ಔರಾದ್ ಪಟ್ಟಣದ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ಹಲವು ತುರ್ತು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಪಟ್ಟಣದ 10 ವಾರ್ಡ್‌ಗಳಲ್ಲಿ ಹೊಸದಾಗಿ ಕೊಳವೆಬಾವಿ ಕೊರೆಸಲು ಹಾಗೂ ಅಗತ್ಯ ಮೋಟರ್‌ಗಳನ್ನು ಖರೀದಿಸಲು ಸಮ್ಮತಿ ನೀಡಲಾಗಿದೆ. ಹೀಗಾಗಿ, ನಾಗರಿಕರು ನಾಳೆ (ನ.17) ಕರೆ ನೀಡಿರುವ ಬಂದ್ ಹಿಂಪಡೆಯಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಮನವಿ ಮಾಡಿದ್ದಾರೆ.
ಕುಡಿಯುವ ನೀರಿನ ಸಮಸ್ಯೆ ಕುರಿತು ಸೋಮವಾರ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, ಔರಾದ್ ಪಟ್ಟಣಕ್ಕೆ ಪ್ರಸ್ತುತ ತೆಂಗಪೂರ ಕೆರೆಯಿಂದ ನೀರು ಪೂರೈಸಲಾಗುತ್ತಿದೆ. ಆದರೆ, ಈ ವ್ಯವಸ್ಥೆಯಿಂದ ಕೇವಲ 7 ವಾರ್ಡ್‌ಗಳಿಗೆ ಮಾತ್ರ ನೀರು ಒದಗಿಸಲಾಗುತ್ತಿದೆ. ಉಳಿದ 13 ವಾರ್ಡ್‌ಗಳಿಗೂ ಸಮರ್ಪಕವಾಗಿ ನೀರು ಪೂರೈಸುವ ಉದ್ದೇಶದಿಂದ 35 ಮತ್ತು 30 ಎಚ್‌ಪಿ ಸಾಮರ್ಥ್ಯದ ಮೋಟರ್‌ಗಳನ್ನು ತೆಂಗಪೂರ ಕೇಂದ್ರಕ್ಕೆ ವರ್ಗಾಯಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಭೂವಿಜ್ಞಾನಿ ಹಾಗೂ ಅಂತರ್ಜಲ ವಿಜ್ಞಾನಿಗಳ ಅಭಿಪ್ರಾಯ ಪಡೆದು, ಸಮರ್ಪಕ ನೀರು ಪೂರೈಕೆಯಾಗದ 10 ವಾರ್ಡ್‌ಗಳಲ್ಲಿ ಹೊಸದಾಗಿ ಕೊಳವೆಬಾವಿ ಕೊರೆಸಬೇಕು. ಇದಕ್ಕೆ ಅಗತ್ಯವಿರುವ ಪೈಪ್‌ಲೈನ್, ಮೋಟರ್ ಹಾಗೂ ವಿದ್ಯುತ್ ಸಂಪರ್ಕದ ವ್ಯವಸ್ಥೆಯನ್ನೂ ತ್ವರಿತವಾಗಿ ಕಲ್ಪಿಸಬೇಕು ಎಂದು ನಿರ್ದೇಶನ ನೀಡಿದರು.
ಬೀದರ್ ಸಹಾಯಕ ಆಯುಕ್ತರು ಹಾಗೂ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರು ಔರಾದ್ ಪಟ್ಟಣಕ್ಕೆ ನೀರು ಪೂರೈಕೆಯಾಗುತ್ತಿರುವ ಕುರಿತು ಖುದ್ದಾಗಿ ಸ್ಥಳ ಪರಿಶೀಲನೆ ನಡೆಸಬೇಕು. ನೀರು ಪೂರೈಕೆ ವ್ಯವಸ್ಥೆಯ ಮೇಲುಸ್ತುವಾರಿ ವಹಿಸಿ, ಸಮಸ್ಯೆ ಪರಿಹಾರಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಇದನ್ನೂ ಓದಿ : Aurad Ground Report | ನೀರಿನ ತ್ರಾಸ ಭಾಳ ಅದಾ, ಟ್ಯಾಂಕರ್ ನೀರು ಭ್ಯಾಡಾ, ನಮ್ಗ್ ನಳ ನೀರೇ ಬೇಕ್!
ಪಟ್ಟಣದ ಜನರಿಗೆ ಕುಡಿಯುವ ನೀರು ಪೂರೈಸಲು ಸರ್ಕಾರ ಹಾಗೂ ಜಿಲ್ಲಾಡಳಿತ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿವೆ. ಈ ಹಿನ್ನೆಲೆಯಲ್ಲಿ ನಾಗರಿಕರು ನಾಳೆ ಕರೆ ನೀಡಿರುವ ಬಂದ್ ಹಿಂಪಡೆದು, ಸಮಸ್ಯೆ ಪರಿಹಾರಕ್ಕೆ ಸಹಕರಿಸಬೇಕು ಎಂದು ಸಚಿವ ಈಶ್ವರ ಖಂಡ್ರೆ ಮನವಿ ಮಾಡಿದರು.
ಸಭೆಯಲ್ಲಿ ಬೀದರ ಶಾಸಕ ರಹೀಂ ಖಾನ್, ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪಂಚಾಯತ್ ಸಿಇಒ ಗಿತ್ತೆ ಮಾಧವ್ ವಿಠಲರಾವ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ ಗುಂಟಿ, ಬೀದರ್ ಸಹಾಯಕ ಆಯುಕ್ತ ಅಭಿನವ್ ಜೈನ್ ಸೇರಿದಂತೆ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಂಬಂಧಪಟ್ಟ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.




