ಹಾಲು ಮತ್ತು ಬಸ್ ಪ್ರಯಾಣ ದರ ಏರಿಕೆಯನ್ನು ರಾಜ್ಯ ಸರ್ಕಾರ ತಕ್ಷಣವೇ ಹಿಂಪಡೆಯಬೇಕು. ವಿವಿಧ ಇಲಾಖೆಗಳು ಹಾಗೂ ನಿಗಮಗಳಲ್ಲಿನ ಭ್ರಷ್ಟಾಚಾರ, ಅವ್ಯವಹಾರ ಮತ್ತು ದುಂದು ವೆಚ್ಚಗಳಿಗೆ ಕಡಿವಾಣ ಹಾಕುವ ಮೂಲಕ ಆರ್ಥಿಕ ಸಂಪನ್ಮೂಲ ಕ್ರೋಢೀಕರಿಸಬೇಕು ಎಂದು ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್‌ಎಸ್) ಪಕ್ಷ ಆಗ್ರಹಿಸಿದೆ.
ಈ ಕುರಿತು ಪಕ್ಷದ ಮುಖಂಡರು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರ ಹೆಸರಿಗೆ ಬರೆದ ಮನವಿಯನ್ನು ಅಪರ ಜಿಲ್ಲಾಧಿಕಾರಿ ಸುರೇಖಾ ಅವರಿಗೆ ಸಲ್ಲಿಸಿದರು.
“ರಾಜ್ಯ ಸರ್ಕಾರವು ನ.1ರಿಂದ ಹಾಲಿನ ದರ ಹಾಗೂ ನ.5ರಿಂದ ಬಸ್ ಪ್ರಯಾಣ ದರ ಹೆಚ್ಚಿಸಿರುವುದು ಜನಸಾಮಾನ್ಯರ ಮೇಲೆ ಹೆಚ್ಚುವರಿ ಆರ್ಥಿಕ ಹೊರೆ ಹೊರಿಸಿದೆ. ರೈತರ ಹಿತದೃಷ್ಟಿಯಿಂದ ಹಾಲಿನ ದರ ಹೆಚ್ಚಿಸಲಾಗಿದೆ ಎಂದು ಸರ್ಕಾರ ಹೇಳುತ್ತಿದ್ದರೂ, ಘೋಷಿತ ಪ್ರಮಾಣಕ್ಕಿಂತ ಹೆಚ್ಚಿನ ದರ ಏರಿಕೆ ಮಾಡಲಾಗಿದೆ. ಅದೇ ರೀತಿ ಬಸ್ ಪ್ರಯಾಣ ದರ ಶೇ.25ರಷ್ಟು ಹೆಚ್ಚಿಸುವುದಾಗಿ ಹೇಳಿ, ನಗರ ಸಾರಿಗೆಯಲ್ಲಿ ಶೇ.35ರಷ್ಟು ಹೆಚ್ಚಳ ಮಾಡಿರುವುದು ಸಾರ್ವಜನಿಕರಿಗೆ ಹೊರೆಯಾಗಿದೆ” ಎಂದು ದೂರಿದರು.
ಈಗಾಗಲೇ ಆಹಾರ ಪದಾರ್ಥಗಳು, ತರಕಾರಿ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಿಂದ ತತ್ತರಿಸಿರುವ ಬಡವರು ಹಾಗೂ ಮಧ್ಯಮ ವರ್ಗದ ಜನರಿಗೆ ಹಾಲು ಮತ್ತು ಬಸ್ ದರ ಏರಿಕೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಸರ್ಕಾರ ಬೆಲೆ ಏರಿಕೆಯನ್ನು ಸಮರ್ಥಿಸಿಕೊಳ್ಳುವ ಬದಲು ಜನರ ಸಂಕಷ್ಟ ಅರ್ಥಮಾಡಿಕೊಳ್ಳಬೇಕು ಎಂದು ಒತ್ತಾಯಿಸಿದರು.
ರೈತರ ಹಿತಾಸಕ್ತಿಯ ನೆಪದಲ್ಲಿ ಹಾಲಿನ ದರ ಹೆಚ್ಚಿಸುವ ಸರ್ಕಾರ, ಕೆಎಂಎಫ್ ಹಾಗೂ ಹಾಲು ಒಕ್ಕೂಟಗಳಲ್ಲಿನ ಅವ್ಯವಹಾರ ಮತ್ತು ಅಕ್ರಮಗಳನ್ನು ನಿಯಂತ್ರಿಸುವಲ್ಲಿ ವಿಫಲವಾಗಿದೆ. ಮಂಡ್ಯ ಹಾಲು ಒಕ್ಕೂಟದಲ್ಲಿನ ಕಲಬೆರಕೆ ಪ್ರಕರಣ ಸೇರಿದಂತೆ ಇಂತಹ ಘಟನೆಗಳ ಕುರಿತು ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಹಾಲು ಒಕ್ಕೂಟಗಳ ಆಡಳಿತ ವ್ಯವಸ್ಥೆ ಸುಧಾರಿಸಿ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಿದರೆ, ಗ್ರಾಹಕರ ಮೇಲೆ ಹೆಚ್ಚುವರಿ ಹೊರೆ ಹಾಕದೆ ರೈತರಿಗೆ ಉತ್ತಮ ದರ ನೀಡಲು ಸಾಧ್ಯವಿದೆ ಎಂದು ಅಭಿಪ್ರಾಯಪಟ್ಟರು.

