ಬೀದರ್ ಜಿಲ್ಲೆಯಲ್ಲಿ ಎಲ್ಲಿಯೂ ಕುಡಿಯುವ ನೀರಿನ ಸಮಸ್ಯೆ ಕಂಡುಬಂದಲ್ಲಿ ಅಧಿಕಾರಿಗಳು 24 ಗಂಟೆಯೊಳಗಾಗಿ ಇತ್ಯರ್ಥಪಡಿಸಬೇಕೆಂದು ಗ್ರಾಮೀಣಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಬರ ಪರಿಸ್ಥಿತಿ, ಕುಡಿಯುವ ನೀರು, ಇ-ಸ್ವತ್ತು ಹಾಗೂ ವಿಬಿ-ಜಿ ರಾಮ್ ಜಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಅಧಿಕಾರಿಗಳು ಪ್ರತಿಯೊಂದು ಗ್ರಾಮಕ್ಕೂ ಖುದ್ದಾಗಿ ಭೇಟಿ ನೀಡಿ, ಕುಡಿಯುವ ನೀರಿನ ಅಭಾವ ಎದುರಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ನೀರು ಪೂರೈಕೆಯಂತಹ ಅತ್ಯಗತ್ಯ ಸೇವೆಯಲ್ಲಿ ಕರ್ತವ್ಯ ಲೋಪ ಎಸಗುವ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.
ವಿಬಿ-ಜಿ ರಾಮ್ ಜಿ ಯೋಜನೆಯಡಿ ಗ್ರಾಮೀಣ ಭಾಗದ ಮೂಲಸೌಕರ್ಯ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದ್ದು, ಸಾರ್ವಜನಿಕರಿಗೆ ಸ್ಥಳೀಯವಾಗಿಯೇ ಉದ್ಯೋಗ ಹಾಗೂ ಆರ್ಥಿಕ ಭದ್ರತೆ ಒದಗಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ. ಈ ಯೋಜನೆಯಡಿ ಗರಿಷ್ಠ ಪ್ರಮಾಣದಲ್ಲಿ ಕಾಮಗಾರಿಗಳನ್ನು ಸೃಜಿಸಬೇಕು ಮತ್ತು ಕೂಲಿ ಕಾರ್ಮಿಕರಿಗೆ ನಿಗದಿತ ಅವಧಿಯಲ್ಲಿ ವೇತನ ಪಾವತಿಸಬೇಕು ಎಂದರು.
ಯಾವುದೇ ತರಹದ ಅಕ್ರಮಗಳಿಗೆ ಆಸ್ಪದ ನೀಡದೇ ನಿಗದಿತ ಸಮಯದಲ್ಲಿ ಗುಣಮಟ್ಟದೊಂದಿಗೆ ಕಾಮಗಾರಿ ಪೂರ್ಣಗೊಳಿಸಬೇಕು. ಬೀದರ ಜಿಲ್ಲೆಯು ಗಡಿಭಾಗದಲ್ಲಿರುವ ಕಾರಣ ಜಿಲ್ಲೆಯಿಂದ ಕೂಲಿ ಕಾರ್ಮಿಕರು ಕೆಲಸಕ್ಕಾಗಿ ನೆರೆ ರಾಜ್ಯಗಳಿಗೆ ವಲಸೆ ಹೋಗುವುದನ್ನು ತಡೆಯಲು ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಎಂದು ಹೇಳಿದರು.
ಜಿಲ್ಲೆಯ ವಿವಿಧೆಡೆ ವಿದ್ಯುತ್ ತಂತಿಗಳು ಅಪಾಯಕಾರಿ ಹಂತದಲ್ಲಿದ್ದು, ಸರಣಿ ಅಪಘಾತ ಹಾಗೂ ಸಾವು-ನೋವುಗಳಿಗೆ ಕಾರಣವಾಗುತ್ತಿವೆ. ಈ ಕುರಿತು ತೀವ್ರ ಕಳವಳ ವ್ಯಕ್ತಪಡಿಸಿದ ಸಚಿವರು, ವಿದ್ಯುತ್ ಕಂಬ ಮತ್ತು ತಂತಿಗಳಿಂದ ಯಾವುದೇ ರೀತಿಯ ಅನಾಹುತ ಸಂಭವಿಸದಂತೆ ತಕ್ಷಣವೇ ಮುನ್ನೆಚ್ಚರಿಕಾ ಕ್ರಮ ಕೈಗೊಂಡು ಸಮಗ್ರ ವರದಿ ಸಲ್ಲಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲೆಯ ಪ್ರತಿಯೊಂದು ಗ್ರಾಮೀಣ ಪ್ರದೇಶಕ್ಕೂ ಬಸ್ ಸಂಚಾರ ಸಮರ್ಪಕವಾಗಿರಬೇಕು. ಯಾವುದೇ ಹಳ್ಳಿಯಿಂದಲೂ ಬಸ್ ಬರುತ್ತಿಲ್ಲ ಎಂಬ ದೂರುಗಳು ಕೇಳಿಬರದಂತೆ ಸಾರಿಗೆ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಅವರು ಸೂಚಿಸಿದರು.
ಇದನ್ನೂ ಓದಿ : ಬೀದರ್ ಜಿಲ್ಲಾ ಪಂಚಾಯತ್ ಸಿಇಒ ಗಿರೀಶ ಬದೋಲೆ ವರ್ಗಾವಣೆ, ಗಿತ್ತೆ ಮಾಧವ್ ನೂತನ ಸಿಇಒ
ಸಭೆಯಲ್ಲಿ ಬೀದರ್ ಉತ್ತರ ಕ್ಷೇತ್ರದ ಶಾಸಕ ರಹೀಂ ಖಾನ್, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಂದೀಪ್ ಡಿ., ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪಂಚಾಯತ್ ಸಿಇಒ ಗಿರೀಶ್ ದಿಲೀಪ್ ಬದೋಲೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ, ಮಹಾನಗರ ಪಾಲಿಕೆ ಆಯುಕ್ತ ಮುಕುಲ್ ಜೈನ್ ಸೇರಿದಂತೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.




