ಪಶ್ಚಿಮ ಬಂಗಾಳದಲ್ಲಿ ಇತ್ತೀಚೆಗೆ ಮುಕ್ತಾಯಗೊಂಡ ವಿಧಾನಸಭಾ ಚುನಾವಣೆಗೂ ಮುನ್ನ ನಡೆದ ‘ವಿಶೇಷ ತೀವ್ರ ಪರಿಷ್ಕರಣೆ'(SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ಕೈಬಿಟ್ಟಿದ್ದರಿಂದ, ರಾಜ್ಯದ ಹಲವು ವಿಧಾನಸಭಾ ಕ್ಷೇತ್ರಗಳ ಚುನಾವಣಾ ಫಲಿತಾಂಶದ ಮೇಲೆ ಪ್ರಭಾವ ಬೀರಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಇತರರು ಹೊಸ ಅರ್ಜಿಗಳನ್ನು ಸಲ್ಲಿಸಲು ಸುಪ್ರೀಂ ಕೋರ್ಟ್ ಇಂದು(ಮೇ.11) ಅವಕಾಶ ನೀಡಿದೆ.
ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಹಾಗೂ ನ್ಯಾಯಮೂರ್ತಿ ಜಾಯ್‌ಮಾಲ್ಯ ಬಾಗ್ಚಿ ಅವರ ನೇತೃತ್ವದ ಪೀಠವು ಈ ಎಸ್‌ಐಆರ್ ಪ್ರಕ್ರಿಯೆಗೆ ಸಂಬಂಧಿಸಿದ ಅರ್ಜಿಗಳ ವಿಚಾರಣೆ ನಡೆಸಿತು. ವಿಚಾರಣೆ ವೇಳೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪರ ವಾದ ಮಂಡಿಸಿದ ಹಿರಿಯ ವಕೀಲ ಹಾಗೂ ಸಂಸದ ಕಲ್ಯಾಣ್ ಬ್ಯಾನರ್ಜಿ, ಪರಿಷ್ಕರಣೆ ಪ್ರಕ್ರಿಯೆಯು ಪಶ್ಚಿಮ ಬಂಗಾಳದ ಚುನಾವಣಾ ಫಲಿತಾಂಶಗಳ ಮೇಲೆ ಗಂಭೀರ ಪರಿಣಾಮ ಬೀರಿದೆ ಎಂದು ನ್ಯಾಯಪೀಠದ ಗಮನಕ್ಕೆ ತಂದರು.
“ರಾಜ್ಯದ 31 ವಿಧಾನಸಭಾ ಕ್ಷೇತ್ರಗಳಲ್ಲಿ ಗೆಲುವಿನ ಅಂತರವು, ‘ಎಸ್‌ಐಆರ್’ ಪ್ರಕ್ರಿಯೆಯಲ್ಲಿ ಮತದಾರರ ಪಟ್ಟಿಯಿಂದ ಕೈಬಿಡಲಾದ ಒಟ್ಟು ಮತದಾರರ ಸಂಖ್ಯೆಗಿಂತ ಕಡಿಮೆಯಿದೆ” ಎಂದು ಕಲ್ಯಾಣ್ ಬ್ಯಾನರ್ಜಿ ವಾದಿಸಿದರು. ಒಂದು ನಿರ್ದಿಷ್ಟ ಕ್ಷೇತ್ರದ ಉದಾಹರಣೆಯನ್ನು ನೀಡಿದ ಅವರು, “ಆ ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿಯು ಕೇವಲ 862 ಮತಗಳ ಅಂತರದಿಂದ ಸೋತಿದ್ದಾರೆ. ಆದರೆ, ಅದೇ ಕ್ಷೇತ್ರದಲ್ಲಿ 5,000 ಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಲಾಗಿತ್ತು” ಎಂದು ವಿವರಿಸಿದರು.
