ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಮಂಗಳವಾರ ಪ್ರಕಟವಾಗಿದೆ. ರಾಜ್ಯದಲ್ಲಿ ಒಟ್ಟು 73.45% ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಪರೀಕ್ಷೆಯಲ್ಲಿ ಅನುತ್ತೀರ್ಣರಾದವರು ಮತ್ತು ಫಲಿತಾಂಶದಿಂದ ತೃಪ್ತಿ ಇಲ್ಲದವರು ಇನ್ನೂ ಎರಡು ಬಾರಿ ಪರೀಕ್ಷೆ ಬರೆಯಲು ಶಿಕ್ಷಣ ಇಲಾಖೆ ಅವಕಾಶ ಮಾಡಿಕೊಟ್ಟಿದೆ. ಆದಾಗ್ಯೂ, ಪರೀಕ್ಷೆಯಲ್ಲಿ ಫೇಲ್ ಆಗಿ, ಮನನೊಂದ ಐವರು ವಿದ್ಯಾರ್ಥಿಗಳು ರಾಜ್ಯದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಮೈಸೂರು ಜಿಲ್ಲೆಯ ಐಶ್ವರ್ಯ, ದಾವಣಗೆರೆಯ ಕೃಪಾ, ಹಾವೇರಿಯ ಕಾವ್ಯ ಬಸಪ್ಪ ಲಮಾಣಿ, ಬಳ್ಳಾರಿಯ ವಿಜಯಲಕ್ಷ್ಮಿ ಹಾಗೂ ಬೆಂಗಳೂರಿನ 17 ವರ್ಷದ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೈಸೂರು ಜಿಲ್ಲೆಯ ಒಂಟಿಕೊಪ್ಪಲು ಸರ್ಕಾರಿ ಪಿಯು ಕಾಲೇಜಿನಲ್ಲಿ ವ್ಯಾಸಂಗ ಮಾಡಿದ್ದ ವಿದ್ಯಾರ್ಥಿನಿ ಐಶ್ವರ್ಯಾ ಅವರು ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿದ್ದ, ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ದಾವಣಗೆರೆ ಖಾಸಗಿ ಕಾಲೇಜಿನ ವಿದ್ಯಾರ್ಥಿನಿ ಕೃಪಾ ಎಂಬವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ವಿಜ್ಞಾನ ಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದರು. ಆದರೆ, ಪರೀಕ್ಷೆಯಲ್ಲಿ ಫೇಲ್ ಆಗಿದ್ದರಿಂದ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲೂಕಿನ ಅಗಸನೂರು ಎಂಬಲ್ಲಿ ವಿಜಯಲಕ್ಷ್ಮಿ ಸಿರಗುಪ್ಪ ಎಂಬಾಕೆ ಕೂಡ ಫೇಲ್ ಆಗಿದ್ದು, ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಹಾವೇರಿಯ ಹಂಸಬಾವಿ ಪ್ರದೇಶದ ವಿದ್ಯಾರ್ಥಿನಿ ಕಾವ್ಯ ಬಸಪ್ಪ ಲಮಾಣಿ ಕೂಡ ಪರೀಕ್ಷೆಯಲ್ಲಿ ಅನುತ್ತೀರ್ಣದ್ದರು. ಆಕೆಯೂ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಇನ್ನು, ಫಲಿತಾಂಶ ಪ್ರಕಟವಾಗುವುದಕ್ಕೂ ಮುನ್ನವೇ, ಫೇಲ್ ಆಗುವ ಭಯದಲ್ಲಿ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ವಿದ್ಯಾರಣ್ಯಪುರಂನಲ್ಲಿ ಅಪಾರ್ಟ್‌ಮೆಂಟ್ ಮೇಲಿದ್ದ ಬಿದ್ದು 17 ವರ್ಷದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮಂಗಳವಾರ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಉಡುಪಿ ಜಿಲ್ಲೆಯಲ್ಲಿ ಹೆಚ್ಚು ವಿದ್ಯಾರ್ಥಿಗಳು ಉತ್ತೀರ್ಣವಾಗಿದ್ದು, ಪ್ರಥಮ ಸ್ಥಾನದಲ್ಲಿದೆ. ಯಥಾಪ್ರಕಾರ, ಯಾದಗಿರಿ ಜಿಲ್ಲೆಯು ಕಡೆಯ ಸ್ಥಾನದಲ್ಲಿದೆ. ಕಲ್ಯಾಣ ಕರ್ನಾಟಕ ಭಾಗದ ಹೆಚ್ಚಿನ ವಿದ್ಯಾರ್ಥಿಗಳು ಶಿಕ್ಷಣದಲ್ಲಿ ಹಿಂದುಳಿದಿದ್ದಾರೆ. ಅವರ ಶಿಕ್ಷಣ ಗುಣಮಟ್ಟವನ್ನು ಸುಧಾರಿಸಲು ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕಾದ ತುರ್ತು ಅಗತ್ಯವಿದೆ.
ನೆನಪಿಡಿ: ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ… ಆತ್ಮಹತ್ಯೆಗಳ ಕುರಿತು ಚರ್ಚಿಸುವುದು ಕೂಡ ಕೆಲವರಿಗೆ ಪ್ರಚೋದನೆ ನೀಡಬಹುದು. ಸಮಸ್ಯೆಗಳ ಬಗ್ಗೆ ಆಪ್ತರೊಂದಿಗೆ ಹಂಚಿಕೊಳ್ಳುವುದರಿಂದ, ಸಮಾಲೋಚನೆ ನಡೆಸುವುದರಿಂದ ಆತ್ಮಸ್ಥೈರ್ಯ ಹೆಚ್ಚುತ್ತದೆ. ಆತ್ಮಹತ್ಯೆಗಳನ್ನು ತಡೆಯಬಹುದು. ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777, ಬೆಳಗ್ಗೆ 10ರಿಂದ ಸಂಜೆ 8ರವರೆಗೆ, ಆರೋಗ್ಯ ಸಹಾಯವಾಣಿ 104.