ಸಾರಿಗೆ ನಿಗಮಗಳು ನಷ್ಟದಲ್ಲಿವೆ ಎಂಬ ಕಾರಣ ನೀಡಿ ಪ್ರಯಾಣ ದರ ಹೆಚ್ಚಿಸಿರುವ ಸರ್ಕಾರ, ನಿಗಮಗಳಲ್ಲಿನ ಭ್ರಷ್ಟಾಚಾರ, ಅವ್ಯವಹಾರ ಹಾಗೂ ಆಡಳಿತಾತ್ಮಕ ವೈಫಲ್ಯಗಳನ್ನು ಸರಿಪಡಿಸುವತ್ತ ಗಮನಹರಿಸುತ್ತಿಲ್ಲ. ಸಾರಿಗೆ ನೌಕರರಿಗೆ ಸಕಾಲದಲ್ಲಿ ವೇತನ ಪಾವತಿಯಾಗದಿರುವುದು, ಕಡಿಮೆ ಸಂಬಳ ಸೇರಿದಂತೆ ಹಲವು ಸಮಸ್ಯೆಗಳು ಮುಂದುವರಿದಿವೆ. ಹೀಗಾಗಿ ಪ್ರಯಾಣ ದರ ಹೆಚ್ಚಿಸುವ ಬದಲು ನಿಗಮಗಳ ಕಾರ್ಯವೈಖರಿ ಸುಧಾರಿಸಿ, ಅನಗತ್ಯ ವೆಚ್ಚಗಳಿಗೆ ಕಡಿವಾಣ ಹಾಕಬೇಕು ಎಂದು ಆಗ್ರಹಿಸಿದರು.
2023ರ ವಿಧಾನಸಭಾ ಚುನಾವಣೆಯ ಬಳಿಕ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಸಂದರ್ಭದಲ್ಲಿ ಭಾಗ್ಯ ಯೋಜನೆಗಳ ಅನುಷ್ಠಾನದ ಜತೆಗೆ ಭ್ರಷ್ಟಾಚಾರ ನಿಯಂತ್ರಿಸಿ ಹೆಚ್ಚುವರಿ ಸಂಪನ್ಮೂಲ ಕ್ರೋಢೀಕರಿಸದಿದ್ದರೆ ರಾಜ್ಯ ಆರ್ಥಿಕ ಸಂಕಷ್ಟಕ್ಕೆ ಸಿಲುಕಲಿದೆ. ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನದ ಕೊರತೆ, ಗುತ್ತಿಗೆದಾರರು ಹಾಗೂ ಸರಬರಾಜುದಾರರಿಗೆ ಬಾಕಿ ಪಾವತಿ ಮತ್ತು ರೈತರಿಗೆ ಪರಿಹಾರ ವಿತರಣೆಯಲ್ಲಿ ವಿಳಂಬ ಸೇರಿದಂತೆ ಹಲವು ಸಮಸ್ಯೆಗಳು ಎದುರಾಗಿವೆ. ಈ ವೇಳೆ ಜನರ ಮೇಲೆ ಬೆಲೆ ಏರಿಕೆಯ ಹೊರೆ ಹೇರುವುದು ಸರಿಯಲ್ಲ ಎಂದು ಹೇಳಿದರು.
ಸರ್ಕಾರಿ ಕಾರ್ಯಕ್ರಮಗಳಲ್ಲಿನ ದುಂದು ವೆಚ್ಚ, ಅದ್ಧೂರಿ ಜಾಹೀರಾತು, ಅನಗತ್ಯ ಸರ್ಕಾರಿ ವಾಹನಗಳ ಬಳಕೆ ಹಾಗೂ ಆಡಳಿತಾತ್ಮಕ ವೆಚ್ಚಗಳಿಗೆ ಕಡಿವಾಣ ಹಾಕಬೇಕು. ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಜವಾಬ್ದಾರಿಯುತ ಕಾರ್ಯನಿರ್ವಹಣೆಯನ್ನು ಖಚಿತಪಡಿಸಬೇಕು. ಭ್ರಷ್ಟಾಚಾರ ನಿಗ್ರಹಿಸಿ ದಕ್ಷ ಆಡಳಿತ ನೀಡುವ ಮೂಲಕ ರಾಜ್ಯದ ಆರ್ಥಿಕ ಸಂಪನ್ಮೂಲಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ಕೆಆರ್‌ಎಸ್ ಪಕ್ಷದ ಜಿಲ್ಲಾಧ್ಯಕ್ಷ ಹಣಮಂತ ಮಟ್ಟೆ, ಜಿಲ್ಲಾ ಉಪಾಧ್ಯಕ್ಷ ಶಿವರಾಜ ಶ್ರೀಮಂಗಲೆ, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಮಹಾದೇವಿ ಸ್ವಾಮಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಜರಂಗ ಪವಾರ, ಜಿಲ್ಲಾ ಕಾರ್ಯದರ್ಶಿ ವಿಠಲರಾವ ಚಟ್ನಾಳಕರ್, ಪಕ್ಷದ ಪ್ರಮುಖರಾದ ಹನುಮರೆಡ್ಡಿ ಎಗಡೆ, ಕೃಷ್ಣಾರೆಡ್ಡಿ ಎಗಡೆ ಮತ್ತಿತರರು ಉಪಸ್ಥಿತರಿದ್ದರು.

ಇದನ್ನೂ ಓದಿ : ಬೀದರ್ | ಪ್ರತಿ ಟನ್ ಕಬ್ಬಿಗೆ ₹4,000 ಬೆಂಬಲ ಬೆಲೆ ನಿಗದಿಪಡಿಸಿ: ಮಾಜಿ ಸಚಿವ ಬಂಡೆಪ್ಪ ಖಾಶೆಂಪುರ್