ಇದನ್ನು ಓದಿದ್ದೀರಾ? ಗಲ್ಲಾಪೆಟ್ಟಿಗೆಯಿಂದ ಮತಪೆಟ್ಟಿಗೆ; ಜೋಸೆಫ್ ವಿಜಯ್ ಎಂಬ ಹೀರೋವಿನ ಸೂಪರ್ ಡ್ಯೂಪರ್ ಹಿಟ್ ರಾಜಕೀಯ ಪ್ರವೇಶ!
“ರಾಜ್ಯದಲ್ಲಿ ಟಿಎಂಸಿ ಮತ್ತು ಬಿಜೆಪಿ ನಡುವಿನ ಒಟ್ಟು ಮತಗಳ ಅಂತರವು ಸುಮಾರು 32 ಲಕ್ಷವಿದ್ದರೆ, ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿದ್ದರ ವಿರುದ್ಧ ಸಲ್ಲಿಕೆಯಾಗಿರುವ ಮೇಲ್ಮನವಿಗಳ ಸಂಖ್ಯೆ 35 ಲಕ್ಷಕ್ಕೂ ಹೆಚ್ಚಿದೆ. ಈ ಮೇಲ್ಮನವಿಗಳ ಇತ್ಯರ್ಥಕ್ಕೆ ವರ್ಷಗಳೇ ಬೇಕಾಗಬಹುದು ಎಂಬ ಆತಂಕವಿದೆ” ಎಂದು ಟಿಎಂಸಿ ಸಂಸದರು ಕಳವಳ ವ್ಯಕ್ತಪಡಿಸಿದರು.
ಇದೇ ವೇಳೆ ನ್ಯಾಯಪೀಠಕ್ಕೆ ಮಾಹಿತಿ ನೀಡಿದ ಮತ್ತೋರ್ವ ಹಿರಿಯ ವಕೀಲೆ ಮೇನಕಾ ಗುರುಸ್ವಾಮಿ, “ಪ್ರಸ್ತುತ ಇರುವ ವೇಗದಲ್ಲಿ ನೋಡಿದರೆ, ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಹಾಗೂ ಕೈಬಿಟ್ಟಿರುವ ಪ್ರಕ್ರಿಯೆಗೆ ಸಂಬಂಧಿಸಿದಂತೆ ಬಾಕಿ ಇರುವ ಮೇಲ್ಮನವಿಗಳನ್ನು ವಿಲೇವಾರಿ ಮಾಡಲು ಮೇಲ್ಮನವಿ ನ್ಯಾಯಮಂಡಳಿಗಳಿಗೆ ಸುಮಾರು ನಾಲ್ಕು ವರ್ಷಗಳೇ ಬೇಕಾಗಬಹುದು” ಎಂದು ತಿಳಿಸಿದರು.
ಈ ವಾದಗಳಿಗೆ ಪ್ರತಿಕ್ರಿಯಿಸಿದ ಸುಪ್ರೀಂ ಕೋರ್ಟ್ ಪೀಠ, “ಒಂದು ವೇಳೆ ಕ್ಷೇತ್ರಗಳಲ್ಲಿ ಗೆಲುವಿನ ಅಂತರವು ಕೈಬಿಡಲಾದ ಮತಗಳ ಸಂಖ್ಯೆಗಿಂತ ಕಡಿಮೆಯಿದ್ದರೆ, ಅಂಥವರು ನ್ಯಾಯಾಲಯದ ಮುಂದೆ ಹೊಸ ಅರ್ಜಿಗಳನ್ನು ಸಲ್ಲಿಸಬಹುದು” ಎಂದು ಸೂಚಿಸಿತು. ಮೇಲ್ಮನವಿಗಳ ಇತ್ಯರ್ಥದ ವ್ಯವಸ್ಥೆಯನ್ನು ಇನ್ನಷ್ಟು ಸುಧಾರಿಸುವ ಅಗತ್ಯವಿದೆ ಮತ್ತು ಅಂತಹ ಪ್ರಕರಣಗಳ ಸಕಾಲಿಕ ವಿಲೇವಾರಿ ಅತ್ಯಗತ್ಯ ಎಂದು ಪೀಠವು ಇದೇ ವೇಳೆ ಅಭಿಪ್ರಾಯಪಟ್ಟಿತು.




