ಮತದಾರರ ಪಟ್ಟಿಯ ಸಮಗ್ರ ತೀವ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆ ರದ್ದುಗೊಳಿಸಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶಕುಮಾರ್ ಅವರನ್ನು ವಜಾ ಮಾಡಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಒತ್ತಾಯಿಸಿದೆ.
ನಗರದ ಜಗತ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಸಮಿತಿಯ ಪ್ರಮುಖರು ʼಎಸ್ಐಆರ್ʼ ರದ್ದತಿಗೆ ಆಗ್ರಹಿಸಿದರು. ಬಳಿಕ ರಾಷ್ಟ್ರಪತಿಗಳ ಹೆಸರಿಗೆ ಬರೆದ ಮನವಿಯನ್ನು ಜಿಲ್ಲಾಡಳಿತಕ್ಕೆ ಸಲ್ಲಿಸಿದರು.
“ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯಲ್ಲಿ ಕಾನೂನು ಉಲ್ಲಂಘನೆ ಮಾಡಲಾಗಿದ್ದು, ಇದಕ್ಕೆ ಕಾರಣರಾದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ವಜಾಗೊಳಿಸಿ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು” ಎಂದು ಒತ್ತಾಯಿಸಿದರು .
ಚುನಾವಣಾ ಆಯೋಗವು ಕೈಗೊಂಡಿರುವ ಎಸ್ಐಆರ್ ಪ್ರಕ್ರಿಯೆಯಲ್ಲಿ ಹಲವು ಲೋಪದೋಷಗಳಿದ್ದು, ಮತದಾರರ ಹಕ್ಕುಗಳಿಗೆ ಧಕ್ಕೆಯಾಗುವ ಆತಂಕ ಎದುರಾಗಿದೆ. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶಕುಮಾರ ಅವರು ಇತರ ಇಬ್ಬರು ಚುನಾವಣಾ ಆಯುಕ್ತರ ಅರಿವು ಮತ್ತು ಸಮ್ಮತಿಯಿಲ್ಲದೆ ಏಕಪಕ್ಷೀಯವಾಗಿ ನಿರ್ಧಾರಗಳನ್ನು ಕೈಗೊಂಡಿದ್ದಾರೆ ಎಂಬ ಆರೋಪಗಳು ಮಾಧ್ಯಮ ವರದಿಗಳ ಮೂಲಕ ಬಹಿರಂಗವಾಗಿವೆ” ಸಮಿತಿ ಆರೋಪಿಸಿದೆ.
ದೇಶದಾದ್ಯಂತ 13 ಕೋಟಿಗೂ ಹೆಚ್ಚು ಮತದಾರರ ಹಕ್ಕುಗಳಿಗೆ ಧಕ್ಕೆಯಾಗಿದೆ. ಎಸ್ಐಆರ್ ಪ್ರಕ್ರಿಯೆಯಲ್ಲಿನ ಲೋಪದೋಷಗಳ ಕುರಿತು ಸುಪ್ರೀಂ ಕೋರ್ಟ್ನಲ್ಲಿ ಸಲ್ಲಿಕೆಯಾಗಿರುವ ಅರ್ಜಿಗಳ ಹಿನ್ನೆಲೆಯಲ್ಲಿ ಸಮಗ್ರ ಪರಿಶೀಲನೆ ನಡೆಸಿ, ಮತದಾರರ ಹಕ್ಕುಗಳನ್ನು ರಕ್ಷಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶಕುಮಾರ ಅವರನ್ನು ವಜಾಗೊಳಿಸಿ, ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು. ಎಸ್ಐಆರ್ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಬೇಕು. ಮುಂಬರುವ ಚುನಾವಣೆಗಳನ್ನು ತಡೆಹಿಡಿಯಬೇಕು. 2023ರ ಚುನಾವಣಾ ಆಯುಕ್ತರ ನೇಮಕಾತಿ ಕಾಯ್ದೆಯನ್ನು ರದ್ದುಗೊಳಿಸಿ, ಸ್ವತಂತ್ರ ಮತ್ತು ವಿಶ್ವಾಸಾರ್ಹ ಆಯ್ಕೆ ಪ್ರಕ್ರಿಯೆ ರೂಪಿಸಬೇಕು ಎಂದು ಸಮಿತಿ ಒತ್ತಾಯಿಸಿದೆ.
ಇದನ್ನೂ ಓದಿ : ₹3 ಲಕ್ಷ ಲಂಚ: ಯಾದಗಿರಿ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ, ಚಾಲಕ ಬಂಧನ
ಪ್ರತಿಭಟನೆಯಲ್ಲಿ ಸಂಘಟನೆ ರಾಜ್ಯ ಸಂಚಾಲಕ ಡಿ.ಜಿ.ಸಾಗರ್ ಮುಖಂಡರಾದ ಸುರೇಶ ಹಾದಿಮನಿ, ಉಮೇಶ ನರೋಣಾ, ರೇವಣಸಿದ್ಧ ಜಾಲಿ, ಕೃಷ್ಣಪ್ಪ ಕರಣಿಕ, ಸುಭಾಷ ಡಾಂಗೆ, ದೇವೆಂದ್ರ ದೊಡ್ಡಮನಿ, ಮೈಲಾರಿ ದೊಡಮನಿ, ರಮೇಶ ಪಾಳಾ ಸೇರಿದಂತೆ ಅನೇಕರಿದ್ದರು.





