ಮುಂದಿನ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲು ಉಂಟಾಗಿರುವ ಮೈತ್ರಿ ಪಕ್ಷಗಳ ಒಳಜಗಳ ಕಾಂಗ್ರೆಸ್‌ಗೆ ರಾಜಕೀಯ ಲಾಭ ತಂದುಕೊಡಬಹುದೇ ಎಂಬುದೂ ಕೂಡ ಕುತೂಹಲ ಮೂಡಿಸಿದೆ. ಅಂತಿಮವಾಗಿ ಬಿಜೆಪಿ–ಜೆಡಿಎಸ್ ಹೈಕಮಾಂಡ್ ಟಿಕೆಟ್ ಹಂಚಿಕೆಯನ್ನು ಹೇಗೆ ಬಗೆಹರಿಸುತ್ತದೆ ಎಂಬುದರ ಮೇಲೆ ಈ ಕ್ಷೇತ್ರಗಳ ರಾಜಕೀಯ ಚಿತ್ರಣ ಅವಲಂಬಿತವಾಗಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಸ್ಪಷ್ಟತೆ ಸಿಗುವ ನಿರೀಕ್ಷೆಯಿದೆ.
ಕರ್ನಾಟಕದಲ್ಲಿ 2028ರಂದು ನಡೆಯುವ ವಿಧಾನಸಭೆ ಚುನಾವಣೆಗೆ ಇನ್ನೂ ಸಮಯವಿದ್ದರೂ ರಾಜ್ಯಾದ್ಯಂತ ರಾಜಕೀಯ ಚಟುವಟಿಕೆಗಳು ಈಗಾಗಲೇ ಗರಿಗೆದರಿವೆ. ಸ್ಥಳೀಯ ನಾಯಕರು, ಕಳೆದ ಚುನಾವಣೆಯಲ್ಲಿ ಪರಾಜಿತರಾದ ಅಭ್ಯರ್ಥಿಗಳು ಹಾಗೂ ವಿವಿಧ ಪಕ್ಷಗಳ ಮುಖಂಡರು ಕ್ಷೇತ್ರಗಳಲ್ಲಿ ಸಕ್ರಿಯವಾಗಿ ಓಡಾಟ ನಡೆಸುತ್ತಿದ್ದು, ಕಾರ್ಯಕರ್ತರ ಸಭೆಗಳು, ಸಾರ್ವಜನಿಕ ಕಾರ್ಯಕ್ರಮಗಳು ಹಾಗೂ ಹಬ್ಬ-ಹರಿದಿನಗಳಲ್ಲಿ ಭಾಗವಹಿಸುವ ಮೂಲಕ ತಮ್ಮ ರಾಜಕೀಯ ನೆಲೆ ಬಲಪಡಿಸಲು ಮುಂದಾಗಿದ್ದಾರೆ.
2023ರ ವಿಧಾನಸಭೆ ಚುನಾವಣೆಯ ಬಳಿಕ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡು 2024ರ ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಉತ್ತಮ ಪ್ರದರ್ಶನ ನೀಡಿದ್ದವು. ಈ ಹಿನ್ನೆಲೆ 2028ರ ವಿಧಾನಸಭೆ ಚುನಾವಣೆಯಲ್ಲೂ ಮೈತ್ರಿಯ ಭವಿಷ್ಯ, ಟಿಕೆಟ್ ಹಂಚಿಕೆ ಹಾಗೂ ಅಭ್ಯರ್ಥಿಗಳ ಆಯ್ಕೆ ಕುರಿತು ಈಗಿನಿಂದಲೇ ರಾಜಕೀಯ ವಲಯದಲ್ಲಿ ಚರ್ಚೆಗಳು ಆರಂಭವಾಗಿವೆ.
