ರಾಜ್ಯಾದ್ಯಂತ ಏಪ್ರಿಲ್ 26ರವರೆಗೂ ಮಳೆ ಮುಂದುವರೆಯಲಿದೆ. ಬೆಳಗಾವಿ, ಧಾರವಾಡ, ಬಾಗಲಕೋಟೆ, ಗದಗ, ಹಾವೇರಿ, ವಿಜಯಪುರ, ಬೀದರ್, ಕಲಬುರಗಿ, ಕೊಪ್ಪಳ, ಯಾದಗಿರಿ, ಗದಗ ಜಿಲ್ಲೆಗಳಲ್ಲಿ ಏಪ್ರಿಲ್ 26ರವರೆಗೂ ಮಳೆಯಾಗಲಿದ್ದು, ಇನ್ನು ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಚಾಮರಾಜನಗರ, ಮೈಸೂರು, ಬಳ್ಳಾರಿ, ವಿಜಯನಗರ, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಲ್ಲಿ ಮತ್ತು ದಕ್ಷಿಣ ಕನ್ನಡ, ಉಡುಪಿ ಭಾಗಗಳಲ್ಲಿ ಕೂಡ ಏ.26ರವರೆಗೆ ಮಳೆಯಾಗುವ ಮುನ್ಸೂಚನೆ ಇದೆ. ಕಲಬುರಗಿ, ಯಾದಗಿರಿ, ಬೀದರ್, ರಾಯಚೂರು ಭಾಗಗಳಲ್ಲಂತೂ ತಾಪಮಾನ 40 ಡಿಗ್ರಿ ಸೆಲ್ಸಿಯಸ್ ದಾಟಿದ್ದು, ಜನರು ಮಳೆಗಾಗಿಯೇ ಕಾಯುತ್ತಿದ್ದಾರೆ. ಅಂತೆಯೇ ಈ ವಾರಪೂರ್ತಿ ಇಳೆ ತಂಪಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದಲ್ಲಿ ಇಂದು ಕೂಡ ಮಳೆಯಾಗಲಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಒಂದೆರಡು ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಇದರೊಂದಿಗೆ ದಕ್ಷಿಣ ಕನ್ನಡ ಕೆಲವು ಸ್ಥಳಗಳು ಮತ್ತು ಉತ್ತರ ಕನ್ನಡದಲ್ಲಿ ಒಣಹವೆ ವಾತಾವರಣ ಇರಲಿದೆ. ಇನ್ನು ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ ಜಿಲ್ಲೆಗಳಲ್ಲಿ ಒಂದು ಅಥವಾ 2 ಸ್ಥಳಗಳಲ್ಲಿ ಗಾಳಿ ಸಹಿತ ಮಳೆಯಾಗಬಹುದು. ಬೆಳಗಾವಿ, ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಗಂಟೆಗೆ 30-40 ಕಿಮೀ ವೇಗದಲ್ಲಿ ಗುಡುಗು ಸಹಿತ ಮಳೆಯಾಗುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದಲ್ಲಿ ಒಂದೆಡೆ ತಾಪಮಾನ ಹೆಚ್ಚಾಗುತ್ತಿದ್ದರೆ, ಇನ್ನೊಂದೆಡೆ ಮಳೆಯೂ ಆಗುತ್ತಿದೆ. ಬೆಳಗಾವಿ, ಯಾದಗಿರಿ, ಧಾರವಾಡ, ಚಿಕ್ಕಮಗಳೂರು, ಕಲಬುರಗಿ, ಬೀದರ್, ಕೊಡಗು, ಶಿವಮೊಗ್ಗ ಭಾಗಗಳಲ್ಲಿ ನಿನ್ನೆ ಭಾರೀ ಮಳೆಯಾಗಿದೆ. ಅದರಲ್ಲೂ ಕಲಬುರಗಿ ಮತ್ತು ಯಾದಗಿರಿಯ ಹಲವು ಭಾಗಗಳಲ್ಲಿ ಹೆಚ್ಚಿನ ಮಳೆಯಾಗಿದೆ. ಆದರೆ ಕರಾವಳಿ ಭಾಗದಲ್ಲಿ ಮೋಡ ಕವಿದ ವಾತಾವರಣವಿದ್ದರೂ, ಮಳೆಯಾಗಿಲ್ಲ.
