ಜನವರಿ 23 ರಂದು 545 ಪಿಎಸ್‍ಐ ನೇಮಕಾತಿ ಲಿಖಿತ ಮರು ಪರೀಕ್ಷೆ ನಡೆಯಲಿದೆ. ಈ ಹಿನ್ನೆಲೆ, ಮುಂಜಾಗೃತಾ ಕ್ರಮವಾಗಿ ಪರೀಕ್ಷಾ ಕೇಂದ್ರಗಳ 200 ಮೀಟರ್ ಸುತ್ತ-ಮುತ್ತ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
ಈ ಬಗ್ಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಅವರು ಶನಿವಾರ ಆದೇಶ ಹೊರಡಿಸಿದ್ದಾರೆ. ಪಿಎಸ್‍ಐ ಮರು ಪರೀಕ್ಷೆ ಬೆಂಗಳೂರು ನಗರದಲ್ಲಿ ಮಾತ್ರ ನಡೆಯಲಿದ್ದು, ಒಟ್ಟು 117 ಕೇಂದ್ರಗಳಲ್ಲಿ ಸಿದ್ಧತೆಗಳನ್ನು ನಡೆಸಲಾಗುತ್ತಿದೆ. ಈ ನಿಟ್ಟಿನಲ್ಲಿ ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯಲ್ಲಿ ಬೆಳಗ್ಗೆ 7 ಗಂಟೆಯಿಂದ ಪರೀಕ್ಷೆ ಮುಗಿಯುವವರೆಗೆ ಜೆರಾಕ್ಸ್ ಅಂಗಡಿಗಳನ್ನು ಬಂದ್ ಮಾಡುವಂತೆ ಆದೇಶದಲ್ಲಿ ಸೂಚಿಸಲಾಗಿದೆ.
545 ಪಿಎಸ್‍ಐ ಮರು ಪರೀಕ್ಷೆಗೆ ಪೊಲೀಸ್ ಇಲಾಖೆ ಹಾಗೂ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಎಲ್ಲಾ ತಯಾರಿಗಳನ್ನು ನಡೆಸುತ್ತಿದ್ದು, ಅಭ್ಯರ್ಥಿಗಳು ಕೂಡ ಪರೀಕ್ಷೆ ಬರೆಯಲು ಸಜ್ಜಾಗಿದ್ದರು. ಈ ನಡುವೆ ಮತ್ತೆ ಮರು ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ ಕೇಳಿಬಂದಿತ್ತು.
ಈ ಸುದ್ದಿ ಓದಿದ್ದೀರಾ? ಅಯೋಧ್ಯೆ ರಾಮಮಂದಿರ ಉದ್ಘಾಟನೆಗೆ ರಾಜ್ಯದಲ್ಲಿ ಸರ್ಕಾರಿ ರಜೆ ಇಲ್ಲ: ಸಿಎಂ ಸಿದ್ಧರಾಮಯ್ಯ
ಈ ಆರೋಪಕ್ಕೆ ಸಂಬಂಧಿಸಿದಂತೆ, ಇಂಟೆಲಿಜೆನ್ಸ್ ವಿಭಾಗದ ಸಬ್ ಇನ್ಸ್ಪೆಕ್ಟರ್ ಲಿಂಗಯ್ಯ ಅವರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಲಿಂಗಯ್ಯ ಅವರು ಮಾತನಾಡಿದ್ದಾರೆ ಎನ್ನಲಾದ ಆಡಿಯೋ ವೈರಲ್ ಆಗಿದೆ. ಜತೆಗೆ, ಅವರು ವಾಟ್ಸ್‌ಆಪ್‌ನಲ್ಲಿ ಚಾಟ್ ಮಾಡಿದ ಸಂದೇಶಗಳು ವೈರಲ್ ಆಗಿವೆ. ಈ ಸಂಬಂಧ ಅಭ್ಯರ್ಥಿಗಳು ಪ್ರತಿಭಟನೆಗಿಳಿದಿದ್ದಾರೆ.