ರಾಯಚೂರು ಜಿಲ್ಲೆಯ ಮಾನ್ವಿ ಹಾಗೂ ದೇವದುರ್ಗ ವಿಧಾನಸಭಾ ಕ್ಷೇತ್ರಗಳು ಎಸ್‌ಟಿ ಮೀಸಲು ಕ್ಷೇತ್ರಗಳಾಗಿದ್ದು, ಎರಡೂ ಕ್ಷೇತ್ರಗಳಲ್ಲಿ ರಾಜಕೀಯ ಚಟುವಟಿಕೆಗಳು ದಿನದಿಂದ ದಿನಕ್ಕೆ ಚುರುಕುಗೊಳ್ಳುತ್ತಿವೆ.
ದೇವದುರ್ಗದಲ್ಲಿ ಮತ್ತೆ ಕರೆಮ್ಮ ನಾಯಕರ ಸ್ಪರ್ಧೆ?
ದೇವದುರ್ಗ ಕ್ಷೇತ್ರದ ಹಾಲಿ ಶಾಸಕಿ ಕರೆಮ್ಮ ಜಿ. ನಾಯಕ ಅವರು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಶಿವನಗೌಡ ನಾಯಕ ಅವರನ್ನು ಸೋಲಿಸಿ ಗಮನ ಸೆಳೆದಿದ್ದರು. ಜೆಡಿಎಸ್ ವರಿಷ್ಠರಾದ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ಮಾರ್ಗದರ್ಶನದಲ್ಲಿ ರಾಜಕೀಯವಾಗಿ ಮುಂದುವರೆಯುತ್ತಿರುವ ಅವರು, ಬಿಜೆಪಿ–ಜೆಡಿಎಸ್ ಮೈತ್ರಿ ಮುಂದುವರಿದರೂ ಮತ್ತೆ ತಾವೇ ಅಭ್ಯರ್ಥಿಯಾಗುವ ವಿಶ್ವಾಸ ವ್ಯಕ್ತಪಡಿಸಿರುವುದಾಗಿ ತಿಳಿದುಬಂದಿದೆ.
ಮಾನ್ವಿಯಲ್ಲಿ ಹಲವು ಮಂದಿ ಟಿಕೆಟ್ ಆಕಾಂಕ್ಷಿಗಳು
ಮಾನ್ವಿ ಕ್ಷೇತ್ರದಲ್ಲಿ ಟಿಕೆಟ್‌ಗಾಗಿ ಹಲವು ಮಂದಿ ನಾಯಕರು ತಮ್ಮ ಹಕ್ಕು ಪ್ರತಿಪಾದಿಸುತ್ತಿದ್ದಾರೆ. ಮಾಜಿ ಸಂಸದ ಬಿ ವಿ ನಾಯಕ ಅವರು ಬಿಜೆಪಿ ಹೈಕಮಾಂಡ್‌ನೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದು, ಈ ಬಾರಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುವ ವಿಶ್ವಾಸದಲ್ಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.
ಇನ್ನೊಂದೆಡೆ ಮಾಜಿ ಸಚಿವ ಶಿವನಗೌಡ ನಾಯಕ ಅವರು ಕ್ಷೇತ್ರದಲ್ಲಿ ಹುಟ್ಟುಹಬ್ಬ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಿ ಕಾರ್ಯಕರ್ತರು ಹಾಗೂ ಸಾರ್ವಜನಿಕರನ್ನು ನಿರಂತರವಾಗಿ ಭೇಟಿ ಮಾಡುತ್ತಿರುವುದು, ಅವರು ಕೂಡ ಚುನಾವಣಾ ಕಣಕ್ಕಿಳಿಯುವ ಸಾಧ್ಯತೆಗಳ ಬಗ್ಗೆ ಚರ್ಚೆಗೆ ಕಾರಣವಾಗಿದೆ.
