕಳೆದ ಐದು ವರ್ಷಗಳಿಂದ ನ್ಯಾಯಾಲಯದ ರಕ್ಷಣೆಯಲ್ಲಿ ಬೈಕ್ ಟ್ಯಾಕ್ಸಿಗಳು ಪರವಾನಗಿ ಇಲ್ಲದೆ ಕಾರ್ಯನಿರ್ವಹಿಸುತ್ತಿವೆ ಎಂದು ಸರ್ಕಾರ ವಾದಿಸಿತು.
ಹೀಗಾಗಿ ತಡೆ ನೀಡಲು ನಿರಾಕರಿಸಿದ ಹೈಕೋರ್ಟ್ ಮುಂದಿನ ವಿಚಾರಣೆಯನ್ನು ಜೂನ್ 24 ರಂದು ನಿಗದಿಪಡಿಸಿತು. ಅಲ್ಲಿಯವರೆಗೆ, ಸದ್ಯಕ್ಕೆ ಬೈಕ್ ಟ್ಯಾಕ್ಸಿ ಸೇವೆಗಳ ಭವಿಷ್ಯ ಅನಿಶ್ಚಿತವಾಗಿದೆ.