ಇನ್ನು ಬೆಂಗಳೂರಿನಲ್ಲಿ ಸದ್ಯಕ್ಕಂತೂ ಮಳೆಯ ಮುನ್ಸೂಚನೆ ಇಲ್ಲ. ಆದರೆ ನಗರದಲ್ಲಿ ಗರಿಷ್ಠ ತಾಪಮಾನದಲ್ಲಿ ಹೆಚ್ಚಳವಾಗಲಿದೆ. ಸುಮಾರು 2-3 ಡಿಗ್ರಿ ಸೆಲ್ಸಿಯಸ್‌ಗಳಷ್ಟು ಹೆಚ್ಚಳವಾಗಬಹುದು ಎನ್ನಲಾಗಿದೆ. ಸದ್ಯದ ಮಟ್ಟಿಗೆ ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 36 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ಇದೆ.
ರಾಜ್ಯಾದ್ಯಂತ ತಾಪಮಾನದಲ್ಲಿ ಏರಿಕೆಯಾಗಲಿದೆ. ಮುಂದಿನ 5 ದಿನಗಳವರೆಗೂ ಕರಾವಳಿ ಭಾಗದಲ್ಲಿ ಬಿಸಿ ಮತ್ತು ತೇವಾಂಶದ ವಾತಾವರಣವೇ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯಾದ್ಯಂತ ಗರಿಷ್ಠ ತಾಪಮಾನ 31.7 ಡಿಗ್ರಿ ಸೆಲ್ಸಿಯಸ್‌ನಿಂದ 41.7 ಡಿಗ್ರಿ ಸೆಲ್ಸಿಯಸ್‌ವರೆಗೆ ಇದೆ. ಇನ್ನು ಕಲಬುರಗಿಯಲ್ಲಿ ಗರಿಷ್ಠ ತಾಪಮಾನ 41.7 ಡಿಗ್ರಿ ಸೆಲ್ಸಿಯಸ್ ಇತ್ತು. ಉತ್ತರ ಒಳನಾಡಿನ ಅನೇಕ ಭಾಗಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತಲೂ 1.6ರಿಂದ 3 ಡಿಗ್ರಿ ಸೆಲ್ಸಿಯಸ್‌ವರೆಗೆ ಹೆಚ್ಚಿತ್ತು. ಹಾಗೆಯೇ, ಸ್ವಲ್ಪ ಭಾಗಗಳಲ್ಲಿ ಸಾಮಾನ್ಯಕ್ಕಿಂತಲೂ -3(ಮೈನಸ್) ಡಿಗ್ರಿ ಸೆಲ್ಸಿಯಸ್ ಕಡಿಮೆಯೂ ಇತ್ತು.
ಈ ಸುದ್ದಿ ಓದಿದ್ದೀರಾ? ವಿಜಯಪುರ | ಶಾಮನೂರ ಭಾಷಣದ ಮೇಲೆ ಹೈಕಮಾಂಡ್ ಕ್ರಮ ಕೈಗೊಳ್ಳಲಿಲ್ಲವೇಕೆ?: ಮೌಲಾನ ರಿಜ್ವಾನ್
“ರಾಜ್ಯದಲ್ಲಿ ಅನೇಕ ಭಾಗಗಳಲ್ಲಿ ಮಳೆಯಾಗುತ್ತಿದ್ದರೂ, ಬಿಸಿಲಿನ ತೀವ್ರತೆ ವೀಪರೀತವಾಗಿದೆ. ಅದರಲ್ಲೂ ಉತ್ತರ ಕರ್ನಾಟಕದ ಜಿಲ್ಲೆಗಳು ಬಿಸಿಲಿಗೆ ಅಕ್ಷರಶಃ ಕುದಿಯುತ್ತಿವೆ. ಹೀಗಾಗಿ ಜನರು ಎಚ್ಚರಿಕೆಯಿಂದ ಇರಬೇಕು. ಅನಗತ್ಯವಾಗಿ ಮನೆಯಿಂದ ಹೊರಬರಬೇಡಿ” ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.





