ದೀಪಾವಳಿ ಹಬ್ಬದ ಸಂಭ್ರಮದಲ್ಲಿ ತವರೂರಿಗೆ ಮರಳುವ ಪ್ರಯಾಣಿಕರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಜಯಪುರ ವಿಭಾಗವು ವಿಶೇಷ ಸಾರಿಗೆ ವ್ಯವಸ್ಥೆ ಮಾಡಿದೆ.
ಬೆಂಗಳೂರಿನಿಂದ ವಿಜಯಪುರ ಜಿಲ್ಲಾ ಕೇಂದ್ರ ಸೇರಿದಂತೆ ಜಿಲ್ಲೆಯ ವಿವಿಧ ತಾಲ್ಲೂಕು ಕೇಂದ್ರಗಳಿಗೆ ನವೆಂಬರ್ 5ರಿಂದ 7ರವರೆಗೆ ಹೆಚ್ಚುವರಿ ವಿಶೇಷ ಬಸ್‌ಗಳನ್ನು ಕಾರ್ಯಾಚರಣೆಗೊಳಿಸಲಾಗುತ್ತಿದೆ.
ಹಬ್ಬದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ನೆಲೆಸಿರುವ ವಿಜಯಪುರ ಜಿಲ್ಲೆಯ ಜನರು ಹೆಚ್ಚಿನ ಸಂಖ್ಯೆಯಲ್ಲಿ ಸ್ವಗ್ರಾಮಗಳಿಗೆ ಪ್ರಯಾಣಿಸುವ ನಿರೀಕ್ಷೆಯಿದೆ. ಈ ಸಂದರ್ಭದಲ್ಲಿ ಪ್ರಯಾಣಿಕರ ದಟ್ಟಣೆ ನಿಯಂತ್ರಿಸುವುದು ಹಾಗೂ ಸುಗಮ ಪ್ರಯಾಣಕ್ಕೆ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ನಿಗಮವು ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಮಾಡಿದೆ.
ನವೆಂಬರ್ 5ರಂದು 29, ನವೆಂಬರ್ 6ರಂದು 58 ಹಾಗೂ ನವೆಂಬರ್ 7ರಂದು 31 ಹೆಚ್ಚುವರಿ ಬಸ್‌ಗಳು ಬೆಂಗಳೂರಿನಿಂದ ವಿಜಯಪುರ ಜಿಲ್ಲೆಯ ವಿವಿಧ ಭಾಗಗಳಿಗೆ ಸಂಚರಿಸಲಿವೆ.
ಮೂರು ದಿನಗಳಲ್ಲಿ ಒಟ್ಟು 118 ವಿಶೇಷ ಬಸ್‌ಗಳು ಪ್ರಯಾಣಿಕರ ಸೇವೆಗೆ ಲಭ್ಯವಾಗಲಿವೆ.ಪ್ರಯಾಣಿಕರು ಕೊನೆಯ ಕ್ಷಣದ ಟಿಕೆಟ್ ಕಾಯ್ದಿರಿಸುವ ಗಡಿಬಿಡಿ ತಪ್ಪಿಸಿಕೊಳ್ಳಲು ಈಗಾಗಲೇ ಮುಂಗಡ ಟಿಕೆಟ್ ಕಾಯ್ದಿರಿಸುವ ವ್ಯವಸ್ಥೆಯನ್ನೂ ಕಲ್ಪಿಸಲಾಗಿದೆ.ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಮಾಡಿರುವ ಈ ವಿಶೇಷ ಸಾರಿಗೆ ವ್ಯವಸ್ಥೆಯನ್ನು ಸದುಪಯೋಗಪಡಿಸಿಕೊಳ್ಳುವಂತೆ ನಿಗಮದ ವಿಜಯಪುರ ವಿಭಾಗ ತಿಳಿಸಿದೆ.




