ಜಿಲ್ಲೆಯಲ್ಲಿ ಸಮರ್ಪಕ ಮಳೆಯಾಗದ ಹಿನ್ನೆಲೆಯಲ್ಲಿ ಈ ಬಾರಿ ಬೆಳೆಗಳು ರೈತರ ಕೈಹಿಡಿಯದೆ ನೆಲಕಚ್ಚಿದ್ದು, ಬರ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಯಾರೂ ಗುಳೆ ಹೋಗದಂತೆ ದುಡಿಯುವ ಕೈಗಳಿಗೆ ವಿಬಿ-ಜಿ ರಾಮ್ ಜಿ ಯೋಜನೆಯಡಿ ಉದ್ಯೋಗ ಕಲ್ಪಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹೇಳಿದರು.
ಬೀದರ್ ನಗರದ ನೆಹರು ಕ್ರೀಡಾಂಗಣದ ಸಭಾಂಗಣದಲ್ಲಿ ಶನಿವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ಈ ಹಿಂದೆ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಮನರೇಗಾ) ಎಂದು ಕರೆಯಲಾಗುತ್ತಿದ್ದ ಯೋಜನೆಗೆ ಕೇಂದ್ರ ಸರ್ಕಾರ ವಿಬಿ-ಜಿ ರಾಮ್ ಜಿ ಎಂದು ನಾಮಕರಣ ಮಾಡಿದೆ. ಯೋಜನೆಯ ಅನುದಾನ ಹಂಚಿಕೆಯಲ್ಲಿಯೂ ಬದಲಾವಣೆ ಮಾಡಲಾಗಿದ್ದು, ಈ ಹಿಂದೆ ಕೇಂದ್ರ ಸರ್ಕಾರ ಶೇ.90 ಹಾಗೂ ರಾಜ್ಯ ಸರ್ಕಾರ ಶೇ.10ರಷ್ಟು ಪಾಲು ನೀಡುತ್ತಿದ್ದರೆ, ಇದೀಗ ಕೇಂದ್ರದ ಪಾಲು ಶೇ.60 ಹಾಗೂ ರಾಜ್ಯದ ಪಾಲು ಶೇ.40ಕ್ಕೆ ನಿಗದಿಯಾಗಿದೆ. ಇದರಿಂದ ರಾಜ್ಯ ಸರ್ಕಾರದ ಮೇಲೆ ಹೆಚ್ಚಿನ ಆರ್ಥಿಕ ಹೊರೆ ಬೀಳುತ್ತಿದೆ. ಆದರೂ ದುಡಿಯುವ ಕೈಗಳಿಗೆ ಉದ್ಯೋಗ ಒದಗಿಸಲು ಸರ್ಕಾರ ಬದ್ಧವಾಗಿದೆ” ಎಂದರು.
“ಈಗಾಗಲೇ ಜಿಲ್ಲೆಯಲ್ಲಿ ವಿಬಿ-ಜಿ ರಾಮ್ ಜಿ ಯೋಜನೆಯಡಿ ₹48 ಕೋಟಿ ಅನುದಾನ ಬಿಡುಗಡೆಯಾಗಿದ್ದು, ಇದುವರೆಗೆ ಸುಮಾರು 3 ಲಕ್ಷ ಜನರಿಗೆ ಉದ್ಯೋಗ ಒದಗಿಸಲಾಗಿದೆ. ‘ನಮ್ಮ ಹೊಲ, ನಮ್ಮ ದಾರಿ’ ಯೋಜನೆಯಡಿ ರೈತರು ತಮ್ಮ ಹೊಲಗಳಿಗೆ ತೆರಳಲು ಅನುಕೂಲ ಆಗುವಂತೆ ಅಗತ್ಯ ದಾರಿಗಳನ್ನು ನಿರ್ಮಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಈ ತಿಂಗಳೊಳಗೆ ಜಿಲ್ಲೆಯ ಗ್ರಾಮ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿಗಳ ಮೀಸಲಾತಿ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು” ಎಂದರು.