ಸ್ಥಳೀಯ ಬಿಜೆಪಿ ಮುಖಂಡ ಗಂಗಾಧರ ನಾಯಕ ಕೂಡ ತಾವೇ ಅಭ್ಯರ್ಥಿ ಎಂಬ ವಿಶ್ವಾಸ ವ್ಯಕ್ತಪಡಿಸುತ್ತಿದ್ದು, ʼಯಾವುದೇ ವದಂತಿಗಳಿಗೆ ಕಾರ್ಯಕರ್ತರು ಕಿವಿಗೊಡಬಾರದು. ಕ್ಷೇತ್ರದ ಜನರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು ಅಭಿವೃದ್ಧಿ ಕಾರ್ಯಗಳಿಗೆ ಆದ್ಯತೆ ನೀಡುತ್ತಿದ್ದೇನೆʼ ಎಂದು ಹೇಳಿರುವುದಾಗಿ ತಿಳಿದುಬಂದಿದೆ.
ಜೆಡಿಎಸ್‌ನಲ್ಲೂ ಟಿಕೆಟ್‌ಗಾಗಿ ವಿಶ್ವಾಸ
ಜೆಡಿಎಸ್‌ನ ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರು, “ಕೇಂದ್ರದಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿ ಇರುವುದರಿಂದ ನನಗೆ ಬಿ-ಫಾರಂ ದೊರೆಯುವ ವಿಶ್ವಾಸವಿದೆ. ಮೈತ್ರಿ ಪಕ್ಷಗಳ ವರಿಷ್ಠರು ಯಾವ ಕ್ಷೇತ್ರವನ್ನು ಯಾವ ಪಕ್ಷಕ್ಕೆ ನೀಡಬೇಕು ಎಂಬ ಬಗ್ಗೆ ಚರ್ಚೆ ನಡೆಸಿದ್ದು, ಅದರಂತೆ ನಾವು ಕೆಲಸ ಮಾಡುತ್ತಿದ್ದೇವೆ” ಎಂದು ಹೇಳಿರುವುದಾಗಿ ಮಾಹಿತಿ ಲಭ್ಯವಾಗಿದೆ.
ಮೈತ್ರಿಯೊಳಗಿನ ಪೈಪೋಟಿ ಕಾಂಗ್ರೆಸ್‌ಗೆ ವರವಾಗುತ್ತದೆಯೇ?
ಮಾನ್ವಿ ಹಾಗೂ ದೇವದುರ್ಗ ಕ್ಷೇತ್ರಗಳಲ್ಲಿ ಬಿಜೆಪಿ ಮತ್ತು ಜೆಡಿಎಸ್‌ನ ಹಲವು ನಾಯಕರು ಸಾಮಾಜಿಕ ಜಾಲತಾಣಗಳಲ್ಲಿಯೂ ತಾವೇ ಅಭ್ಯರ್ಥಿ ಎಂದು ಪರೋಕ್ಷ ಅಥವಾ ಪ್ರತ್ಯಕ್ಷವಾಗಿ ಪ್ರಚಾರ ನಡೆಸುತ್ತಿದ್ದಾರೆ. ಇದರಿಂದ ಮೈತ್ರಿ ಪಕ್ಷಗಳ ಕಾರ್ಯಕರ್ತರಲ್ಲಿ ಗೊಂದಲ ಉಂಟಾಗುವ ಸಾಧ್ಯತೆ ಇದೆ ಎಂಬ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ.
ಒಂದು ವೇಳೆ ಟಿಕೆಟ್ ಬಿಜೆಪಿ ಪಾಲಾದರೆ ಜೆಡಿಎಸ್ ನಾಯಕರು ಬಂಡಾಯದ ಹಾದಿ ಹಿಡಿಯುವರೇ? ಅಥವಾ ಜೆಡಿಎಸ್‌ಗೆ ಟಿಕೆಟ್ ನೀಡಿದರೆ ಸ್ಥಳೀಯ ಬಿಜೆಪಿ ನಾಯಕರು ಸಂಪೂರ್ಣ ಬೆಂಬಲ ನೀಡುವರೇ? ಎಂಬ ಪ್ರಶ್ನೆಗಳು ರಾಜಕೀಯ ವಲಯದಲ್ಲಿ ಚರ್ಚೆಯಾಗುತ್ತಿವೆ.