ಜಿಲ್ಲೆಯಲ್ಲಿ ನೂತನ ಜಿಲ್ಲಾ ಕ್ರೀಡಾಂಗಣ ಹಾಗೂ ಜಿಲ್ಲಾ ಪಂಚಾಯಿತಿ ಕಟ್ಟಡ ನಿರ್ಮಾಣಕ್ಕೂ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಅರಿವು ಕೇಂದ್ರಗಳಲ್ಲಿರುವ ಗ್ರಂಥಪಾಲಕರ ವೇತನ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ಗ್ರಾಮ ಪಂಚಾಯಿತಿ ಕೇಂದ್ರ ಸ್ಥಾನಗಳ ಹೊರತಾಗಿ ದೊಡ್ಡ ಗ್ರಾಮಗಳಲ್ಲಿಯೂ ಗ್ರಂಥಾಲಯಗಳನ್ನು ಸ್ಥಾಪಿಸಲು ಕ್ರಮ ವಹಿಸಲಾಗುವುದು ಎಂದು ಹೇಳಿದರು.
ಖಾಸಗಿ ಕಂಪನಿಗಳ ಸಹಕಾರದೊಂದಿಗೆ ಸಿಎಸ್‌ಆರ್ ಅನುದಾನದಡಿ ಜಿಲ್ಲೆಯ ಯುವಕರಿಗೆ ವಿವಿಧ ಕೌಶಲ್ಯ ತರಬೇತಿಗಳನ್ನು ನೀಡಲು ಕ್ರಮ ಕೈಗೊಳ್ಳಲಾಗುವುದು. ಶುದ್ಧ ಕುಡಿಯುವ ನೀರಿನ ಘಟಕಗಳ ದುರಸ್ತಿ ಕಾರ್ಯಕ್ಕಾಗಿ ಟೆಂಡರ್ ಕರೆಯಲಾಗಿದ್ದು, ದುರಸ್ತಿ ಪೂರ್ಣಗೊಂಡ ಬಳಿಕ ಜನರಿಗೆ ಶುದ್ಧ ಕುಡಿಯುವ ನೀರು ಒದಗಿಸಲಾಗುವುದು. ಗ್ರಾಮಗಳ ಸ್ವಚ್ಛತೆಗೆ ಆದ್ಯತೆ ನೀಡಲಾಗಿದೆ. ಸಾರ್ವಜನಿಕರು ಆಸ್ತಿಯ ‘ಎ’ ಮತ್ತು ‘ಬಿ’ ಖಾತೆ ಪಡೆಯಲು ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಯುವಜನರಲ್ಲಿ ಕಲೆ, ಸಾಹಿತ್ಯ, ಸಂಸ್ಕೃತಿ ಹಾಗೂ ಕ್ರೀಡಾ ಮನೋಭಾವ ಬೆಳೆಸುವ ಉದ್ದೇಶದಿಂದ ‘ಭಾರತ್ ಜೋಡೋ ಸಂಘ’ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗಿದೆ ಎಂದರು.
ಇದನ್ನೂ ಓದಿ : ವಿ.ಕೃ. ಗೋಕಾಕ್ ಅವರ ಕತೆ | ಸಾವಿನ ಮೇಜವಾನಿ
ಸುದ್ದಿಗೋಷ್ಠಿಯಲ್ಲಿ ಬೀದರ್ ಉತ್ತರ ಶಾಸಕ ರಹೀಮ್ ಖಾನ್, ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಿರೀಶ್ ಬದೋಲೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ, ಬೀದರ್ ಮಹಾನಗರ ಪಾಲಿಕೆ ಆಯುಕ್ತ ಮುಕುಲ್ ಜೈನ್ ಹಾಗೂ ಅರಣ್ಯ ಉಪ ಸಂರಕ್ಷಣಾಧಿಕಾರಿ ಸುಮೀತ್ ಕುಮಾರ್ ಉಪಸ್ಥಿತರಿದ್ದರು.