ಪಕ್ಷದ ಹೈಕಮಾಂಡ್ ಇನ್ನೂ ಯಾವುದೇ ಕ್ಷೇತ್ರಕ್ಕೂ ಅಧಿಕೃತ ಅಭ್ಯರ್ಥಿಯನ್ನು ಘೋಷಿಸಿಲ್ಲ. ಆದರೂ ವಿವಿಧ ನಾಯಕರ ಬೆಂಬಲಿಗರು ತಮ್ಮ ನಾಯಕರೇ ಮುಂದಿನ ಬಿಜೆಪಿ ಅಭ್ಯರ್ಥಿ ಎಂದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಪ್ರಚಾರ ನಡೆಸುತ್ತಿದ್ದಾರೆ. ಫೇಸ್‌ಬುಕ್, ವಾಟ್ಸ್ಯಾಪ್ ಸೇರಿದಂತೆ ವಿವಿಧ ಡಿಜಿಟಲ್ ವೇದಿಕೆಗಳಲ್ಲಿ ಬೆಂಬಲಿಗರ ನಡುವಿನ ವಾಕ್ಸಮರ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ನಾಯಕರ ನಡುವಿನ ಈ ರೀತಿಯ ಭಿನ್ನಾಭಿಪ್ರಾಯದ ಸಂದೇಶಗಳು ಮತ್ತು ಟಿಕೆಟ್‌ಗಾಗಿ ನಡೆಯುತ್ತಿರುವ ಪೈಪೋಟಿ ತಳಮಟ್ಟದ ಕಾರ್ಯಕರ್ತರಲ್ಲಿ ಗೊಂದಲಕ್ಕೆ ಕಾರಣವಾಗಿದ್ದು, ಪಕ್ಷದ ಹೈಕಮಾಂಡ್ ಈ ಬೆಳವಣಿಗೆಗಳನ್ನು ಹೇಗೆ ನಿಭಾಯಿಸುತ್ತದೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ.
ಇದನ್ನೂ ಓದಿದ್ದೀರಾ? ಅಂಗನವಾಡಿ, ಆಶಾ, ಬಿಸಿಯೂಟ ಕಾರ್ಮಿಕರಿಂದ ‘ಕರಾಳ ದಿನ’ ಮುಷ್ಕರ: ರಾಜ್ಯದಲ್ಲಿ ಮೊಳಗಿದ ಹಕ್ಕುಗಳ ಧ್ವನಿ
ಈ ಬೆಳವಣಿಗೆಗಳ ನಡುವೆಯೇ ಮುಂದಿನ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲು ಉಂಟಾಗಿರುವ ಮೈತ್ರಿ ಪಕ್ಷಗಳ ಒಳಜಗಳ ಕಾಂಗ್ರೆಸ್‌ಗೆ ರಾಜಕೀಯ ಲಾಭ ತಂದುಕೊಡಬಹುದೇ ಎಂಬುದೂ ಕುತೂಹಲ ಮೂಡಿಸಿದೆ. ಅಂತಿಮವಾಗಿ ಬಿಜೆಪಿ–ಜೆಡಿಎಸ್ ಹೈಕಮಾಂಡ್ ಟಿಕೆಟ್ ಹಂಚಿಕೆಯನ್ನು ಹೇಗೆ ಬಗೆಹರಿಸುತ್ತದೆ ಎಂಬುದರ ಮೇಲೆ ಈ ಕ್ಷೇತ್ರಗಳ ರಾಜಕೀಯ ಚಿತ್ರಣ ಅವಲಂಬಿತವಾಗಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಸ್ಪಷ್ಟತೆ ಸಿಗುವ ನಿರೀಕ್ಷೆಯಿದೆ.

ರಫಿ ಗುರುಗುಂಟ
ಗುಲಬರ್ಗಾ ವಿವಿಯಿಂದ ಪತ್ರಿಕೋದ್ಯಮದಲ್ಲಿ ಎಂ ಎ ಪದವಿ, ಕಲ್ಯಾಣ ಕರ್ನಾಟಕ ವಲಯ ಕೋರ್ಡಿನೇಟರ್



